
ಲಖನೌ: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಭಾರತ ತಂಡದಲ್ಲಿ ಬದಲಾವಣೆ ಮಾಡಿದೆ. ಸ್ಪಿನ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಬದಲಿಗೆ ಪಂಜಾಬ್‌ನ ಬ್ಯಾಟಿಂಗ್ ಆಲ್‌ರೌಂಡರ್ ನಮನ್ ಧೀರ್‌ಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಗುರುವಾರ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಮುಂಬರುವ ನ್ಯೂಜಿಲೆಂಡ್ ಪ್ರವಾಸವನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಸಮಿತಿ ಸುಂದರ್‌ಗೆ ವಿಶ್ರಾಂತಿ ನೀಡಿದೆ. ಅಕ್ಟೋಬರ್ 22 ರಿಂದ ಡಿಸೆಂಬರ್ 1 ರವರೆಗೆ ನಡೆಯಲಿರುವ ನ್ಯೂಜಿಲೆಂಡ್ ಪ್ರವಾಸದಲ್ಲಿ ಭಾರತ ಐದು ಟಿ20, ಐದು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಟೆಸ್ಟ್ ಸರಣಿಗೂ ಮುನ್ನ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಹೆಚ್ಚಿನ ಅಭ್ಯಾಸಕ್ಕಾಗಿ ಅಕ್ಟೋಬರ್ 11 ರಿಂದ ಶುರುವಾಗುವ ರಣಜಿ ಟ್ರೋಫಿಯಲ್ಲಿ ತಮಿಳುನಾಡು ಪರ ಆಡುವಂತೆ ಸುಂದರ್‌ಗೆ ಸೂಚಿಸಲಾಗಿದೆ.
ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಮಿಂಚಿದ್ದ ನಮನ್ ಧೀರ್ ಇದೇ ಮೊದಲ ಬಾರಿಗೆ ಟಿ20 ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ವಿಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲೂ ಇವರು ಸ್ಥಾನ ಪಡೆದಿದ್ದರು. ಅಕ್ಟೋಬರ್ 6 ರಂದು ಲಖನೌದಲ್ಲಿ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದೆ.
ಇನ್ನೊಂದೆಡೆ, ಶನಿವಾರ ನ್ಯೂ ಚಂಡೀಗಢದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಿಂದ ವೇಗಿ ಪ್ರಸಿದ್ಧ್ ಕೃಷ್ಣ ಹೊರಬಿದ್ದಿದ್ದಾರೆ. ಪ್ರಸಿದ್ದ್ ಕೃಷ್ಣ, ವೆಸ್ಟ್ ಇಂಡೀಸ್ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ ನೀಳಕಾಯದ ವೇಗಿ ಪ್ರಸಿದ್ದ್ ಕೇವಲ ಐದು ಓವರ್ ಬೌಲಿಂಗ್ ಮಾಡಿ 45 ರನ್ ನೀಡಿ ಒಂದು ವಿಕೆಟ್ ಕಬಳಿಸಿದ್ದರು. ಇದೀಗ ಗಾಯದ ಸಮಸ್ಯೆಯಿಂದಾಗಿ ಅವರು ಪಂದ್ಯದಿಂದ ದೂರ ಉಳಿದಿದ್ದು, ಅವರ ಜಾಗಕ್ಕೆ ಅಂಶುಲ್ ಕಾಂಬೋಜ್ ಅವರನ್ನು ಏಕದಿನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಖಚಿತಪಡಿಸಿದೆ.
ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್, ನಮನ್ ಧೀರ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.