
ಕೋಲ್ಕತಾ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ವೇಳೆಗೆ ಆತಿಥೇಯ ಟೀಂ ಇಂಡಿಯಾ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಎರಡನೇ ದಿನದಾಟದಂತ್ಯಕ್ಕೆ ದಕ್ಷಿಣ ಆಫ್ರಿಕಾ ತಂಡವು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 93 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ಒಟ್ಟಾರೆ 63 ರನ್‌ಗಳ ಸಾಧಾರಣ ಮುನ್ನಡೆ ಕಾಯ್ದುಕೊಂಡಿದೆ. ನಾಯಕ ತೆಂಬಾ ಬವುಮಾ 29 ರನ್ ಗಳಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಭಾರತ ಒಂದು ವಿಕೆಟ್ ಕಳೆದುಕೊಂಡು 37 ರನ್ ಬಾರಿಸಿತ್ತು. ಎರಡನೇ ದಿನದಾಟದ ವೇಳೆ ಪಿಚ್ ಸಾಕಷ್ಟು ಟರ್ನ್ ಹಾಗೂ ಬೌನ್ಸ್ ಕಾಣುತಿತ್ತು. ಇದರ ಲಾಭ ಪಡೆದ ಹರಿಣಗಳ ಬೌಲರ್‌ಗಳು, ಭಾರತ ದೊಡ್ಡ ಮೊತ್ತ ಕಲೆಹಾಕಲು ಅವಕಾಶ ನೀಡಲಿಲ್ಲ. ಆರಂಭಿಕ ಬ್ಯಾಟರ್ ಕೆ ಎಲ್ ರಾಹುಲ್ 39 ರನ್ ಗಳಿಸಿದ್ದೇ ಟೀಂ ಇಂಡಿಯಾ ಪರ ದಾಖಲಾದ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿಕೊಂಡಿತು. ಇನ್ನುಳಿದಂತೆ ವಾಷಿಂಗ್ಟನ್ ಸುಂದರ್ 29, ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ತಲಾ 27 ರನ್ ಸಿಡಿಸಿ ತಂಡಕ್ಕೆ ಆಸರೆಯಾದರು. ಅಂತಿಮವಾಗಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 189 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ 30 ರನ್‌ಗಳ ಅಲ್ಪ ಮುನ್ನಡೆ ಗಳಿಸಿತು.
ಇನ್ನು ಎರಡನೇ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು ರವೀಂದ್ರ ಜಡೇಜಾ ಮಾರಕ ದಾಳಿಗೆ ತತ್ತರಿಸಿ ಹೋಯಿತು. ದಕ್ಷಿಣ ಆಫ್ರಿಕಾ ತಂಡವು 60 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಐವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. ನಾಯಕ ತೆಂಬಾ ಬವುಮಾ ಹೊರತುಪಡಿಸಿ ಯಾವೊಬ್ಬ ಬ್ಯಾಟರ್ ಕೂಡಾ ಕನಿಷ್ಠ 20 ರನ್ ಗಡಿ ದಾಟಲು ಸಾಧ್ಯವಾಗಲಿಲ್ಲ. ಬವುಮಾ 78 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 29 ರನ್ ಗಳಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಭಾರತ ಪರ ಮಾರಕ ದಾಳಿ ನಡೆಸಿದ ರವೀಂದ್ರ ಜಡೇಜಾ 29 ರನ್ ನೀಡಿ 4 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 2 ಹಾಗೂ ಅಕ್ಷರ್ ಪಟೇಲ್ ಒಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.