
ನವದೆಹಲಿ(ಜ.05): ಕ್ರಿಕೆಟ್ ಜಗತ್ತಿನ ಸಾಂಪ್ರದಾಯಿಕ ಎದುರಾಳಿಗಳೆಂದೇ ಬಿಂಬಿತವಾಗಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಸೆಣಸಾಡಲು ವೇದಿಕೆ ಸಜ್ಜಾಗಿದೆ. 2023ರ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.
2023ರ ಏಷ್ಯಾಕಪ್ ಟೂರ್ನಿಯು ಮುಂಬರುವ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿದ್ದು, ಏಷ್ಯಾ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಗುರುವಾರವಾದ ಇಂದು ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಂದೇ ಗ್ರೂಪ್‌ನಲ್ಲಿ ಸ್ಥಾನ ಪಡೆದಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. ಭಾರತ, ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದ, ಇದೇ ಗುಂಪಿನಲ್ಲಿ ಹಾಲಿ ಚಾಂಪಿಯನ್ ಶ್ರೀಲಂಕಾ ಮತ್ತು ಅರ್ಹತಾ ಸುತ್ತಿನಲ್ಲಿ ವಿಜೇತವಾದ ತಂಡವು ಈ ಗುಂಪಿನಲ್ಲಿ ಸ್ಥಾನ ಪಡೆಯಲಿದೆ. ಇನ್ನು ಮತ್ತೊಂದು ಗುಂಪಿನಲ್ಲಿ ಆಫ್ಘಾನಿಸ್ತಾನ, ಬಾಂಗ್ಲಾದೇಶ ಹಾಗೂ ಅರ್ಹತಾ ಸುತ್ತಿನಲ್ಲಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆಯುವ ತಂಡಗಳು ಈ ಗುಂಪಿನಲ್ಲಿ ಸ್ಥಾನ ಪಡೆದಿವೆ. ಇನ್ನು ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಏಷ್ಯಾಕಪ್ ಟೂರ್ನಿಯು ಏಕದಿನ ಕ್ರಿಕೆಟ್ ಮಾದರಿಯಲ್ಲಿ ಜರುಗಲಿದೆ.
2023ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ಜರುಗಲಿದ್ದು, ಇದರಲ್ಲಿ 6 ಲೀಗ್ ಪಂದ್ಯಗಳು, 6 ಸೂಪರ್ ಸಿಕ್ಸ್ ಪಂದ್ಯಗಳು ನಡೆಯಲಿದೆ. ಸೂಪರ್ 4 ಹಂತದಲ್ಲಿ 6 ಪಂದ್ಯಗಳು ನಡೆಯಲಿದ್ದು, ಸೂಪರ್ 4 ಹಂತದ ವೇಳೆಗೆ ಅಗ್ರ 2 ಸ್ಥಾನ ಪಡೆಯುವ ತಂಡಗಳು ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ.
ಕಳೆದ ವರ್ಷ ಯುಎಇನಲ್ಲಿ ನಡೆದ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದ್ದು ಕಂಡು ಬಂದಿತ್ತು. ಲೀಗ್ ಹಂತದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ದ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಸೂಪರ್ 4 ಹಂತದಲ್ಲಿ ಭಾರತ ವಿರುದ್ದ ಪಾಕಿಸ್ತಾನ ವಿರುದ್ದ ಗೆಲುವಿನ ಕೇಕೆ ಹಾಕಿತು. ಪರಿಣಾಮ ಭಾರತ ಸೂಪರ್ 4 ಹಂತದಲ್ಲೇ ತನ್ನ ಅಭಿಯಾನವನ್ನು ಮುಗಿಸಿತ್ತು. ಇನ್ನು ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಲಂಕಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
Ind vs SL ಲಂಕಾ ಎದುರಿನ ಎರಡನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ..?
ಇನ್ನು 2023ರ ಏಷ್ಯಾಕಪ್ ಟೂರ್ನಿಯು ಎಲ್ಲಿ ಹಾಗೂ ಯಾವಾಗ ನಡೆಯಲಿದೆ ಎನ್ನುವ ಕುರಿತಂತೆ ಯಾವುದೇ ಮಾಹಿತಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿಲ್ಲ. 2023ರ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನ ಆತಿಥ್ಯದ ಹಕ್ಕನ್ನು ಪಡೆದುಕೊಂಡಿದೆ. ಒಂದುವೇಳೆ ಪಾಕಿಸ್ತಾನದಲ್ಲೇ ಏಷ್ಯಾಕಪ್ ಟೂರ್ನಿ ನಡೆದರೆ, ಭಾರತ ತಂಡವು ಪಾಕಿಸ್ತಾನ ಪ್ರವಾಸ ಮಾಡುವುದು ಅನುಮಾನ ಎನಿಸಿದೆ. ಎರಡು ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿರುವುದರಿಂದ ಭಾರತ ತಂಡವು ಪಾಕಿಸ್ತಾನ ಪ್ರವಾಸ ಮಾಡುತ್ತಿಲ್ಲ. ಇನ್ನು ಇದೆಲ್ಲದರ ನಡುವೆ ಒಂದು ವೇಳೆ ಏಷ್ಯಾಕಪ್ ಟೂರ್ನಿಯನ್ನಾಡಲು ಭಾರತ ತಂಡವು ಪಾಕಿಸ್ತಾನ ಪ್ರವಾಸ ಮಾಡದೇ ಹೋದರೇ, ಪಾಕಿಸ್ತಾನ ತಂಡವು ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯನ್ನು ಬಹಿಷ್ಕರಿಸಲಿದೆ ಎಂದು ಪಿಸಿಬಿ ಮಾಜಿ ಮುಖ್ಯಸ್ಥ ರಮೀಜ್ ರಾಜಾ ಎಚ್ಚರಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.