IPL 2022: ಮುಂಬೈಗೆ ಪ್ರತಿಷ್ಠೆ, ಚೆನ್ನೈಗೆ ಉಳಿವಿನ ಪ್ರಶ್ನೆ..!

Published : May 12, 2022, 11:52 AM IST
IPL 2022: ಮುಂಬೈಗೆ ಪ್ರತಿಷ್ಠೆ, ಚೆನ್ನೈಗೆ ಉಳಿವಿನ ಪ್ರಶ್ನೆ..!

ಸಾರಾಂಶ

* ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಿಂದು ಮುಂಬೈ ಇಂಡಿಯನ್ಸ್ ಸವಾಲು * ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕಾದಾಟಕ್ಕೆ ಮುಂಬೈನ ವಾಂಖೇಡೆ ಕ್ರೀಡಾಂಗಣ ಆತಿಥ್ಯ * ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಚೆನ್ನೈ ಸೂಪರ್ ಕಿಂಗ್ಸ್

ಮುಂಬೈ(ಮೇ.12): ಐಪಿಎಲ್‌ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡಗಳಾದ, ಆದರೆ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್‌ (Mumbai Indians) ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ಮತ್ತೊಮ್ಮೆ ಮುಖಾಮುಖಿಯಾಗುತ್ತಿದ್ದು, ಗುರುವಾರ ಈ ತಂಡಗಳ ನಡುವಿನ ಹೈವೋಲ್ಟೇಜ್‌ ಹಣಾಹಣಿಗೆ ವಾಂಖೇಡೆ ಕ್ರೀಡಾಂಗಣ ಸಜ್ಜಾಗಿದೆ. ಒಂದು ಕಡೆ ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದಿದ್ದು, ಇದೀಗ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಶಾಕ್ ನೀಡಲು ಸಜ್ಜಾಗಿದೆ.

5 ಬಾರಿ ಚಾಂಪಿಯನ್‌ ಮುಂಬೈ ಈ ಆವೃತ್ತಿಯಲ್ಲಿ ಆಡಿದ 11 ಪಂದ್ಯಗಳಲ್ಲಿ ಕೇವಲ 2ರಲ್ಲಿ ಗೆದ್ದಿದ್ದು, ಪ್ಲೇ-ಆಫ್‌ ರೇಸ್‌ನಿಂದ ಈಗಾಗಲೇ ಅಧಿಕೃತವಾಗಿ ಹೊರಬಿದ್ದಿದೆ. ಐಪಿಎಲ್‌ ಇತಿಹಾಸದಲ್ಲೇ ಮೊದಲ ಬಾರಿ 9 ಸೋಲು ಕಂಡಿರುವ ತಂಡಕ್ಕೆ ಇದು ಪ್ರತಿಷ್ಠೆಯ ಪಂದ್ಯ. ಮೊದಲ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ವಿರೋಚಿತ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್ ಇದೀಗ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.

ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು 11ರಲ್ಲಿ 4 ಪಂದ್ಯಗಳನ್ನು ಗೆದ್ದಿದ್ದು, ಪ್ಲೇ-ಆಫ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಈ ಪಂದ್ಯದಲ್ಲಿ ಗೆದ್ದರೂ ತಂಡ ಪ್ಲೇ-ಆಫ್‌ ಪ್ರವೇಶಿಸುವುದು ಅನುಮಾನ. ಸೋತರೆ 15ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ಬಳಿಕ ಪ್ಲೇ-ಆಫ್‌ ರೇಸ್‌ನಿಂದ ಹೊರಗುಳಿದ 2ನೇ ತಂಡ ಎನಿಸಿಕೊಳ್ಳಲಿದೆ. ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭಾರೀ ಅಂತರದ ಗೆಲುವು ದಾಖಲಿಸಿದರೆ 9ನೇ ಸ್ಥಾನದಿಂದ ನೇರವಾಗಿ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಲಗ್ಗೆಯಿಡಲಿದೆ. 

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮತ್ತೊಂದು ಗೆಲುವು ದಾಖಲಿಸಬೇಕಿದ್ದರೆ ಅಗ್ರಕ್ರಮಾಂಕದಲ್ಲಿ ಋತುರಾಜ್ ಗಾಯಕ್ವಾಡ್ ಹಾಗೂ ಡೆವೊನ್ ಕಾನ್‌ವೇ ಉತ್ತಮ ಆರಂಭ ಒದಗಿಸಿಕೊಡಬೇಕಿದೆ. ಇದರ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ರಾಬಿನ್ ಉತ್ತಪ್ಪ, ಮೋಯಿನ್ ಅಲಿ, ಶಿವಂ ದುಬೆ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡವು ಹೆಚ್ಚಾಗಿ ಇಶಾನ್ ಕಿಶನ್, ತಿಲಕ್ ವರ್ಮಾ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಡೇನಿಯಲ್ ಸ್ಯಾಮ್ಸ್‌ ಅವರನ್ನು ನೆಚ್ಚಿಕೊಂಡಿದೆ.

CSK ತಂಡಕ್ಕೆ ಬಿಗ್ ಶಾಕ್, ಸ್ಟಾರ್ ಆಟಗಾರ ರವೀಂದ್ರ ಜಡೇಜಾ IPL ಟೂರ್ನಿಯಿಂದಲೇ ಔಟ್..!

ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ತಂಡಗಳು ಒಟ್ಟು 33 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಮುಂಬೈ ಇಂಡಿಯನ್ಸ್ ತಂಡವು ಕೊಂಚ ಮೇಲುಗೈ ಸಾಧಿಸಿದೆ. 33 ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ ತಂಡವು 19 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 14 ಪಂದ್ಯಗಳನ್ನು ಗೆದ್ದು ಬೀಗಿದೆ.

ಸಂಭವನೀಯ ಆಟಗಾರರ ಪಟ್ಟಿ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ‌(ನಾಯಕ), ಇಶಾನ್ ಕಿಶನ್‌, ತಿಲಕ್ ವರ್ಮಾ‌, ರಮನ್‌ದೀಪ್ ಸಿಂಗ್‌, ಟಿಮ್ ಡೇವಿಡ್, ಕೀರನ್ ಪೊಲ್ಲಾರ್ಡ್‌, ಡೇನಿಯಲ್ ಸ್ಯಾಮ್ಸ್‌, ರವಿಚಂದ್ರನ್ ಅಶ್ವಿನ್‌, ಕುಮಾರ್ ಕಾರ್ತಿಕೇಯ, ಜಸ್ಪ್ರೀತ್ ಬುಮ್ರಾ, ರಿಲೇ ಮೆರೆಡಿತ್‌.

ಚೆನ್ನೈ ಸೂಪರ್ ಕಿಂಗ್ಸ್: ಋುತುರಾಜ್ ಗಾಯಕ್ವಾಡ್‌, ಡೆವೊನ್ ಕಾನ್‌ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಶಿವಂ ದುಬೆ, ಎಂ ಎಸ್ ಧೋನಿ(ನಾಯಕ), ಮೋಯಿನ್ ಅಲಿ‌, ಡ್ವೇನ್ ಬ್ರಾವೋ, ಸಿಮರ್‌ಜೀತ್ ಸಿಂಗ್‌, ಮಹೀಶ್ ತೀಕ್ಷಣ, ಮುಕೇಶ್ ಚೌಧರಿ‌.

ಸ್ಥಳ: ಮುಂಬೈ, ವಾಂಖೇಡೆ ಕ್ರೀಡಾಂಗಣ
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ