ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಹೈವೋಲ್ಟೇಜ್ ಕದನಕ್ಕೆ ಇಲ್ಲಿನ ಸವಾಯಿ ಮಾನ್‌ಸಿಂಗ್ ಮೈದಾನ ಆತಿಥ್ಯ ವಹಿಸಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ನೆಹಾಲ್ ವದೇರಾ, ಪೀಯೂಸ್ ಚಾವ್ಲಾ ಹಾಗೂ ನುವಾನ್ ತುಷಾರ ತಂಡ ಕೂಡಿಕೊಂಡಿದ್ದಾರೆ.
ಜೈಪುರ(ಏ.22): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 38ನೇ ಪಂದ್ಯದಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಹೈವೋಲ್ಟೇಜ್ ಕದನಕ್ಕೆ ಇಲ್ಲಿನ ಸವಾಯಿ ಮಾನ್‌ಸಿಂಗ್ ಮೈದಾನ ಆತಿಥ್ಯ ವಹಿಸಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ನೆಹಾಲ್ ವದೇರಾ, ಪೀಯೂಸ್ ಚಾವ್ಲಾ ಹಾಗೂ ನುವಾನ್ ತುಷಾರ ತಂಡ ಕೂಡಿಕೊಂಡಿದ್ದಾರೆ. ಇನ್ನೊಂದೆಡೆ ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಕುಲ್ದಿಪ್ ಸೆನ್ ಬದಲಿಗೆ ಸಂದೀಪ್ ಶರ್ಮಾ ತಂಡ ಕೂಡಿಕೊಂಡಿದ್ದಾರೆ.
ಒಂದು ಕಡೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಆಡಿದ 7 ಪಂದ್ಯಗಳಲ್ಲಿ 6 ಗೆಲುವು ಹಾಗೂ ಒಂದು ಸೋಲು ಸಹಿತ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನೊಂದು ಗೆಲುವು ರಾಯಲ್ಸ್ ಪಡೆಯನ್ನು ಪ್ಲೇ ಆಫ್ ಹೊಸ್ತಿಲಿಗೆ ಕೊಂಡೊಯ್ಯಲಿದೆ. ಇನ್ನೊಂದೆಡೆ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 7 ಪಂದ್ಯಗಳಲ್ಲಿ 3 ಗೆಲುವು ಹಾಗೂ 4 ಸೋಲುಗಳೊಂದಿಗೆ 6 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಐಪಿಎಲ್ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಒಟ್ಟು 28 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಮುಂಬೈ ಇಂಡಿಯನ್ಸ್ ತಂಡವು ಕೊಂಚ ಮೇಲುಗೈ ಸಾಧಿಸಿದೆ. 28 ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರಾಜಸ್ಥಾನ ರಾಯಲ್ಸ್ 13 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ.