ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜಿತೇಶ್ ಶರ್ಮಾ, ಫಿಲ್ ಸಾಲ್ಟ್ ಹಾಗೂ ಜೋಶ್ ಹೇಜಲ್‌ವುಡ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ
ಜೆಡ್ಡಾ: ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತಡವಾಗಿಯಾದರೂ ಉತ್ತಮ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಿದ್ದ ಆರ್‌ಸಿಬಿ ಫ್ರಾಂಚೈಸಿ, ಇದೀಗ ಸಾಕಷ್ಟು ಅಳೆದುತೂಗಿ ಇಬ್ಬರು ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಓರ್ವ ವೇಗದ ಬೌಲರ್ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಹೌದು, ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಇಂಗ್ಲೆಂಡ್ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಫಿಲ್ ಸಾಲ್ಟ್ ಅವರನ್ನು ಬರೋಬ್ಬರಿ 11.50 ಕೋಟಿ ರುಪಾಯಿಗೆ ಖರೀದಿಸುವಲ್ಲಿ ಆರ್‌ಸಿಬಿ ತಂಡವು ಯಶಸ್ವಿಯಾಗಿದೆ. ಫಿಲ್ ಸಾಲ್ಟ್, ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಜತೆಗೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ದಟ್ಟವಾಗಿದೆ.
ವೆಂಕಟೇಶ್ ಅಯ್ಯರ್‌ಗೆ ಖುಲಾಯಿಸಿದ ಅದೃಷ್ಟ; ದೊಡ್ಡ ಮೊತ್ತಕ್ಕೆ ಕೆಕೆಆರ್ ಪಾಲು!
ಇನ್ನು ಭಾರತದ ಪ್ರತಿಭಾನ್ವಿತ ವಿಕೆಟ್ ಕೀಪರ್ ಬ್ಯಾಟರ್ ಹಾಗೂ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿರುವ ಜಿತೇಶ್ ಶರ್ಮಾ ಅವರಿಗೆ 11 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸಿದ್ದ ಜಿತೇಶ್ ಶರ್ಮಾ ಇದೀಗ ಆರ್‌ಸಿಬಿ ಪಾಲಾಗಿದ್ದಾರೆ.
ಇನ್ನು 2023ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ಆಸ್ಟ್ರೇಲಿಯಾದ ಅನುಭವಿ ವೇಗಿ ಜೋಶ್ ಹೇಜಲ್‌ವುಡ್ ಅವರನ್ನು 12.50 ಕೋಟಿ ರುಪಾಯಿ ನೀಡಿ ಖರೀದಿಸುವಲ್ಲಿ ಬೆಂಗಳೂರು ತಂಡವು ಯಶಸ್ವಿಯಾಗಿದೆ.