
ಮುಂಬೈ(ಮೇ.07): ಆರಂಭಿಕ ಜಾನಿ ಬೇರ್‌ಸ್ಟೋವ್ (Jonny Bairstow) ಬಾರಿಸಿದ ಆಕರ್ಷಕ ಅರ್ಧಶತಕ (56) ಹಾಗೂ ಕೊನೆಯಲ್ಲಿ ಜಿತೇಶ್ ಶರ್ಮಾ (38* ರನ್, 18 ಎಸೆತ) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಪಂಜಾಬ್ ಕಿಂಗ್ಸ್ (Punjab Kings) ತಂಡವು 5 ವಿಕೆಟ್ ಕಳೆದುಕೊಂಡು 189 ರನ್ ಬಾರಿಸಿದ್ದು, ಬಲಿಷ್ಠ ರಾಜಸ್ಥಾನ ರಾಯಲ್ಸ್ (Rajasthan Royals) ತಂಡಕ್ಕೆ ಗೆಲ್ಲಲು ಕಠಿಣ ಗುರಿ ನೀಡಿದೆ. ಈ ಇಬ್ಬರು ಬ್ಯಾಟರ್‌ಗಳ ಆರ್ಭಟದ ಹೊರತಾಗಿಯೂ ಯುಜುವೇಂದ್ರ ಚಹಲ್ (Yuzvendra Chahal) 3 ವಿಕೆಟ್ ಕಬಳಿಸಿ ಗಮನ ಸೆಳೆದರು.
ಇಲ್ಲಿನ ವಾಂಖೇಡೆ ಮೈದಾನದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಾಂಕ್ ಅಗರ್‌ವಾಲ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟ್ ಬೀಸುವಲ್ಲಿ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್‌ಗಳಾದ ಶಿಖರ್ ಧವನ್ (Shikhar Dhawan) ಹಾಗೂ ಜಾನಿ ಬೇರ್‌ಸ್ಟೋವ್ ಯಶಸ್ವಿಯಾದರು. ಮೊದಲ ವಿಕೆಟ್‌ಗೆ ಈ ಜೋಡಿ 5.1 ಓವರ್‌ಗಳಲ್ಲಿ 47 ರನ್‌ಗಳ ಜತೆಯಾಟ ನಿಭಾಯಿಸುವ ಮೂಲಕ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿತು. ಕಳೆದ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ್ದ ಶಿಖರ್ ಧವನ್ ಕೇವಲ 12 ರನ್ ಬಾರಿಸಿ ರವಿಚಂದ್ರನ್ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಜಾನಿ ಬೇರ್‌ಸ್ಟೋವ್ ಹಾಗೂ ಭನುಕಾ ರಾಜಪಕ್ಸಾ ಚುರುಕಿನ 42 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ರಾಜಪಕ್ಸಾ 18 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 27 ರನ್ ಬಾರಿಸಿ ಚಹಲ್‌ಗೆ ವಿಕೆಟ್ ಒಪ್ಪಿಸಿದರು.
ಆಕರ್ಷಕ ಅರ್ಧಶತಕ ಚಚ್ಚಿದ ಜಾನಿ ಬೇರ್‌ಸ್ಟೋವ್: ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್ ಜಾನಿ ಬೇರ್‌ಸ್ಟೋವ್ ಪ್ರಸಕ್ತ ಆವೃತ್ತಿಯ ಐಪಿಎಲ್‌ನಲ್ಲಿ ದೊಡ್ಡ ಮೊತ್ತ ಕಲೆಹಾಕಲು ವಿಫಲವಾಗಿದ್ದರು. ಆದರೆ ಮಹತ್ವದ ಪಂದ್ಯದಲ್ಲಿ ಶಿಖರ್ ಧವನ್ ಆರಂಭದಲ್ಲೇ ವಿಕೆಟ್ ಒಪ್ಪಿಸಿದ್ದರಿಂದ ಹೆಚ್ಚಿನ ಜವಾಬ್ದಾರಿ ಬೇರ್‌ಸ್ಟೋವ್ ಅವರ ಮೇಲಿತ್ತು. ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಕ್ರಿಕೆಟಿಗ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಬೃಹತ್ ಮೊತ್ತ ಕಲೆಹಾಕಲು ನೆರವಾದರು. ಒಟ್ಟು 40 ಎಸೆತಗಳನ್ನು ಎದುರಿಸಿದ ಬೇರ್‌ಸ್ಟೋವ್ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 56 ರನ್ ಬಾರಿಸಿ ಚಹಲ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಪಂಜಾಬ್ ಕಿಂಗ್ಸ್ ತಂಡದ ನಾಯಕ ಮಯಾಂಕ್ ಅಗರ್‌ವಾಲ್ ಅವರನ್ನು ಹೆಚ್ಚುಹೊತ್ತು ಕ್ರೀಸ್‌ನಲ್ಲಿರಲು ಚಹಲ್ ಅವಕಾಶ ನೀಡಲಿಲ್ಲ. ಮಯಾಂಕ್ ಅಗರ್‌ವಾಲ್ 15 ರನ್ ಬಾರಿಸಿ ಜೋಸ್ ಬಟ್ಲರ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಜಿತೇಶ್ ಶರ್ಮಾ 5ನೇ ವಿಕೆಟ್‌ಗೆ ಕೇವಲ 26 ರನ್‌ಗಳಲ್ಲಿ 50 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು. ಲಿಯಾಮ್ ಲಿವಿಂಗ್‌ಸ್ಟೋನ್ 14 ಎಸೆತಗಳಲ್ಲಿ 22 ರನ್ ಬಾರಿಸಿ ಪ್ರಸಿದ್ಧ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು. ಕೊನೆಯ ಓವರ್‌ನಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಕೇವಲ 18 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 38 ರನ್ ಬಾರಿಸಿ ಅಜೇಯರಾಗುಳಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.