
ಚೆನ್ನೈ(ಏ.30): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 41ನೇ ಪಂದ್ಯದಲ್ಲಿಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಸಿಎಸ್‌ಕೆ ನಾಯಕ ಎಂ ಎಸ್ ಧೋನಿ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ತವರಿನಲ್ಲಿ ಆಡಲಿರುವ ಕಾರಣ ಚೆನ್ನೈ ಸೂಪರ್ ಸಹಜವಾಗಿಯೇ ಫೇವರಿಟ್ ಎನಿಸಿದ್ದು, ತನ್ನ ಸ್ಪಿನ್ ಬೌಲಿಂಗ್ ದಾಳಿಯಿಂದ ಪಂಜಾಬ್ ಕಿಂಗ್ಸ್ ಬ್ಯಾಟರ್‌ಗಳನ್ನು ಕಟ್ಟಿಹಾಕಲು ಕಾಯುತ್ತಿದೆ.
ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯ ವಹಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಪಂಜಾಬ್ ಕಿಂಗ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಹರ್ಪ್ರೀತ್ ಬ್ರಾರ್ ತಂಡ ಕೂಡಿಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಡೆವೊನ್ ಕಾನ್‌ವೇ, ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ ಹಾಗೂ ಶಿವಂ ದುಬೆ ಸ್ಪೋಟಕ ಬ್ಯಾಟಿಂಗ್ ನಡೆಸುತ್ತಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಇನ್ನು ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಪ್ರಭ್‌ಸಿಮ್ರನ್ ಸಿಂಗ್, ಅಥರ್ವ ಟೈಡೆ, ಶಿಖರ್ ಧವನ್, ಸಿಕಂದರ್ ರಾಜಾ, ಲಿಯಾಮ್ ಲಿವಿಂಗ್‌ಸ್ಟೋನ್ ಬ್ಯಾಟಿಂಗ್ ಆಧಾರಸ್ತಂಭ ಎನಿಸಿದ್ದಾರೆ. ಬೌಲಿಂಗ್‌ನಲ್ಲಿ ಆರ್ಶದೀಪ್ ಸಿಂಗ್, ಕಗಿಸೋ ರಬಾಡ, ಹಪ್ರೀತ್ ಬ್ರಾರ್, ರಾಹುಲ್ ಚಹರ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
IPL 2023 ಅಸ್ಥಿರ ಮುಂಬೈ ಇಂಡಿಯನ್ಸ್‌ಗೆ ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್ ಪವರ್‌ನ ಭೀತಿ!
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಒಟ್ಟು 27 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಕೊಂಚ ಮೇಲುಗೈ ಸಾಧಿಸಿದೆ. 27 ಪಂದ್ಯಗಳ ಪೈಕಿ ಸಿಎಸ್‌ಕೆ ತಂಡವು 15 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡವು 12 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ.
ತಂಡಗಳು ಹೀಗಿವೆ ನೋಡಿ:
ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್‌ವೇ, ಋುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೋಯಿನ್ ಅಲಿ, ಶಿವಂ ದುಬೆ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂ ಎಸ್ ಧೋನಿ(ನಾಯಕ), ಮತೀಶ್ ಪತಿರನ, ತುಷಾರ್ ದೇಶಪಾಂಡೆ, ಮಹೀಶ್ ತೀಕ್ಷಣ.
ಪಂಜಾಬ್ ಕಿಂಗ್ಸ್: ಶಿಖರ್ ಧವನ್(ನಾಯಕ), ಪ್ರಭ್‌ಸಿಮ್ರನ್ ಸಿಂಗ್, ಅಥರ್ವ ಟೈಡೆ, ಸಿಕಂದರ್ ರಾಜಾ, ಲಿವಿಂಗ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಕಗಿಸೋ ರಬಾಡ, ರಾಹುಲ್ ಚಹರ್, ಹಪ್ರೀತ್ ಬ್ರಾರ್, ಆರ್ಶದೀಪ್ ಸಿಂಗ್.
ಪಂದ್ಯ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.