
ನವದೆಹಲಿ(ಮಾ.25): 2022ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡದ ನಾಯಕತ್ವದಿಂದ ಮಹೇಂದ್ರ ಸಿಂಗ್ ಧೋನಿ (MS Dhoni) ಕೆಳಗಿಳಿದಿದ್ದಾರೆ. ಇದು ಐಪಿಎಲ್ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli), ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿಗೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ.
ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ ಇಬ್ಬರು ಮೈದಾನದೊಳಗೆ ಹಾಗೂ ಮೈದಾನದಾಚೆಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ನಾಲ್ಕು ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿರುವ ಧೋನಿ ನಾಯಕತ್ವದ ಯುಗಾಂತ್ಯವಾಗಿದೆ. ಹಳದಿ ಜೆರ್ಸಿಯಲ್ಲಿ ಅಮೋಘ ನಾಯಕತ್ವದ ನಿಭಾಯಿಸಿದ್ದೀರಾ ಸ್ಕಿಪ್. ಆ ಅಧ್ಯಾಯವನ್ನು ಅಭಿಮಾನಿಗಳು ಎಂದೆಂದಿಗೂ ಮರೆಯುವುದಿಲ್ಲ. ಯಾವಾಗಲೂ ನಿಮ್ಮ ಮೇಲೆ ಗೌರವವಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ
ಮಾರ್ಚ್ 24ರಂದು ಅಂದರೆ 15ನೇ ಆವೃತ್ತಿಯ ಐಪಿಎಲ್ (IPL 2022) ಟೂರ್ನಿ ಆರಂಭಕ್ಕೆ ಎರಡು ದಿನಗಳು ಭಾಕಿ ಇರುವಾಗಲೇ ಧೋನಿ ತಮ್ಮ ನಾಯಕತ್ವವನ್ನು ಆಲ್ರೌಂಡರ್ ರವೀಂದ್ರ ಜಡೇಜಾಗೆ ವರ್ಗಾಯಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಘೋಷಿಸಿತ್ತು. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಕಳೆದ ಆವೃತ್ತಿಯ ರನ್ನರ್ ಅಪ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. 2021ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
IPL 2022 ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ರವೀಂದ್ರ ಜಡೇಜಾಗೆ ನೀಡಿದ ಎಂಎಸ್ ಧೋನಿ!
ಇನ್ನೊಂದೆಡೆ 15ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಕೂಡಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಆರ್‌ಸಿಬಿ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಹೀಗಾಗಿ ಉಭಯ ತಂಡಗಳಲ್ಲಿ ಧೋನಿ ಹಾಗೂ ಕೊಹ್ಲಿ ಕೇವಲ ಆಟಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ.
213 ಪಂದ್ಯಗಳಿಗೆ ನಾಯಕತ್ವ
ಧೋನಿ ಐಪಿಎಲ್ ಹಾಗೂ ಚಾಂಪಿಯನ್ಸ್ ಲೀಗ್ ಟಿ20ಯಲ್ಲಿ ಒಟ್ಟಾರೆ 213 ಪಂದ್ಯಗಳಲ್ಲಿ ಚೆನ್ನೈ ನಾಯಕತ್ವ ವಹಿಸಿದ್ದರು. ಈ ಪೈಕಿ 130 ಪಂದ್ಯಗಳಲ್ಲಿ ಚೆನ್ನೈ ಗೆದ್ದಿದ್ದರೆ, 81 ಪಂದ್ಯಗಳಲ್ಲಿ ಸೋಲನುಭವಿಸಿದೆ.
4 ಬಾರಿ ಚಾಂಪಿಯನ್, 5 ಬಾರಿ ರನ್ನರ್-ಅಪ್!
ಧೋನಿ ಐಪಿಎಲ್ ಕಂಡ ಅತ್ಯಂತ ಯಶಸ್ವಿ ನಾಯಕ. 2020ರ ಆವೃತ್ತಿ ಹೊರತುಪಡಿಸಿ ಉಳಿದೆಲ್ಲಾ ವರ್ಷ ಚೆನ್ನೈಯನ್ನು ಪ್ಲೇ-ಆಪ್‌ಗೇರಿಸಿದ್ದ ಧೋನಿ, 9 ಬಾರಿ ತಂಡವನ್ನು ಫೈನಲ್‌ಗೆ ಮುನ್ನಡೆಸಿದ್ದರು. ಈ ಪೈಕಿ 2010, 2011, 2018 ಹಾಗೂ 2021ರಲ್ಲಿ ಚೆನ್ನೈ ಚಾಂಪಿಯನ್ ಪಟ್ಟಅಲಂಕರಿಸಿತ್ತು. 2008, 2012, 2013, 2015 ಹಾಗೂ 2019ರಲ್ಲಿ ರನ್ನರ್-ಅಪ್ ಆಗಿತ್ತು.
ಚೊಚ್ಚಲ ಆವೃತ್ತಿಯ ಐಪಿಎಲ್ ಟೂರ್ನಿಯಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಾ ಬಂದಿರುವ ಮಹೇಂದ್ರ ಸಿಂಗ್ ಧೋನಿ, ಹನ್ನೆರಡು ವರ್ಷಗಳ ಅವಧಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಾಲ್ಕು ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ಇದಷ್ಟೇ ಅಲ್ಲದೇ ಎರಡು ಬಾರಿ ಚಾಂಪಿಯನ್ಸ್ ಲೀಗ್ ಟಿ20 ಟೂರ್ನಿಯಲ್ಲಿ ಸಿಎಸ್‌ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. 15ನೇ ಆವೃತ್ತಿಯ ಐಪಿಎಲ್ ಆಟಗಾರರ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮಹೇಂದ್ರ ಸಿಂಗ್ ಧೋನಿ, ರವೀಂದ್ರ ಜಡೇಜಾ, ಋತುರಾಜ್ ಗಾಯಕ್ವಾಡ್ ಹಾಗೂ ಮೋಯಿನ್ ಅಲಿಯನ್ನು ರೀಟೈನ್ ಮಾಡಿಕೊಂಡಿತ್ತು. ಇದೀಗ ಧೋನಿ ಸಹ ಆಟಗಾರ ಜಡೇಜಾಗೆ ನಾಯಕತ್ವ ಪಟ್ಟ ಕಟ್ಟುವ ಮೂಲಕ ಹೊಸ ರಣತಂತ್ರ ಹೆಣೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.