
ಮುಂಬೈ(ಏ.25): ಸತತ ಸೋಲುಗಳ ಹೊರತಾಗಿಯೂ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧ ರೋಚಕ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಮತ್ತೊಂದು ಗೆಲುವಿನ ತವಕದಲ್ಲಿದ್ದು, ಸೋಮವಾರ ಪಂಜಾಬ್ ಕಿಂಗ್ಸ್ (Punjab Kings) ವಿರುದ್ಧ ಸೆಣಸಾಡಲಿದೆ. ಪ್ಲೆ ಆಫ್ ಪ್ರವೇಶಿಸುವ ದೃಷ್ಟಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಇದು ಒಂದು ರೀತಿ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ. ಈ ಪಂದ್ಯಕ್ಕೆ ಇಲ್ಲಿನ ವಾಂಖೆಡೆ ಮೈದಾನ ಆತಿಥ್ಯವನ್ನು ವಹಿಸಿದೆ.
ಈ ಬಾರಿ ರವೀಂದ್ರ ಜಡೇಜಾ (Ravindra Jadeja) ನಾಯಕತ್ವದಲ್ಲಿ ಕಣಕ್ಕಿಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಕಳೆದ ಬಾರಿ ರನ್ನರ್-ಅಪ್ ಕೋಲ್ಕತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದ ತಂಡ ಒಟ್ಟು 7 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಮಾತ್ರ ಗೆಲುವು ಸಾಧಿಸಿದೆ. ಉಳಿದ 5 ಪಂದ್ಯಗಳ ಸೋಲು ತಂಡವನ್ನು ಇಕ್ಕಟ್ಟಿಕೆ ಸಿಲುಕಿಸಿದ್ದು, ಪ್ಲೇ-ಆಪ್ ಪ್ರವೇಶಿಸಲು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಸೋತರೆ ಪ್ಲೇ-ಆಪ್ ಹಾದಿ ಮತ್ತಷ್ಟು ಕಠಿಣಗೊಳ್ಳಲಿದೆ.
ಮತ್ತೊಂದೆಡೆ ಕನ್ನಡಿಗ ಮಯಾಂಕ್ ಅಗರ್‌ವಾಲ್ (Mayank Agarwal) ನಾಯಕತ್ವದ ಪಂಜಾಬ್ ಕಿಂಗ್ಸ್ ಕೂಡಾ ಶೋಚನೀಯ ಸ್ಥಿತಿಯಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳನ್ನು ಗೆದ್ದಿದ್ದು, ಅಸ್ಥಿರ ಆಟದಿಂದಾಗಿ ವೈಫಲ್ಯ ಅನುಭವಿಸುತ್ತಿದೆ. ಕಳೆದೆರಡು ಪಂದ್ಯಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಹೀನಾಯವಾಗಿ ಸೋತಿದ್ದು ತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಕುಗ್ಗಿಸಿದೆ. ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಿದ್ದರೆ ಚೆನ್ನೈ ಸವಾಲನ್ನು ಮೀರಿ ನಿಲ್ಲಲೇಬೇಕಿದೆ.
IPL 2022 ಮುಂಬೈ ಇಂಡಿಯನ್ಸ್ ತಂಡಕ್ಕೆ ಸತತ 8ನೇ ಸೋಲು
ಐಪಿಎಲ್ ಇತಿಹಾಸದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 26 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊಂಚ ಮೇಲುಗೈ ಸಾಧಿಸಿದೆ. 26 ಪಂದ್ಯಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 15 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡವು 11 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಸದ್ಯ ಪಂಜಾಬ್ ಕಿಂಗ್ಸ್ ತಂಡವು 7 ಪಂದ್ಯಗಳಲ್ಲಿ ಮೂರು ಗೆಲುವು ಹಾಗೂ 4 ಸೋಲುಗಳೊಂದಿಗೆ 6 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 7 ಪಂದ್ಯಗಳಲ್ಲಿ 2 ಗೆಲುವು ಹಾಗೂ 5 ಸೋಲುಗಳೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
ಸಂಭವನೀಯ ಆಟಗಾರರ ಪಟ್ಟಿ
ಚೆನ್ನೈ: ಋುತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮಿಚೆಲ್ ಸ್ಯಾಂಟ್ನರ್, ಅಂಬಟಿ ರಾಯುಡು, ರವೀಂದ್ರ ಜಡೇಜಾ(ನಾಯಕ), ಶಿವಂ ದುಬೆ, ಎಂ ಎಸ್ ಧೋನಿ, ಡ್ವೇನ್ ಪ್ರಿಟೋರಿಯಸ್, ಡ್ವೇನ್ ಬ್ರಾವೊ, ಮಹೀಶ್ ತೀಕ್ಷಣ, ಮುಕೇಶ್ ಚೌಧರಿ.
ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಮಯಾಂಕ್ ಅಗರ್‌ವಾಲ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾನಿ ಬೇರ್‌ಸ್ಟೋವ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಒಡೆನ್ ಸ್ಮಿತ್, ಕಗಿಸೋ ರಬಾಡ, ವೈಭವ್, ಚಹರ್, ಅಶ್‌ರ್‍ದೀಪ್ ಸಿಂಗ್.
ಸ್ಥಳ: ಮುಂಬೈ, ವಾಂಖೇಡೆ ಕ್ರೀಡಾಂಗಣ
ಪಂದ್ಯ: ಸಂಜೆ 7.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.