
ನವದೆಹಲಿ (ಫೆ. 12): ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ಟೂರ್ನಿಯಲ್ಲಿ ಸತತ ಎರಡನೇ ಜಯದ ಸಿಹಿ ಸವಿದಿದ್ದು, ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆರಂಭಿಕ ಆಘಾತಗಳ ನಡುವೆಯೂ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 209 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಆರಂಭಿಕ ಆಟಗಾರ ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆಸಿ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಒಟ್ಟಾರೆಯಾಗಿ 61 ರನ್ ಗಳಿಸಿದ ಅವರು ತಂಡದ ಬೃಹತ್ ಮೊತ್ತಕ್ಕೆ ಅಡಿಪಾಯ ಹಾಕಿದರು. ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ 52 ರನ್ ಗಳಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.
210 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ನಮೀಬಿಯಾ ತಂಡವು ಭಾರತೀಯ ಬೌಲರ್‌ಗಳ ನಿಖರ ದಾಳಿಗೆ ತತ್ತರಿಸಿತು. 18.2 ಓವರ್‌ಗಳಲ್ಲಿ ಕೇವಲ 116 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಶರಣಾಯಿತು. ಬೌಲಿಂಗ್‌ನಲ್ಲಿ ವರುಣ್ ಚಕ್ರವರ್ತಿ 3 ವಿಕೆಟ್ ಕಿತ್ತು ಮಿಂಚಿದರೆ, ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದು ನಮೀಬಿಯಾದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
ಈ ಭರ್ಜರಿ ಗೆಲುವಿನ ಬಳಿಕ ಟೀಮ್ ಇಂಡಿಯಾ ಈಗ ಹೈ-ವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಮೊದಲ ಪಂದ್ಯದಲ್ಲಿ ಅಮೆರಿಕ ಹಾಗೂ ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು ಮಣಿಸಿರುವ ಭಾರತ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲೂ ಇದೇ ಫಾರ್ಮ್ ಮುಂದುವರಿಸುವ ವಿಶ್ವಾಸದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.