
ಬೆಂಗಳೂರು(ಮಾ.12): ಭಾರತ ಹಾಗೂ ಶ್ರೀಲಂಕಾ (India vs Sri Lanka) ಕ್ರಿಕೆಟ್ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಅತಿಥ್ಯವನ್ನು ವಹಿಸಿದೆ. ಇದೇ ಮೊದಲ ಬಾರಿಗೆ ಬೆಂಗಳೂರು ಪಿಂಕ್ ಬಾಲ್ ಟೆಸ್ಟ್ (Pink Ball Test) ಪಂದ್ಯಕ್ಕೆ ಸಾಕ್ಷಿಯಾಗುತ್ತಿದೆ. ಈ ಟೆಸ್ಟ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದು, ಇಂದೂ ಸಹ ಟಿಕೆಟ್ ಪಡೆಯಲು ಕ್ರಿಕೆಟ್ ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.
ಈಗಾಗಲೇ ಮೊಹಾಲಿ ಟೆಸ್ಟ್ (Mohali Test) ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ, ಇದೀಗ ಎರಡನೇ ಹಾಗೂ ಕೊನೆಯ ಟೆಸ್ಟ್ ಪಂದ್ಯವನ್ನು ಜಯಿಸುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಲೆಕ್ಕಾಚಾರದಲ್ಲಿದೆ. ಬರೋಬ್ಬರಿ 4 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಕ್ರಿಕೆಟ್ ಅಭಿಮಾನಿಗಳು ರೆಡಿಯಾಗಿದ್ದಾರೆ. ಕೊನೆಯ ಬಾರಿಗೆ ಬೆಂಗಳೂರು ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸಿದ್ದು 2018ರಲ್ಲಿ. ಭಾರತ ಹಾಗೂ ಆಫ್ಘಾನಿಸ್ತಾನ ನಡುವೆ ಪಂದ್ಯ ನಡೆದಿತ್ತು. ಅದು ಆಫ್ಘಾನಿಸ್ತಾನದ ಆಡಿದ ಮೊದಲ ಟೆಸ್ಟ್ ಎನ್ನುವುದು ವಿಶೇಷ. 4 ವರ್ಷಗಳ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣ ಟೆಸ್ಟ್ ಪಂದ್ಯಕ್ಕೆ ವೇದಿಕೆಯಾಗಲು ಸಜ್ಜಾಗಿದೆ. ಅದರಲ್ಲೂ ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು 100% ಪ್ರೇಕ್ಷಕರು ಮೈದಾನ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರ ಜತೆಗೆ ವಾರಾಂತ್ಯದಲ್ಲಿ ಪಂದ್ಯ ಆರಂಭವಾಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಮೈದಾನದತ್ತ ಆಗಮಿಸುವ ನಿರೀಕ್ಷೆಯಿದೆ.
ಕೋವಿಡ್ ಕಾರಣಗಳಿಂದಾಗಿ ಕಳೆದ ಎರಡೂವರೆ ವರ್ಷಗಳಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿರಲಿಲ್ಲ. ಇಂದಿನಿಂದ ಅಹರ್ನಿಶಿ ಪಂದ್ಯ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸ್ಟೇಡಿಯಂನ ಹೊರಗೆ ಕೆಲವು ಕಡೆ ಪೊಲೀಸರು ವೀಕ್ಷಣಾ ಗೋಪುಗಳನ್ನು ನಿರ್ಮಿಸಿ ತೀವ್ರ ನಿಗಾ ಇಟ್ಟಿದ್ದಾರೆ. ಈಗಾಗಲೇ ಮೊದಲೆರಡು ದಿನದ ಟಿಕೆಟ್‌ಗಳು ಸಂಪೂರ್ಣ ಮಾರಾಟವಾಗಿದ್ದು, ಇಂದೂ ಸಹಾ ಕ್ರಿಕೆಟ್ ಅಭಿಮಾನಿಗಳು ಪಂದ್ಯ ಟಿಕೆಟ್ ಖರೀದಿಸಲು ಮೈದಾನದತ್ತ ಧಾವಿಸುತ್ತಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ನೂ ಸಹ ಟಿಕೆಟ್ ಮಾರಾಟವಾಗುತ್ತಿದೆ.
Rohit to Kohli: ಹಲವು ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಲಿದೆ Pink Ball Test
ಹೆಚ್ಚಿನ ಬಂದೋಬಸ್ತ್: ಇಂದಿನಿಂದ 5 ದಿನಗಳ ಕಾಲ ನಡೆಯಲಿರುವ ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಭದ್ರತೆಗೆ 700 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಒಟ್ಟು 20 ಡಿಸಿಪಿಗಳ ನೇತೃತ್ವದಲ್ಲಿ 10 ಎಸಿಪಿ, 34 ಕಾನ್ಸ್‌ಟೇಬಲ್ಸ್, ಕೆಎಸ್‌ಆರ್‌ಪಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಇನ್ನು ಸಂಚಾರಿ ಪೊಲೀಸರು, ಸಂಚಾರ ದಟ್ಟಣೆಯಾಗದಂತೆ ತಡೆಯಲು ಬದಲಿ ಮಾರ್ಗದ ವ್ಯವಸ್ಥೆ ಮಾಡಿದ್ದಾರೆ.
ಪಿಂಕ್ ಬಾಲ್ ಟೆಸ್ಟ್ ಪಂದ್ಯವು ರೋಹಿತ್ ಶರ್ಮಾ ಪಾಲಿಗೆ 400ನೇ ಅಂತಾರಾಷ್ಟ್ರೀಯ ಪಂದ್ಯವಾಗಿರಲಿದ್ದು, ಭಾರತ 400 ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ 8ನೇ ಕ್ರಿಕೆಟಿಗ ಎನ್ನುವ ಕೀರ್ತಿಗೆ ಹಿಟ್‌ಮ್ಯಾನ್ ಪಾತ್ರರಾಗಲಿದ್ದಾರೆ. ಮೂರು ಮಾದರಿಯ ಕ್ರಿಕೆಟ್‌ನ ನಾಯಕರಾದ ಬಳಿಕ ಮೊದಲ ಬಾರಿಗೆ ಭಾರತ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ, ಬೆಂಗಳೂರು ಟೆಸ್ಟ್ ಪಂದ್ಯವನ್ನು ಗೆದ್ದು, ಸರಣಿ ಕ್ಲೀನ್ ಸ್ವೀಪ್ ಮಾಡುವ ಲೆಕ್ಕಾಚಾರದಲ್ಲಿದ್ದಾರೆ.
ಇನ್ನು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ಎರಡನೇ ತವರು ಎನಿಸಿಕೊಂಡಿರುವ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತಮ್ಮ 71ನೇ ಅಂತಾರಾಷ್ಟ್ರೀಯ ಶತಕದ ಭರವನ್ನು ನೀಗಿಸಿಕೊಳ್ಳುತ್ತಾರಾ ಎನ್ನುವ ಕುತೂಹಲ ಕೂಡಾ ಜೋರಾಗಿದೆ. ವಿರಾಟ್ ಕೊಹ್ಲಿ 2019ರಲ್ಲಿ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ದ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಕಡೆಯಬಾರಿಗೆ ಶತಕ ಬಾರಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.