
ಲಖನೌ: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ಅಭಿಯಾನ ಅಧಿಕೃತವಾಗಿ ಮುಕ್ತಾಯವಾಗಿದೆ. ಮೇ 30ರಂದು ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು 20 ರನ್ ಅಂತರದ ರೋಚಕ ಸೋಲು ಅನುಭವಿಸಿದೆ. ಮುಂಬೈ ನೀಡಿದ್ದ ಬೃಹತ್ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ಆರಂಭಿಕ ಆಘಾತದ ಹೊರತಾಗಿಯೂ ಆಕರ್ಷಕ ಬ್ಯಾಟಿಂಗ್ ನಡೆಸಿತು. ಇದರ ಹೊರತಾಗಿಯೂ ಗಿಲ್ ಪಡೆಗೆ ಸೋಲು ಎದುರಾಯಿತು. ಮುಂಬೈ ಇಂಡಿಯನ್ಸ್ ಎದುರು ಗುಜರಾತ್ ಟೈಟಾನ್ಸ್ ವಿರೋಚಿತ ಸೋಲು ಅನುಭವಿಸುತ್ತಿದ್ದಂತೆಯೇ ಟೈಟಾನ್ಸ್ ಹೆಡ್ ಕೋಚ್ ಆಶಿಶ್ ನೆಹ್ರಾ ಅವರ ಪುತ್ರ ಬಿಕ್ಕಿಬಿಕ್ಕಿ ಕಣ್ಣೀರಿಟ್ಟಿದ್ದು, ಇದರ ಕೆಲ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇನ್ನು ಇದರ ನಡುವೆ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್, ತಮ್ಮ ತಂಡದ ಬ್ಯಾಟರ್‌ಗಳು ವಿಕೆಟ್ ಕಳೆದುಕೊಳ್ಳುತ್ತಿದ್ದಂತೆಯೇ ಮುಗುಳು ನಗುತ್ತಿರುವುದು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಬಿಕ್ಕಿಬಿಕ್ಕಿ ಅತ್ತ ಆಶಿಶ್ ನೆಹ್ರಾ ಪುತ್ರ:
2025ರ ಐಪಿಎಲ್ ಟೂರ್ನಿಯಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ಅದ್ಭುತ ಪ್ರದರ್ಶನ ತೋರುವ ಮೂಲಕ ಎರಡನೇ ಬಾರಿಗೆ ಕಪ್ ಗೆಲ್ಲುವ ಆಸೆ ಮೂಡಿಸಿತ್ತು. ಆದರೆ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟಾನ್ಸ್ ಕನಸಿಗೆ ತಣ್ಣೀರೆರಚಿತು. ಕೊನೆಯ ಓವರ್‌ವರೆಗೆ ಸಾಗಿದ ಈ ಪಂದ್ಯದಲ್ಲಿ ಕೊನೆಗೂ ಪಂದ್ಯ ಮುಂಬೈ ಇಂಡಿಯನ್ಸ್ ಪಾಲಾಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಸೋಲುತ್ತಿದ್ದಂತೆಯೇ ವಿಡಿಯೋವೊಂದು ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ಆಶಿಶ್ ನೆಹ್ರಾ ಅವರ ಪುತ್ರ ಬಿಕ್ಕಿಬಿಕ್ಕಿ ಅಳುತ್ತಿರುವ ವಿಡಿಯೋ ವೈರಲ್ ಆಗಿದೆ.
2022ರ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇನ್ನು 2023ರ ಐಪಿಎಲ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು, ಆದರೆ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಮುಗ್ಗರಿಸುವ ಮೂಲಕ ರನ್ನರ್‌ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಈ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ಅಭಿಯಾನ ಎಲಿಮಿನೇಟರ್ ಹಂತದಲ್ಲೇ ಮುಕ್ತಾಯವಾಯಿತು.
ವಿಕೆಟ್ ಬೀಳುತ್ತಿದ್ದರೂ ನಗುತ್ತಿದ್ದ ಶುಭ್‌ಮನ್ ಗಿಲ್:
ಇನ್ನು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದ್ದ ಎಲಿಮಿನೇಟರ್ ಕದನದಲ್ಲಿ ಬೃಹತ್ ಗುರಿ ಬೆನ್ನತ್ತಿದ ಗುಜರಾತ್ ಗೆಲುವಿನತ್ತ ದಾಪುಗಾಲಿಡುತ್ತಿತ್ತು. ಆದರೆ ಮಧ್ಯದಲ್ಲಿ ವಾಷಿಂಗ್ಟನ್ ಸುಂದರ್ ಹಾಗೂ ಸಾಯಿ ಸುದರ್ಶನ್ ವಿಕೆಟ್ ಕಳೆದುಕೊಂಡಾಗ ಶುಭ್‌ಮನ್ ಗಿಲ್ ಮುಗುಳು ನಗುತ್ತಿರುವಂತೆ ಕಂಡು ಬಂತು. ಈ ವಿಡಿಯೋ ಕೂಡಾ ವೈರಲ್ ಆಗಿದೆ.
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೇ, ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್, ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 228 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ರೋಹಿತ್ ಶರ್ಮಾ 50 ಎಸೆತಗಳಲ್ಲಿ 81 ರನ್ ಸಿಡಿಸಿದರು. ಇನ್ನು ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ 6 ವಿಕೆಟ್ ಕಳೆದುಕೊಂಡು 208 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದೀಗ ಮುಂಬೈ ಇಂಡಿಯನ್ಸ್ ತಂಡವು ಕ್ವಾಲಿಫೈಯರ್ 2ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡವು ಜೂನ್ 3ರಂದು ನಡೆಯಲಿರುವ ಫೈನಲ್‌ನಲ್ಲಿ ಪ್ರಶಸ್ತಿಗಾಗಿ ಆರ್‌ಸಿಬಿ ಜತೆ ಸೆಣಸಾಡಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.