
ಧರ್ಮಶಾಲಾ(ಮೇ.09): ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಇದೀಗ ಮಳೆರಾಯ ಅಡ್ಡಿಯಾಗಿದ್ದಾನೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಆರ್‌ಸಿಬಿ ತಂಡಕ್ಕೆ ರಜತ್ ಪಾಟೀದಾರ್ ಸ್ಪೋಟಕ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಮೊದಲ 10 ಓವರ್ ಅಂತ್ಯದ ವೇಳೆಗೆ ಆರ್‌ಸಿಬಿ 3 ವಿಕೆಟ್ ಕಳೆದುಕೊಂಡು 119 ರನ್ ಬಾರಿಸಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಆರ್‌ಸಿಬಿ ತಂಡಕ್ಕೆ ಕನ್ನಡದ ವೇಗಿ ವಿದ್ವತ್ ಕಾವೇರಪ್ಪ ಶಾಕ್ ನೀಡಿದರು. ಚೊಚ್ಚಲ ಐಪಿಎಲ್ ಪಂದ್ಯವನ್ನಾಡುತ್ತಿರುವ ಕಾವೇರಪ್ಪ ತಾವೆಸೆದ ಎರಡನೇ ಓವರ್‌ನಲ್ಲೇ ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಇನ್ನು ಕಾವೇರಪ್ಪ ತಮ್ಮ ಪಾಲಿನ ಮೂರನೇ ಓವರ್‌ನಲ್ಲಿ ಅಪಾಯಕಾರಿ ಬ್ಯಾಟರ್ ವಿಲ್ ಜ್ಯಾಕ್ಸ್‌ಗೂ ಪೆವಿಲಿಯನ್ ಹಾದಿ ತೋರಿಸಿದರು. ಫಾಫ್ 7 ರನ್ ಗಳಿಸಿದರೆ, ಜ್ಯಾಕ್ಸ್ 12 ರನ್ ಗಳಿಸಿ ವಿದ್ವತ್ ಕಾವೇರಪ್ಪಗೆ ಎರಡನೇ ಬಲಿಯಾದರು.
IPL 2024: ಆರ್‌ಸಿಬಿ ಎದುರು ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ; 2 ತಂಡದಲ್ಲೂ ಒಂದು ಮೇಜರ್ ಚೇಂಜ್
ಮಳೆಗೂ ಮುನ್ನ ರಜತ್-ಕೊಹ್ಲಿ ಧಮಾಕ: ಪ್ಲೇ ಆಫ್ ಪ್ರವೇಶಿಸಿವ ದೃಷ್ಟಿಯಲ್ಲಿ ಉಭಯ ತಂಡಗಳಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿರುವ ಈ ಹಣಾಹಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರಜತ್ ಪಾಟೀದಾರ್ ಸ್ಪೋಟಕ ಬ್ಯಾಟಿಂಗ್ ಮೂಲಕ ಮಿಂಚಿದ್ದಾರೆ. ತಮಗೆ ಸಿಕ್ಕ ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ಈ ಜೋಡಿ ಯಶಸ್ವಿಯಾಯಿತು.
ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆರ್‌ಸಿಬಿ ತಂಡಕ್ಕೆ ಮೂರನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿರಾಟ್ ಕೊಹ್ಲಿ ಕೇವಲ 32 ಎಸೆತಗಳಲ್ಲಿ 76 ರನ್ ಸಿಡಿಸುವ ಮೂಲಕ ತಂಡವನ್ನು ನೂರರ ಗಡಿ ಡಾಟಿಸಿದರು. ಪಾಟೀದಾರ್ 23 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 55 ರನ್ ಬಾರಿಸಿ ಸ್ಯಾಮ್ ಕರ್ರನ್ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ವಿರಾಟ್ ಕೊಹ್ಲಿ 23 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 42 ರನ್ ಸಿಡಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.