
ರಾಂಚಿ: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಲಖನೌದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ, ಇದೀಗ ಮತ್ತೊಂದು ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಎದುರು ನೋಡುತ್ತಿದೆ. ಎರಡನೇ ಟಿ20 ಪಂದ್ಯವು ಇಂದು ಜಾರ್ಖಂಡ್‌ನ ಜೆಸ್‌ಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ. ಇದೀಗ ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂ ಎರಡನೇ ಟಿ20 ಪಂದ್ಯಕ್ಕೆ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಿದೆ.
ಕಳೆದ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಬ್ಯಾಟಿಂಗ್‌ನಲ್ಲಿ ಪರಾಕ್ರಮ ಮೆರೆದಿತ್ತು. ವಿಂಡೀಸ್ ನೀಡಿದ್ದ ಸವಾಲಿನ ಗುರಿಯನ್ನು ಭಾರತ ತಂಡವು ಅನಾಯಾಸವಾಗಿ ತಲುಪಿತ್ತು. ಹೀಗಿದ್ದೂ, ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್, ದೊಡ್ಡ ಮೊತ್ತ ಕಲೆಹಾಕಲು ಮತ್ತೊಮ್ಮೆ ವಿಫಲವಾಗಿದ್ದರು. 31 ವರ್ಷದ ಸಂಜು ಸ್ಯಾಮ್ಸನ್ ಕಳೆದ ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದಾರೆ. ವೆಸ್ಟ್ ಇಂಡೀಸ್ ಎದುರಿನ ಮೊದಲ ಪಂದ್ಯದಲ್ಲಿ ಸಂಜು ಬ್ಯಾಟಿಂಗ್ ಸದ್ದು ಮಾಡಿರಲಿಲ್ಲ. ಇದೇ ಕಾರಣಕ್ಕೆ ಸಂಜು ಬದಲು 15 ವರ್ಷದ ವೈಭವ್ ಸೂರ್ಯವಂಶಿಗೆ ಅವಕಾಶ ನೀಡಬೇಕು ಎನ್ನುವ ಆಗ್ರಹ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ.
ಆದರೆ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಹೆಡ್ ಕೋಚ್ ಗೌತಮ್ ಗಂಭೀರ್, ಸಂಜು ಸ್ಯಾಮ್ಸನ್ ಬೆನ್ನಿಗೆ ನಿಂತಿದ್ದಾರೆ. ಹೀಗಾಗಿ ಎರಡನೇ ಪಂದ್ಯದಲ್ಲೂ ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್‌ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಹೀಗಾದಲ್ಲಿ ವೈಭವ್ ಸೂರ್ಯವಂಶಿ ಮತ್ತೆ ಬೆಂಚ್ ಕಾಯಿಸಬೇಕಾಗಿ ಬರಬಹುದು.
ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಇನ್ನಿಂಗ್ಸ್ ಆರಂಭಿಸಲಿದ್ದು, ಇಶಾನ್ ಕಿಶನ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಕ್ರಮವಾಗಿ ಮೂರು ಹಾಗೂ ನಾಲ್ಕನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿಳಿಯಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಹಾಗೂ ಆಲ್ರೌಂಡರ್‌ಗಳಾದ ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ ಹಾಗೂ ಅಕ್ಷರ್ ಪಟೇಲ್ ಸ್ಥಾನ ಉಳಿಸಿಕೊಳ್ಳಲಿದ್ದಾರೆ.
ಇನ್ನು ಎರಡನೇ ಟಿ20 ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆಯಾಗುವ ನಿರೀಕ್ಷೆಯಿದೆ. ಕಳೆದ ಪಂದ್ಯದಲ್ಲಿ ಮಯಾಂಕ್ ಯಾದವ್ ನಾಲ್ಕು ಓವರ್ ಬೌಲಿಂಗ್ ಮಾಡಿ ಬರೋಬ್ಬರಿ 40 ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಮಯಾಂಕ್ ಯಾದವ್ ಅವರಿಗೆ ವಿಶ್ರಾಂತಿ ನೀಡಿ ಮತ್ತೋರ್ವ ವೇಗಿ ಪ್ರಿನ್ಸ್ ಯಾದವ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ. ಇನ್ನುಳಿದಂತೆ ಅರ್ಶದೀಪ್ ಸಿಂಗ್ ಭಾರತದ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಲಿದ್ದು, ಏಕೈಕ ತಜ್ಞ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕೂಡ ಸ್ಥಾನ ಉಳಿಸಿಕೊಳ್ಳಲಿದ್ದಾರೆ.
ಎರಡನೇ ಟಿ20 ಪಂದ್ಯಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್.ಕಾಂ ಆಯ್ಕೆ ಮಾಡಿದ ಸಂಭಾವ್ಯ ತಂಡ ಹೀಗಿದೆ:
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಶದೀಪ್ ಸಿಂಗ್, ಪ್ರಿನ್ಸ್ ಯಾದವ್.
ಪಂದ್ಯ ಆರಂಭ: ಸಂಜೆ 7 ಗಂಟೆಗೆ
ನೇರ ಪ್ರಸಾರ: ಸ್ಟಾರ್‌ಸ್ಪೋರ್ಟ್ಸ್, ಹಾಟ್‌ಸ್ಟಾರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.