
ಬೆಂಗಳೂರು: ಬಹುನಿರೀಕ್ಷಿತ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭ ಯಾವಾಗ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಮುಂಬರುವ ಮಾರ್ಚ್ 26ರ ಗುರವಾರ ಆರಂಭವಾಗಿ ಮೇ 31ರ ಭಾನುವಾರ ನಡೆಯಲಿದೆ. ಐಪಿಎಲ್ ಮಿನಿ ಹರಾಜಿಗೂ ಮುನ್ನ ನಡೆದ ಐಪಿಎಲ್ ಫ್ರಾಂಚೈಸಿ ಹಾಗೂ ಐಪಿಎಲ್ ಅಥಾರಿಟೀಸ್‌ಗಳ ನಡುವೆ ಡಿಸೆಂಬರ್ 15ರಂದು ನಡೆದ ಸಭೆಯಲ್ಲಿ ಬಿಸಿಸಿಐ, ಈ ವಿಚಾರವನ್ನು ಖಚಿತಪಡಿಸಿತು. ಇನ್ನು ಐಪಿಎಲ್‌ನ ಉದ್ಘಾಟನಾ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆಯೋ ಅಥವಾ ಬೇರೆ ಕಡೆ ನಡೆಯಲಿದೆಯೋ ಎನ್ನುವ ಕುತೂಹಲಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ.
19ನೇ ಆವೃತ್ತಿಯ ಐಪಿಎಲ್ ಸಿಇಒ ಹೇಮಂಗ್ ಅಮಿನ್, 19ನೇ ಆವೃತ್ತಿಯ ಐಪಿಎಲ್ ಆರಂಭದ ಬಗ್ಗೆ ಎಲ್ಲಾ ಫ್ರಾಂಚೈಸಿಗಳಿಗೆ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ ಐಪಿಎಲ್‌ನ ಉದ್ಘಾಟನಾ ಪಂದ್ಯವು ಹಾಲಿ ಚಾಂಪಿಯನ್ ತಂಡವು ತನ್ನ ತವರಿನಲ್ಲಿ ಕಣಕ್ಕಿಳಿಯಲಿದೆ. ಆದರೆ ಚಿನ್ನಸ್ವಾಮಿ ಸ್ಟೇಡಿಯಂ ಲಭ್ಯತೆಯ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಆರ್‌ಸಿಬಿ ಸಂಭ್ರಮಾಚರಣೆ ವೇಳೆಯಲ್ಲಿ ನಡೆದ ಕಾಲ್ತುಳಿತದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಪಂದ್ಯಾವಳಿಗಳು ನಡೆದಿಲ್ಲ.
ಇನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಯೇ ಐಪಿಎಲ್ ಉದ್ಘಾಟನಾ ಪಂದ್ಯವು ನಡೆಯಲಿದೆಯೇ ಎನ್ನುವ ಪ್ರಶ್ನೆಗೆ, ಬಿಸಿಸಿಐ ಅಧಿಕಾರಿಗಳು, ಅಲ್ಲೇ ಆಯೋಜಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ನಡೆಸಲು ಅವಕಾಶ ನೀಡುವುದಾಗಿ ಹೇಳಿರುವುದು, ಬಿಸಿಸಿಐಗೆ ಮಾತಿಗೆ ಬಲ ಬಂದಂತೆ ಆಗಿದೆ.
18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆ ವೇಳೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದಾದ ಬಳಿಕ ಕರ್ನಾಟಕ ರಾಜ್ಯ ಸರ್ಕಾರವು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಿರಲಿಲ್ಲ. ಇದೇ ಕಾರಣಕ್ಕೆ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯು ಕೂಡಾ ಚಿನ್ನಸ್ವಾಮಿ ಸ್ಟೇಡಿಯಂನಿಂದ ಎತ್ತಂಗಡಿಯಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.