
ಅಹಮದಾಬಾದ್(ಫೆ.11): ಮತ್ತೊಮ್ಮೆ ಅಗ್ರ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯದ ಹೊರತಾಗಿಯೂ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ (Shreyas Iyer), ರಿಷಭ್ ಪಂತ್ (Rishabh Pant) ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ವೆಸ್ಟ್ ಇಂಡೀಸ್ (West Indies Cricket) ವಿರುದ್ದದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (Team India) 265 ರನ್ ಬಾರಿಸಿದ್ದು, ಕೆರಿಬಿಯನ್ ಪಡೆಗೆ ಸವಾಲಿನ ಗುರಿ ನೀಡಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಇನಿಂಗ್ಸ್‌ನ 4ನೇ ಓವರ್‌ನಲ್ಲಿಯೇ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಯನ್ನು (Virat Kohli) ಬಲಿ ಪಡೆಯುವಲ್ಲಿ ವೇಗಿ ಅಲ್ಜೆರಿ ಜೋಸೆಫ್ ಯಶಸ್ವಿಯಾದರು. ರೋಹಿತ್ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ ಶೂನ್ಯ ಸುತ್ತಿ ಜೋಸೆಫ್‌ಗೆ ಎರಡನೇ ಬಲಿಯಾದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಶಿಖರ್ ಧವನ್ (Shikhar Dhawan) ಬ್ಯಾಟಿಂಗ್ ಕೇವಲ 10 ರನ್‌ಗಳಿಗೆ ಸೀಮಿತವಾಯಿತು.
ಶತಕದ ಜತೆಯಾಟ ನಿಭಾಯಿಸಿದ ಅಯ್ಯರ್-ಪಂತ್: ಎರಡನೇ ಪಂದ್ಯದಂತೆ ಟೀಂ ಇಂಡಿಯಾ ಕೇವಲ 43 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸಮಯೋಚಿತ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. 4ನೇ ವಿಕೆಟ್‌ಗೆ ಈ ಜೋಡಿ 110 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಚುರುಕಿನ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್ 47 ಎಸೆತಗಳನ್ನು ಎದುರಿಸಿ ಏಕದಿನ ಕ್ರಿಕೆಟ್ ವೃತ್ತಿಜೀವನದ 5ನೇ ಅರ್ಧಶತಕ ಬಾರಿಸಿದರು. ಅಂತಿಮವಾಗಿ ಪಂತ್ 54 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 56 ರನ್ ಬಾರಿಸಿ ಹೇಡನ್ ವಾಲ್ಷ್ ಬೌಲಿಂಗ್‌ನಲ್ಲಿ ಶಾಯ್ ಹೋಪ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.
Ind vs WI: ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ
ಇನ್ನು ಸೂರ್ಯಕುಮಾರ್ ಯಾದವ್ ಹೆಚ್ಚುಹೊತ್ತು ಕ್ರೀಸ್‌ನಲ್ಲಿರಲು ಫ್ಯಾಬಿನ್ ಅಲೆನ್ ಅವಕಾಶ ನೀಡಲಿಲ್ಲ. ಸೂರ್ಯ 6 ರನ್ ಬಾರಿಸಿ ಸಮರ್ಥ್ ಬ್ರೂಕ್ಸ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ ಶ್ರೇಯಸ್ ಅಯ್ಯರ್ 80 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಒಟ್ಟು 111 ಎಸೆತಗಳನ್ನು ಎದುರಿಸಿದ ಶ್ರೇಯಸ್ ಅಯ್ಯರ್ 9 ಬೌಂಡರಿ ಸಹಿತ 80 ರನ್ ಬಾರಿಸಿ ಹೇಡನ್ ವಾಲ್ಷ್‌ಗೆ ಎರಡನೇ ಬಲಿಯಾದರು.
ಒಂದು ಹಂತದಲ್ಲಿ 187 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಆತಂಕಕ್ಕೊಳಗಾಗಿದ್ದ ಭಾರತ ತಂಡಕ್ಕೆ ಕೆಳ ಕ್ರಮಾಂಕದಲ್ಲಿ ದೀಪಕ್ ಚಹರ್ ಹಾಗೂ ವಾಷಿಂಗ್ಟನ್ ಸುಂದರ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ದೀಪಕ್ ಚಹರ್ 38 ಎಸೆತಗಳನ್ನು 38 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ವಾಷಿಂಗ್ಟನ್ ಸುಂದರ್ 34 ಎಸೆತಗಳನ್ನು ಎದುರಿಸಿ 33 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 260ರ ಗಡಿ ದಾಟಿಸಿದರು.
ಸಂಕ್ಷಿಪ್ತ ಸ್ಕೋರ್
ಭಾರತ: 265/10
ಶ್ರೇಯಸ್ ಅಯ್ಯರ್: 80
ರಿಷಭ್ ಪಂತ್: 56
ಜೇಸನ್ ಹೋಲ್ಡರ್: 34/4
(*ಭಾರತ ತಂಡದ ಬ್ಯಾಟಿಂಗ್ ಮುಕ್ತಾಯದ ವೇಳೆಗೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.