
ಬೆಂಗಳೂರು(ಮಾ.06): ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ವಿರುದ್ದ ಇನಿಂಗ್ಸ್ ಹಾಗೂ 25 ರನ್‌ಗಳ ಜಯ ಸಾಧಿಸುವ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಈ ಸರಣಿ ಗೆಲುವಿನೊಂದಿಗೆ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆಗಿಟ್ಟಿಸಿಕೊಂಡಿದೆ.
ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 205 ರನ್ ಬಾರಿಸಿ ಸರ್ವಪತನ ಕಂಡಿತ್ತು. ಇದಕ್ಕುತ್ತರವಾಗಿ ಭಾರತ ರಿಷಭ್ ಪಂತ್ ಆಕರ್ಷಕ ಶತಕ ಹಾಗೂ ವಾಷಿಂಗ್ಟನ್ ಸುಂದರ್ ಅಜೇಯ 96 ರನ್‌ಗಳ ನೆರವಿನಿಂದ 365 ರನ್ ಕಲೆಹಾಕುವ ಮೂಲಕ ಮೊದಲ ಇನಿಂಗ್ಸ್‌ನಲ್ಲಿ 160 ರನ್‌ಗಳ ಮುನ್ನಡೆ ಸಾಧಿಸಿತ್ತು. ಭಾರೀ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಅಶ್ವಿನ್ ಹಾಗೂ ಅಕ್ಷರ್ ಪಟೇಲ್ ಮಾರಕ ದಾಳಿಗೆ ತತ್ತರಿಸಿ ಕೇವಲ 135 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಇನಿಂಗ್ಸ್ ಸೋಲು ಕಂಡಿತು.
ಟೀಂ ಇಂಡಿಯಾ ದಿಗ್ವಿಜಯ; ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೇರಿದ ಭಾರತ
ಟೂರ್ನಿಯುದ್ಧಕ್ಕೂ ಅತ್ಯದ್ಭುತ ಬೌಲಿಂಗ್ ಪ್ರದರ್ಶನ ತೋರಿದ ರವಿಚಂದ್ರನ್ ಅಶ್ವಿನ್ 4 ಪಂದ್ಯಗಳಿಂದ 32 ವಿಕೆಟ್ ಕಬಳಿಸಿದರೆ, ಚೊಚ್ಚಲ ಟೆಸ್ಟ್ ಸರಣಿಯಾಡಿದ ಅಕ್ಷರ್ ಪಟೇಲ್ ಕೇವಲ 3 ಪಂದ್ಯಗಳನ್ನಾಡಿ 27 ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಇನ್ನಿಲ್ಲದಂತೆ ಕಾಡಿದರು. ಟೀಂ ಇಂಡಿಯಾದ ಈ ಆಲ್ರೌಂಡ್ ಪ್ರದರ್ಶನಕ್ಕೆ ಕ್ರಿಕೆಟ್‌ನ ನಾನಾ ಮೂಲೆಗಳಿಂದ ಮೆಚ್ಚುಗೆಗಳ ಸುರಿಮಳೆಯೇ ಹರಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂಗ್ಲೆಂಡ್ ಮಾಜಿ ಕ್ರಿಕೆಟಿಗರು ಸೇರಿದಂತೆ ಹಲವು ಮಂದಿ ಜೈ ಹೋ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.