
ನವದೆಹಲಿ(ಜೂ.08): ಭಾರತದ ಚುಟುಕು ಕ್ರಿಕೆಟ್ ಹಬ್ಬ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯು ಮತ್ತೊಮ್ಮೆ ಪ್ರತಿಭಾನ್ವಿತ ಆಟಗಾರರನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದೆ. ಅಂತಾರರಾಷ್ಟ್ರೀಯ ಪಂದ್ಯವನ್ನಾಡ ಆಟಗಾರರಿಂದ ಹಿಡಿದು, ಅನುಭವಿ ಆಟಗಾರರವರೆಗೆ ಹಲವು ಕ್ರಿಕೆಟಿಗರು 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮಿಂಚಿನ ಪ್ರದರ್ಶನ ತೋರಿ ಗಮನ ಸೆಳೆದಿದ್ದಾರೆ. ಜೋಸ್ ಬಟ್ಲರ್, 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 850ಕ್ಕೂ ಅಧಿಕ ರನ್ ಬಾರಿಸಿ ಮಿಂಚಿದರೆ, ಭಾರತದ ಬ್ಯಾಟರ್‌ಗಳಾದ ಕೆ ಎಲ್ ರಾಹುಲ್ (KL Rahul), ಶಿಖರ್ ಧವನ್ ಕೂಡಾ ರನ್ ಮಳೆ ಹರಿಸುವಲ್ಲಿ ಯಶಸ್ವಿಯಾಗಿದ್ದಾರು.
ಇನ್ನು ಬೌಲಿಂಗ್ ವಿಭಾಗದಲ್ಲಿ ಯುಜುವೇಂದ್ರ ಚಹಲ್, ಕುಲ್ದೀಪ್ ಯಾದವ್ ಹಾಗೂ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಕೂಡಾ ಅದ್ಭುತ ಪ್ರದರ್ಶನ ತೋರುವ ಮೂಲಕ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅನುಭವಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (Dinesh Karthik), ಐಪಿಎಲ್‌ನಲ್ಲಿ ಮ್ಯಾಚ್ ಫಿನಿಶರ್ ರೂಪದಲ್ಲಿ ಗಮನ ಸೆಳೆದಿದ್ದು, 2019ರ ಐಸಿಸಿ ಏಕದಿನ ವಿಶ್ವಕಪ್ ಬಳಿಕ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
2022ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅನುಭವಿ ಆಟಗಾರರು ಮಾತ್ರವಲ್ಲದೇ ಅನ್‌ಕ್ಯಾಪ್ ಆಟಗಾರರು ಕೂಡಾ ತಮ್ಮ ಪ್ರತಿಭೆ ಅನಾವರಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ (Virender Sehwag), ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಗಮನ ಸೆಳೆದ ರಾಹುಲ್ ತ್ರಿಪಾಠಿ (Rahul Tripathi) ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮಿಂಚಿನ ಪ್ರದರ್ಶನ ತೋರಿದ ಉಮ್ರಾನ್ ಮಲಿಕ್, ಆರ್ಶದೀಪ್ ಸಿಂಗ್ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಗೆ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ರಾಹುಲ್ ತ್ರಿಪಾಠಿ ಆಫ್ರಿಕಾ ಎದುರಿನ ಸರಣಿಗೆ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದರು. ಹೀಗಿದ್ದೂ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡದ ಪರ ತ್ರಿಪಾಠಿ ಸ್ಥಿರ ಪ್ರದರ್ಶನ ತೋರಿದ್ದರ ಬಗ್ಗೆ ವೀರೂ ಗುಣಗಾನ ಮಾಡಿದ್ದಾರೆ.
200 ಮಿಲಿಯನ್ ಇನ್‌ಸ್ಟಾಗ್ರಾಂ ಫ್ಯಾನ್ಸ್ ಕ್ಲಬ್ ಸೇರಿ ಹೊಸ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ..!
ರಾಹುಲ್ ತ್ರಿಪಾಠಿ ಮೂರನೇ ಕ್ರಮಾಂಕದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. ಮೂರನೇ ಕ್ರಮಾಂಕದಲ್ಲಿ ಅವರು 400ಕ್ಕೂ ಅಧಿಕ ರನ್ ಬಾರಿಸಿದ್ದಾರೆ. ನೀವು ಎಲ್ಲಾ ತಂಡಗಳನ್ನು ಗಮನಿಸಿದರೆ, ಮೂರನೇ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಠಿ ಹೊರತುಪಡಿಸಿ ಉಳಿದೆಲ್ಲಾ ಬ್ಯಾಟರ್‌ಗಳು ರನ್‌ಗಳಿಸಲು ಸಾಕಷ್ಟು ಪರದಾಡಿದ್ದಾರೆ. ರಾಹುಲ್ ತ್ರಿಪಾಠಿ, ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ 5 ಗೆಲುವಿನಲ್ಲಿ ರಾಹುಲ್ ತ್ರಿಪಾಠಿ ತಂಡಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ.
ಐಪಿಎಲ್ ಆಟಗಾರರ ಮೆಗಾ ಹರಾಜಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಬರೋಬ್ಬರಿ 8.5 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು. ಮಹಾರಾಷ್ಟ್ರ ಮೂಲದ ಬ್ಯಾಟರ್ ರಾಹುಲ್ ತ್ರಿಪಾಠಿ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 3 ಅರ್ಧಶತಕ ಸಹಿತ 413 ರನ್ ಬಾರಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.