* ವೇಗಿ ಮೊಹಮ್ಮದ್ ಸಿರಾಜ್ ಪರ ಬ್ಯಾಟ್ ಬೀಸಿದ ದಿಗ್ಗಜ ಕ್ರಿಕೆಟಿಗ ಗುಂಡಪ್ಪ ವಿಶ್ವನಾಥ್
* ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಸಿರಾಜ್ ತಂಡಕ್ಕೆ ಆಸರೆಯಾಗಬಲ್ಲರು
* ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವು ಜೂನ್ 18ರಿಂದ ಆರಂಭ
ಬೆಂಗಳೂರು(ಜೂ.09): ನ್ಯೂಜಿಲೆಂಡ್ ಎದುರಿನ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಭಾರತ ಕ್ರಿಕೆಟ್ ತಂಡದ ಪಾಲಿಗೆ ಎಕ್ಸ್ ಫ್ಯಾಕ್ಟರ್ ಆಗಿ ಹೊರಹೊಮ್ಮುವ ಸಾಧ್ಯತೆ ಇದೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗುಂಡಪ್ಪ ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.
ಜೂನ್ 18ರಿಂದ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸೌಥಾಂಪ್ಟನ್‌ನಲ್ಲಿ ಆರಂಭವಾಗಲಿದ್ದು, ಪ್ರಶಸ್ತಿಗಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹಾಗೂ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡಗಳು ಕಾದಾಡಲಿವೆ. ಭಾರತ ಕ್ರಿಕೆಟ್ ತಂಡದಲ್ಲಿ ಪ್ರತಿಭಾನ್ವಿತ ವೇಗದ ಬೌಲರ್‌ಗಳಿದ್ದು, ಎಂತಹ ವಾತಾವರಣದಲ್ಲೂ ಸಹಾ ಮಾರಕ ದಾಳಿ ಸಂಘಟಿಸುವ ಕ್ಷಮತೆ ಹೊಂದಿದ್ದಾರೆ. ಇಂಗ್ಲೆಂಡ್‌ನ ಸೌಥಾಂಪ್ಟನ್ ವಾತಾವರಣ ಭಾರತ ಕ್ರಿಕೆಟ್ ತಂಡದ ವೇಗಿಗಳಿಗೆ ಅನುಕೂಲವಾಗಲಿದೆ ಎಂದು ಗುಂಡಪ್ಪ ವಿಶ್ವನಾಥ್ ಹೇಳಿದ್ದಾರೆ.
ಹೈದರಾಬಾದ್ ಮೂಲದ ವೇಗಿ ಮೊಹಮ್ಮದ್ ಸಿರಾಜ್ 2020-21ನೇ ಸಾಲಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಕೇವಲ 3 ಪಂದ್ಯಗಳನ್ನಾಡಿ 13 ವಿಕೆಟ್ ಕಬಳಿಸುವ ಮೂಲಕ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಎನಿಸಿದ್ದರು. ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಸಿರಾಜ್ ತಮ್ಮ ಮೊನಚಿನ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು.
ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್‌ಗೆ ಕಿವೀಸ್ ಪ್ರಮುಖ ಬೌಲರ್‌ಗಳಿಗೆ ವಿಶ್ರಾಂತಿ..!
ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವು ಭಾರತದ ಬೌಲರ್‌ಗಳು ವರ್ಸಸ್ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳ ನಡುವಿನ ಕಾದಾಟ ಎನ್ನಬಹುದು. ಭಾರತದ ಬೌಲಿಂಗ್ ಪಡೆ ಸಾಕಷ್ಟು ಬಲಿಷ್ಠವಾಗಿದೆ. ಶಮಿ, ಬುಮ್ರಾ, ಇಶಾಂತ್ ಹಾಗೂ ಸಿರಾಜ್ ಉತ್ತಮ ಲಯದಲ್ಲಿದ್ದಾರೆ. ಸಿರಾಜ್ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ತೋರಿದ್ದಾರೆ. ಹೀಗಾಗಿ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲೂ ಸಿರಾಜ್, ವಿರಾಟ್ ಕೊಹ್ಲಿ ಪಡೆಗೆ ನೆರವಾಗಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಗುಂಡಪ್ಪ ವಿಶ್ವನಾಥ್ ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.