
ಜೊಹಾನ್ಸ್‌ಬರ್ಗ್(ಮೇ.24): ಆಧುನಿಕ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ಎಬಿ ಡಿವಿಲಿಯರ್ಸ್ (AB de Villiers), ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದು, 2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯಲ್ಲಿ ತಾವು ಆರ್‌ಸಿಬಿ ಪಾಳಯವನ್ನು ಕೂಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಮಿಸ್ಟರ್ 360 ಖ್ಯಾತಿಯ ಎಬಿಡಿ 2011ರಿಂದ 2021ರವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದರು. ಆರ್‌ಸಿಬಿ ಪರ ಎಬಿಡಿ ಹಲವಾರು ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸುವ ಮೂಲಕ ತಂಡ ಪಾಲಿಗೆ ಆಪತ್ಬಾಂಧವ ಎನಿಸಿದ್ದರು. ಆದರೆ 2022ನೇ ಸಾಲಿನ ಐಪಿಎಲ್‌ಗೂ ಮುನ್ನ ಎಬಿಡಿ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದರು.
2018ರಲ್ಲೇ ಎಬಿ ಡಿವಿಲಿಯರ್ಸ್ ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದರು. ಇದಾದ ಬಳಿಕವೂ ಎಬಿಡಿ ಫ್ರಾಂಚೈಸಿ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಬಳಿಕವೂ ಮೂರು ವರ್ಷಗಳ ಕಾಲ ಆರ್‌ಸಿಬಿ ತಂಡವನ್ನು ಎಬಿ ಡಿವಿಲಿಯರ್ಸ್ ಪ್ರತಿನಿಧಿಸಿದ್ದರು. ಆದರೆ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಮೆಗಾ ಹರಾಜಿಗೂ ಮುನ್ನ ಎಬಿಡಿ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಹೊರಗುಳಿದ್ದರೂ ಭರ್ಜರಿ ಫಾರ್ಮ್ ಉಳಿಸಿಕೊಂಡಿದ್ದ ಎಬಿಡಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದು, ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಅಚ್ಚರಿಯನ್ನುಂಟು ಮಾಡಿತ್ತು. ಆದರೀಗ ಎಬಿಡಿ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಮಿಸ್ಟರ್ ನ್ಯಾಗ್ಸ್ ಶೋನಲ್ಲಿ ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli), ಮುಂಬರುವ ದಿನಗಳಲ್ಲಿ ಎಬಿಡಿ ಆರ್‌ಸಿಬಿ ತಂಡವನ್ನು ಕೂಡಿಕೊಳ್ಳಬಹುದು ಎಂದು ಹೇಳಿದ್ದರು. ಇದೀಗ ಈ ವಿಚಾರದ ಕುರಿತಂತೆ ಎಬಿ ಡಿವಿಲಿಯರ್ಸ್ ಮನಬಿಚ್ಚಿ ಮಾತನಾಡಿದ್ದು, ಈ ವಿಚಾರದ ಬಗ್ಗೆ ವಿರಾಟ್ ಕೊಹ್ಲಿ ಮಾತನಾಡಿದ್ದು ಖುಷಿಯಾಯಿತು. ನಿಜ ಹೇಳಬೇಕೆಂದರೆ ಈ ಬಗ್ಗೆ ನಾವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೆ ಖಂಡಿತವಾಗಿಯೂ ಮುಂದಿನ ವರ್ಷ ನಾನು ಐಪಿಎಲ್ ಜತೆಗಿರುತ್ತೇನೆ. ಐಪಿಎಲ್‌ನಲ್ಲಿ ಯಾವ ಪಾತ್ರವನ್ನು ನಿಭಾಯಿಸುತ್ತೇನೆ ಎನ್ನುವ ವಿಚಾರ ಸ್ಪಷ್ಟವಾಗಿಲ್ಲ, ಆದರೆ ನಾನು ಅಲ್ಲಿರುತ್ತೇನೆ ಎಂದು ಎಬಿಡಿ ಹೇಳಿದ್ದಾರೆ.
IPL 2022: ಎಬಿ ಡಿವಿಲಿಯರ್ಸ್ ಕುರಿತಂತೆ ಗುಡ್ ನ್ಯೂಸ್ ನೀಡಿದ ವಿರಾಟ್ ಕೊಹ್ಲಿ..!
ಮುಂದಿನ ವರ್ಷ ಕೆಲ ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ ಎನ್ನುವ ಟ್ವೀಟ್‌ಗಳನ್ನು ಗಮನಿಸಿದ್ದೇನೆ. ಹಾಗಾಗಿ ನನ್ನ ಎರಡನೇ ತವರೂರಾದ ಬೆಂಗಳೂರಿಗೆ ಬಂದು ಚಿನ್ನಸ್ವಾಮಿ ಮೈದಾನದಲ್ಲಿ ತುಂಬಿದ ಪ್ರೇಕ್ಷಕರನ್ನು ನೋಡಲು ಉತ್ಸುಕನಾಗಿದ್ದೇನೆ. ನಾನು ಐಪಿಎಲ್‌ಗೆ ವಾಪಸ್ಸಾಗಲು ಪ್ರೀತಿಯಿಂದ ಎದುರು ನೋಡುತ್ತಿದ್ದೇನೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.
ಕಳೆದ 14 ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದರೂ ಸಹಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದುವರೆಗೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದ್ದು, ಮೇ 25ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂದಿನ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎಬಿ ಡಿವಿಲಿಯರ್ಸ್ ಆರ್‌ಸಿಬಿ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.