
ರಾಜ್‌ಕೋಟ್: ಕನ್ನಡಿಗ ಕೆ ಎಲ್ ರಾಹುಲ್ ಬಾರಿಸಿದ ಅಜೇಯ ಶತಕ ಹಾಗೂ ನಾಯಕ ಶುಭ್‌ಮನ್ ಗಿಲ್ ಬಾರಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಸವಾಲಿನ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ. ಕಿವೀಸ್ ಎದುರು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 284 ರನ್ ಬಾರಿಸಿದೆ. ಇದರೊಂದಿಗೆ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು ಸವಾಲಿನ ಗುರಿ ನೀಡಿದೆ.
ಇಲ್ಲಿನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ನಾಯಕ ಶುಭ್‌ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ 70 ರನ್‌ಗಳ ಜತೆಯಾಟವಾಡಿದರು. ಆರಂಭದಲ್ಲಿ ಕೊಂಚ ಎಚ್ಚರಿಕೆಯಿಂದ ಆಡಿದ ಈ ಜೋಡಿ, ಆ ಬಳಿಕ ಚುರುಕಾಗಿ ರನ್‌ಗಳಿಸುವತ್ತ ಮುಂದಾಯಿತು. ನಾಯಕ ರೋಹಿತ್ ಶರ್ಮಾ 38 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 24 ರನ್ ಸಿಡಿಸಿ ಕ್ರಿಸ್ಟಿನ್ ಕ್ಲಾರ್ಕ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸುತ್ತಿದ್ದ ಶುಭ್‌ಮನ್ ಗಿಲ್ 53 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 56 ರನ್ ಸಿಡಿಸಿ ಕೈಲ್ ಜೇಮಿಸನ್‌ಗೆ ವಿಕೆಟ್ ಒಪ್ಪಿಸಿದರು. ಉಪನಾಯಕ ಶ್ರೇಯಸ್ ಅಯ್ಯರ್ 8 ರನ್ ಗಳಿಸಿ ಕ್ರಿಸ್ಟಿನ್ ಕ್ಲಾರ್ಕ್‌ಗೆ ಎರಡನೇ ಬಲಿಯಾದರು. ಕಳೆದ ಐದು ಏಕದಿನ ಇನ್ನಿಂಗ್ಸ್‌ಗಳಲ್ಲಿ 50+ ರನ್ ಸಾಧನೆ ಮಾಡಿದ್ದ ವಿರಾಟ್ ಕೊಹ್ಲಿ ತಾವೆದುರಿಸಿದ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದರು. ಆದರೆ 23 ರನ್ ಗಳಿಸಿದ್ದಾಗ ಕ್ರಿಸ್ಟಿನ್ ಕ್ಲಾರ್ಕ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಐದನೇ ಕ್ರಮಾಂಕದಲ್ಲಿ ಕೆ ಎಲ್ ರಾಹುಲ್ ಬ್ಯಾಟಿಂಗ್ ಮಾಡಲಿಳಿದಾಗ ಟೀಂ ಇಂಡಿಯಾ 115 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ 191 ರನ್‌ಗಳಿಗೆ ಅಗ್ರಕ್ರಮಾಂಕದ ಐವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. ಹೀಗಿರುವಾಗ ಅತ್ಯಂತ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಕೆ ಎಲ್ ರಾಹುಲ್ ಬಾಲಂಗೋಚಿಗಳ ಸಹಾಯದಿಂದ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು. ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದ ರಾಹುಲ್, ಕೊನೆಯಲ್ಲಿ ಮೈಚಳಿ ಬಿಟ್ಟು ಬ್ಯಾಟ್ ಬೀಸಿದರು. ಅಂತಿಮವಾಗಿ ಕೇವಲ 92 ಎಸೆತಗಳನ್ನು ಎದುರಿಸಿದ ರಾಹುಲ್ 11 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 112 ರನ್ ಬಾರಿಸಿ ಅಜೇಯರಾಗುಳಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.