
ಮೊಹಾಲಿ(ಮಾ.05): ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಮೊಹಾಲಿ ಟೆಸ್ಟ್ (Mohali Test) ಪಂದ್ಯ ಟೀಂ ಇಂಡಿಯಾ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಪಾಲಿನ 100ನೇ ಟೆಸ್ಟ್ ಪಂದ್ಯವಾಗಿದೆ. ಮೊಹಾಲಿ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 100 ಟೆಸ್ಟ್ ಪಂದ್ಯವನ್ನಾಡಿದ ಭಾರತದ 12ನೇ ಕ್ರಿಕೆಟಿಗ ಎನ್ನುವ ಕೀರ್ತಿಗೆ ಭಾಜನರಾಗಿದ್ದಾರೆ. ಇದೀಗ ಭಾರತದ ಇನಿಂಗ್ಸ್ ಮುಗಿಸಿ, ಫೀಲ್ಡಿಂಗ್ ಮಾಡಲು ಬಂದ ವಿರಾಟ್ ಕೊಹ್ಲಿಗೆ ರೋಹಿತ್ ಪಡೆ ಗಾರ್ಡ್ ಆಫ್ ಆನರ್ ನೀಡುವ ಮೂಲಕ ಗೌರವ ಸೂಚಿಸಿದೆ.
ಹೌದು, ಇಲ್ಲಿನ ಪಂಜಾಬ್ ಕ್ರಿಕೆಟ್ ಸಂಸ್ಥೆಯ ಐ.ಎಸ್. ಬಿಂದ್ರಾ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡು ರವೀಂದ್ರ ಜಡೇಜಾ (Ravindra Jadeja) ಬಾರಿಸಿದ ಆಕರ್ಷಕ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 574 ರನ್ ಬಾರಿಸಿ ಎರಡನೇ ದಿನದಾಟದಲ್ಲಿ ಚಹಾ ವಿರಾಮಕ್ಕೂ ಮುನ್ನ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಫೀಲ್ಡಿಂಗ್ ಮಾಡಲಿಳಿದ ಭಾರತ ತಂಡವು ನೂರನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಮಾಜಿ ನಾಯಕನಿಗೆ ಸರ್ಫ್ರೈಸ್ ನೀಡುವ ಮೂಲಕ ಗೌರವ ಸಲ್ಲಿಸಿದೆ. ವಿರಾಟ್ ಕೊಹ್ಲಿ ಭಾರತ ಕ್ರಿಕೆಟ್ ಕಂಡಂತ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಸರಣಿ ಮುಕ್ತಾಯವಾಗುತ್ತಿದ್ದಂತೆಯೇ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದರು.
ವಿರಾಟ್ ಕೊಹ್ಲಿ ಕ್ಷೇತ್ರರಕ್ಷಣೆ ಮಾಡಲು ಮೈದಾನಕ್ಕಿಳಿಯುತ್ತಿದ್ದಂತೆಯೇ ಭಾರತ ಕ್ರಿಕೆಟ್ ತಂಡದ ಆಟಗಾರರು ಇಕ್ಕೆಲಗಳಲ್ಲಿ ನಿಂತು ಚಪ್ಪಾಳೆ ತಟ್ಟುವ ಮೂಲಕ ಗಾರ್ಡ್ ಆಫ್ ಆನರ್ ನೀಡಿ ಸ್ವಾಗತಿಸಿದರು. ಆಗ ಕೊಹ್ಲಿ ನಗುತ್ತಲೇ ಖುಷಿಯಿಂದ ಆಟಗಾರರ ಗೌರವವನ್ನು ಸ್ವೀಕರಿಸಿದರು. ಈ ವಿಡಿಯೋವನ್ನು ಬಿಸಿಸಿಐ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.
100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ವಿರಾಟ್ ಕೊಹ್ಲಿಗೆ ಸನ್ಮಾನ:
ಭಾರತ ಪರ ನೂರನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ವಿರಾಟ್ ಕೊಹ್ಲಿಗೆ ಶುಕ್ರವಾರ ಪಂದ್ಯ ಆರಂಭಕ್ಕೂ ಮುನ್ನ ಭಾರತ ಕ್ರಿಕೆಟ್ ತಂಡವು ಸನ್ಮಾನಿಸಿದೆ. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿಗೆ ಪತ್ನಿ ಅನುಷ್ಕಾ ಶರ್ಮಾ ಸಾಥ್ ನೀಡಿದರು. ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ (Rahul Dravid), ವಿರಾಟ್ ಕೊಹ್ಲಿಗೆ 100ನೇ ಟೆಸ್ಟ್ ಪಂದ್ಯದ ಸ್ಮರಣಾರ್ಥ ವಿಶೇಷ ಕ್ಯಾಪ್ ನೀಡುವ ಮೂಲಕ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಅವರು ಇಂದು ಬೆಳಗ್ಗೆ ಏನನ್ನಿಸುತ್ತಿದೆ ನಿಮಗೆ ಎಂದು ಕೇಳಿದರು. ನಾನು ಮತ್ತೊಮ್ಮೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುತ್ತಿದ್ದೆನೇನೋ ಎಂದೆನಿಸುತ್ತಿದೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ ನನ್ನೊಳಗೆ ಸಂಚಲನವಾದಂತೆ ಆಗುತ್ತಿದೆ ಎಂದು ಹೇಳಿದ್ದರು.
Ind vs SL: ಜಡೇಜಾ ಸ್ಪೋಟಕ ಬ್ಯಾಟಿಂಗ್, 574 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡ ಭಾರತ
ಮಯಾಂಕ್ ಅಗರ್‌ವಾಲ್ (Mayank Agarwal) ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಮಾಜಿ ನಾಯಕ ವಿರಾಟ್ ಕೊಹ್ಲಿ ಆಕರ್ಷಕ 5 ಬೌಂಡರಿ ಸಹಿತ 45 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿ ಕಳೆದ ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ವಿಫಲವಾಗುತ್ತಾ ಬಂದಿದ್ದಾರೆ. ನೂರನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸಬಹುದು ಎಂದು ಅವರ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ ಅರ್ಧಶತಕ ಬಾರಿಸುವ ಮುನ್ನವೇ ವಿಕೆಟ್ ಒಪ್ಪಿಸಿದ್ದರು. ಇನ್ನು ಎರಡನೇ ಇನಿಂಗ್ಸ್‌ನಲ್ಲಾದರೂ ಕೊಹ್ಲಿ ಮೂರಂಕಿ ಮೊತ್ತ ದಾಖಲಿಸುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.