
ಬೆಂಗಳೂರು(ಏ.20): 15ನೇ ಆವೃತ್ತಿಯ ಐಪಿಎಲ್ (IPL 2022) ಟೂರ್ನಿಯ 31ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ಲಖನೌ ಸೂಪರ್ ಜೈಂಟ್ಸ್ (Lucknow Super Giants) ಎದುರು 18 ರನ್‌ಗಳ ಅಂತರದ ರೋಚಕ ಜಯ ಸಾಧಿಸಿದೆ. ನವಿ ಮುಂಬೈನಲ್ಲಿರುವ ಡಾ. ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿದ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು ಅದ್ಭುತ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಓವರ್‌ನಲ್ಲೇ ಆರಂಭಿಕ ಬ್ಯಾಟರ್ ಅನೂಜ್ ರಾವತ್ ಹಾಗೂ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡು ಕಂಗಾಲಾಗಿತ್ತು. ಆದರೆ ನಾಯಕ ಫಾಫ್ ಡು ಪ್ಲೆಸಿಸ್ ಬಾರಿಸಿದ ಶತಕ ವಂಚಿತ(96 ರನ್) ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತ್ತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕೆ.ಎಲ್. ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 163 ರನ್ ಗಳಿಸಲಷ್ಟೇ ಶಕ್ತವಾಯಿತು. ಆರ್‌ಸಿಬಿ ಜೋಶ್ ಹೇಜಲ್‌ವುಡ್ 4 ವಿಕೆಟ್ ಕಬಳಿಸುವ ಮೂಲಕ ಆರ್‌ಸಿಬಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.
ಸದ್ಯ ಅಂಕಪಟ್ಟಿ ಹೇಗಿದೆ..?:
15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 31ನೇ ಪಂದ್ಯ ಮುಕ್ತಾಯದ ಬಳಿಕವೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಗುಜರಾತ್ ಟೈಟಾನ್ಸ್ ತಂಡವು 6 ಪಂದ್ಯಗಳನ್ನಾಡಿ 5 ಗೆಲುವು ಹಾಗೂ ಒಂದು ಸೋಲು ಕಂಡಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 7 ಪಂದ್ಯಗಳನ್ನಾಡಿ 5 ಗೆಲುವು ಹಾಗೂ 2 ಸೋಲುಗಳೊಂದಿಗೆ 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನುಳಿದಂತೆ ರಾಜಸ್ಥಾನ ರಾಯಲ್ಸ್, ಲಖನೌ ಸೂಪರ್ ಜೈಂಟ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕ್ರಮವಾಗಿ ಮೊದಲ 5 ಸ್ಥಾನಗಳಲ್ಲಿದ್ದರೆ. ಇನ್ನು ಕೋಲ್ಕತಾ ನೈಟ್ ರೈಡರ್ಸ್, ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಕ್ರಮವಾಗಿ ಆ ನಂತರದ ಸ್ಥಾನಗಳನ್ನು ಪಡೆದಿವೆ.
ಅರೆಂಜ್ ಕ್ಯಾಪ್ ರೇಸ್‌ನಲ್ಲಿ ಯಾರಿದ್ದಾರೆ..?
ಸದ್ಯ ರಾಜಸ್ಥಾನ ರಾಯಲ್ಸ್ ತಂಡದ ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಈಗಾಗಲೇ ಟೂರ್ನಿಯಲ್ಲಿ ಎರಡು ಶತಕ ಬಾರಿಸಿದ್ದು, ಒಟ್ಟಾರೆ 375 ರನ್ ಬಾರಿಸುವ ಮೂಲಕ ಆರೆಂಜ್ ಕ್ಯಾಪ್ ಒಡೆಯರಾಗಿದ್ದಾರೆ. ಇದಾದ ಬಳಿಕ ಕೆ.ಎಲ್ ರಾಹುಲ್(265), ಫಾಫ್ ಡು ಪ್ಲೆಸಿಸ್(250), ಶ್ರೇಯಸ್ ಅಯ್ಯರ್(236) ಹಾಗೂ ಹಾರ್ದಿಕ್ ಪಾಂಡ್ಯ(228) ಆರೆಂಜ್ ಕ್ಯಾಪ್ ಮೇಲೆ ಕಣ್ಣಿಟ್ಟಿದ್ದಾರೆ
IPL 2022 ಭರ್ಜರಿ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಆರ್ ಸಿಬಿ!
ಪರ್ಪಲ್ ಕ್ಯಾಪ್ ಮೇಲೆ ಆರ್‌ಸಿಬಿ ಆಟಗಾರನ ಕಣ್ಣು:
ರಾಜಸ್ಥಾನ ರಾಯಲ್ಸ್ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಅದ್ಭುತ ಲಯದಲ್ಲಿದ್ದು, ಆಡಿದ 6 ಪಂದ್ಯಗಳ ಪೈಕಿ 17 ವಿಕೆಟ್ ಕಬಳಿಸಿ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಇದಾದ ಬಳಿಕ ಟಿ ನಟರಾಜನ್(12), ಕುಲ್ದೀಪ್ ಯಾದವ್, ಆವೇಶ್ ಖಾನ್ ಹಾಗೂ ವನಿಂದು ಹಸರಂಗ ತಲಾ 11 ವಿಕೆಟ್ ಕಬಳಿಸಿದ್ದಾರೆ. ಆರ್‌ಸಿಬಿ ಸ್ಪಿನ್ನರ್ ಹಸರಂಗ ಈ ಬಾರಿಯ ಪರ್ಪಲ್ ಕ್ಯಾಪ್ ಮೇಲೆ ಕಣ್ಣಿಟ್ಟಿದ್ದಾರೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.