IPL 2022: ಚೆನ್ನೈಗೆ ಸತತ ನಾಲ್ಕನೇ ಸೋಲು, ಗೆಲುವಿನ ಖಾತೆ ತೆರೆದ ಸನ್‌ರೈಸರ್ಸ್‌..!

Published : Apr 09, 2022, 07:08 PM IST
IPL 2022: ಚೆನ್ನೈಗೆ ಸತತ ನಾಲ್ಕನೇ ಸೋಲು, ಗೆಲುವಿನ ಖಾತೆ ತೆರೆದ ಸನ್‌ರೈಸರ್ಸ್‌..!

ಸಾರಾಂಶ

* ಐಪಿಎಲ್ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದ ಸನ್‌ರೈಸರ್ಸ್ ಹೈದರಾಬಾದ್ * ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸತತ ನಾಲ್ಕನೇ ಸೋಲು * ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಆರೆಂಜ್ ಆರ್ಮಿ

ಮುಂಬೈ(ಏ.09): ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸತತ ನಾಲ್ಕನೇ ಸೋಲು ಕಂಡಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಸಿಎಸ್‌ಕೆ ಎದುರು 8 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಬೌಲಿಂಗ್‌ ಹಾಗೂ ಬ್ಯಾಟಿಂಗ್ ವಿಭಾಗದಲ್ಲಿ ಪ್ರಾಬಲ್ಯ ಮೆರೆದ ಕೇನ್‌ ವಿಲಿಯಮ್ಸನ್‌ ಪಡೆ ಹಾಲಿ ಚಾಂಪಿಯನ್ನರ ಎದುರು ಸುಲಭ ಗೆಲುವು ದಾಖಲಿಸಿದೆ

ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ನೀಡಿದ್ದ 155 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಭರ್ಜರಿ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ನಾಯಕ ಕೇನ್ ವಿಲಿಯಮ್ಸನ್‌ ಹಾಗೂ ಅಭಿಷೇಕ್ ಶರ್ಮಾ 89 ರನ್‌ಗಳ ಜತೆಯಾಟವಾಡುವ ಭದ್ರ ಬುನಾದಿ ಹಾಕಿ ಕೊಟ್ಟರು. ಚೆನ್ನೈ ಸೂಪರ್ ಕಿಂಗ್ಸ್‌ನ ಬೌಲರ್‌ಗಳೆದುರು ಎಚ್ಚರಿಕೆ ಆರಂಭ ಮಾಡಿದ ಜೋಡಿ, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಅನಾಯಾಸವಾಗಿ ಬ್ಯಾಟ್ ಬೀಸಲಾರಂಭಿಸಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ವೇಗಿ ಮುಕೇಶ್ ಚೌಧರಿ ಯಶಸ್ವಿಯಾದರು. ನಾಯಕ ಕೇನ್ ವಿಲಿಯಮ್ಸನ್‌ 40 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 32 ರನ್‌ ಬಾರಿಸಿ ಮೋಯಿನ್ ಅಲಿಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಚೊಚ್ಚಲ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ: ಮತ್ತೊಂದು ತುದಿಯಲ್ಲಿ ನಾಯಕ ಜತೆ ಉತ್ತಮ ಜತೆಯಾಟ ನಿಭಾಯಿಸಿದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಈ ಮೊದಲು ಅಭಿಷೇಕ್ ಶರ್ಮಾ ಆರ್‌ಸಿಬಿ ಎದುರಿನ ತಮ್ಮ ಪಾದಾರ್ಪಣೆ ಪಂದ್ಯದಲ್ಲಿ 19 ಎಸೆತದಲ್ಲಿ ಅಜೇಯ 46 ರನ್ ಬಾರಿಸಿದ್ದೇ ಇಲ್ಲಿಯವರೆಗಿನ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿತ್ತು. 32 ಎಸೆತಗಳನ್ನು ಎದುರಿಸಿ ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಅಂತಿಮವಾಗಿ ಅಭಿಷೇಕ್ ಶರ್ಮಾ 50 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 75 ರನ್ ಬಾರಿಸಿ ಡ್ವೇನ್‌ ಬ್ರಾವೋಗೆ ವಿಕೆಟ್ ಒಪ್ಪಿಸಿದರು. 

ಇನ್ನು ಅಭಿಷೇಕ್ ಶರ್ಮಾಗೆ ಸ್ಪೋಟಕ ಬ್ಯಾಟಿಂಗ್ ಮೂಲಕ ಉತ್ತಮ ಸಾಥ್ ನೀಡಿದ ರಾಹುಲ್ ತ್ರಿಪಾಠಿ ಕೇವಲ 15 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 39 ರನ್ ಬಾರಿಸಿದರೆ, ನಿಕೋಲಸ್ ಪೂರನ್ ಅಜೇಯ 5 ರನ್‌ಗಳಿಸಿದರು.

ಇದಕ್ಕೂ ಮೊದಲು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಸಿಎಸ್‌ಕೆ ತಂಡವು 36 ರನ್‌ ಗಳಿಸುವಷ್ಟರಲ್ಲಿ ಆರಂಭಿಕರಿಬ್ಬರೂ ಪೆವಿಲಿಯನ್ ಸೇರಿದ್ದರು. ಮಧ್ಯಮ ಕ್ರಮಾಂಕದಲ್ಲಿ ಮೋಯಿನ್ ಅಲಿ 48, ಅಂಬಟಿ ರಾಯುಡು 27 ಹಾಗೂ ನಾಯಕ ರವೀಂದ್ರ ಜಡೇಜಾ 23 ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತ್ತು.  

ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಶಿಸ್ತುಬದ್ದ ದಾಳಿ ನಡೆಸಿದ ವಾಷಿಂಗ್ಟನ್ ಸುಂದರ್ 4 ಓವರ್ ಬೌಲಿಂಗ್ ಮಾಡಿ 21 ರನ್ ನೀಡಿ 2 ವಿಕೆಟ್ ಪಡೆದರೆ, ಟಿ ನಟರಾಜನ್ 30 ರನ್ ನೀಡಿ 2 ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸೆನ್ ಹಾಗೂ ಏಯ್ಡನ್ ಮಾರ್ಕ್‌ರಮ್‌ ತಲಾ ಒಂದೊಂದು ವಿಕೆಟ್ ಪಡೆದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Mock Auction: 30.5 ಕೋಟಿ ರೂಪಾಯಿ ದಾಖಲೆ ಮೊತ್ತಕ್ಕೆ ಕೆಕೆಆರ್‌ಗೆ ಕ್ಯಾಮರೂನ್‌ ಗ್ರೀನ್‌!
ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!