
ಮುಂಬೈ(ಏ.26): ಐಪಿಎಲ್‌ನ (IPL 2022) ಅತ್ಯಂತ ಯಶಸ್ವಿ ತಂಡವೆನಿಸಿಕೊಂಡಿರುವ ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ (Mumbai Indians ) ತಂಡವು 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆಡಿದ ಮೊದಲ ಎಂಟಕ್ಕೆ ಎಂಟೂ ಪಂದ್ಯಗಳನ್ನು ಸೋಲುವ ಮೂಲಕ ಮುಖಭಂಗ ಅನುಭವಿಸಿದೆ. ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ ಇನ್ನೂ ಕೊನೆಯ ಸ್ಥಾನದಲ್ಲೇ ಉಳಿದುಕೊಂಡಿದೆ.
ಇಲ್ಲಿನ ವಾಂಖೆಡೆ ಮೈದಾನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಕನ್ನಡಿಗ ಕೆ.ಎಲ್. ರಾಹುಲ್ (KL Rahul) ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು 168 ರನ್ ಬಾರಿಸಿತ್ತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 8 ವಿಕೆಟ್ ಕಳೆದುಕೊಂಡು ಕೇವ; 132 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 36 ರನ್‌ಗಳ ಅಂತರದ ಸೋಲು ಕಂಡಿತು. ತವರು ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗೆಲುವಿನ ಖಾತೆ ತೆರೆಯಬಹುದು ಎನ್ನುವ ಅಭಿಮಾನಿಗಳ ನಿರೀಕ್ಷೆಯನ್ನು ರೋಹಿತ್ ಪಡೆ ಮತ್ತೊಮ್ಮೆ ಹುಸಿಗೊಳಿಸಿತು.
ದಾಖಲೆಯ 8ನೇ ಸೋಲಿನ ಬಳಿಕ ಪ್ರತಿಕ್ರಿಯಿಸಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ‘ವಿಶ್ವದ ಶ್ರೇಷ್ಠಾತಿಶ್ರೇಷ್ಠ ತಂಡಗಳೂ ನಮ್ಮಂತೆಯೇ ಕೆಟ್ಟ ಸಮಯಗಳನ್ನು ಕಂಡಿವೆ. ಆ ಹಂತವನ್ನು ದಾಟಿ ಮುಂದೆ ಯಶಸ್ಸು ಕಂಡಿವೆ. ನಮ್ಮ ಆಟ ಈ ವರ್ಷ ಉತ್ತಮವಾಗಿಲ್ಲ ನಿಜ. ಆದರೆ ನಾವು ಆತ್ಮವಿಶ್ವಾಸ ಕಳೆದುಕೊಂಡಿಲ್ಲ. ಬಾಕಿ ಇರುವ ಪಂದ್ಯಗಳಲ್ಲಿ ಉತ್ತಮ ಆಟವಾಡಲು ಪ್ರಯತ್ನಿಸುತ್ತೇವೆ. ನಾವೂ ಸೋಲುತ್ತಿದ್ದರೂ ನಮ್ಮನ್ನು ಬೆಂಬಲಿಸುತ್ತಿರುವ ಅಭಿಮಾನಿಗಳಿಗೆ ಧನ್ಯವಾದ’ ಎಂದಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡವು ದಯನೀಯ ಸೋಲು ಅನುಭವಿಸಲು ಅಗ್ರಕ್ರಮಾಂಕದ ಬ್ಯಾಟಿಂಗ್ ವೈಫಲ್ಯವೇ ಕಾರಣ ಎನ್ನುವ ಮಾತುಗಳು ಕೇಳಿ ಬಂದಿವೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿ 20ಕ್ಕಿಂತ ಕಡಿಮೆ ಬ್ಯಾಟಿಂಗ್ ಸರಾಸರಿಯಲ್ಲಿ ಕೇವಲ 153 ರನ್‌ಗಳನ್ನಷ್ಟೇ ಗಳಿಸಲು ಶಕ್ತರಾಗಿದ್ದಾರೆ. ಲಖನೌ ಸೂಪರ್ ಜೈಂಟ್ಸ್ ಎದುರಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೆಲಕಚ್ಚಿ ಆಡುವ ಮೂಲಕ ಫಾರ್ಮ್‌ಗೆ ಮರಳುವ ಮುನ್ಸೂಚನೆ ನೀಡಿದ್ದರು. ಆದರೆ ರೋಹಿತ್ ಶರ್ಮಾ ಅಪಾಯಕಾರಿಯಾಗುವ ಮುನ್ನವೇ ಪೆವಿಲಿಯನ್ನಿಗಟ್ಟುವ ಮೂಲಕ ಲಖನೌ ತಂಡವು ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿತ್ತು. ಲಖನೌ ಎದರು ರೋಹಿತ್ ಶರ್ಮಾ 31 ಎಸೆತಗಳನ್ನು ಎದುರಿಸಿ 39 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ಇಶಾನ್ ಕಿಶನ್ ರನ್ ಗಳಿಸಲು ಪರದಾಡುತ್ತಿರುವುದು ಮುಂಬೈ ಇಂಡಿಯನ್ಸ್ ತಂಡದ ತಲೆನೋವು ಹೆಚ್ಚುವಂತೆ ಮಾಡಿದೆ.
IPL 2022 ಮುಂಬೈ ಇಂಡಿಯನ್ಸ್ ತಂಡಕ್ಕೆ ಸತತ 8ನೇ ಸೋಲು
ಲಖನೌ ಸೂಪರ್ ಜೈಂಟ್ಸ್ ತಂಡದ ಎದುರು ಇಶಾನ್ ಕಿಶನ್ 20 ಎಸೆತಗಳನ್ನು ಎದುರಿಸಿ ಕೇವಲ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಡೆವಾಲ್ಡ್ ಬ್ರೆವಿಸ್ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮುಂಬೈ ಇಂಡಿಯನ್ಸ್ ತಂಡದ ಅತ್ಯಂತ ನಂಬಿಗಸ್ಥ ಬ್ಯಾಟರ್ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ತಿಲಕ್ ವರ್ಮಾ 38 ರನ್ ಬಾರಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
ಮುಂಬೈ ಇಂಡಿಯನ್ಸ್ ತಂಡವು ಸತತ 8 ಸೋಲು ಕಂಡ ಬೆನ್ನಲ್ಲೇ ತಂಡದ ಹೆಡ್ ಕೋಚ್ ಮಹೆಲಾ ಜಯವರ್ಧನೆ, ಮುಂಬರುವ ಪಂದ್ಯಗಳಲ್ಲಿ ಮುಂಬೈ ತಂಡದಲ್ಲಿ ಕೆಲ ಬದಲಾವಣೆಗಳನ್ನು ಮಾಡುವ ಮುನ್ಸೂಚನೆ ನೀಡಿದ್ದಾರೆ. ಅನುಭವಿ ಆಟಗಾರರು ತಮ್ಮ ಜವಾಬ್ದಾರಿಯುತ ಪ್ರದರ್ಶನ ತೋರಬೇಕು. ಈ ಹಿಂದೆ ಹಿರಿಯ ಆಟಗಾರರು ಉತ್ತಮ ಪ್ರದರ್ಶನ ತೋರಿದ್ದಾರೆ ಎಂದು ಜಯವರ್ಧನೆ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.