
ದೆಹಲಿ: ಜೋಶ್ ಹೇಜಲ್‌ವುಡ್, ಭುವನೇಶ್ವರ್ ಕುಮಾರ್ ಮಾರಕ ದಾಳಿ, ಬ್ಯಾಟರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ಎದುರು 9 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ತವರಿನಲ್ಲಿ ಅನುಭವಿಸಿದ್ದ ಸೋಲಿಗೆ ಆರ್‌ಸಿಬಿ ತಂಡವು ಡೆಲ್ಲಿಗೆ ನುಗ್ಗಿ ಅವರದ್ದೇ ನೆಲದಲ್ಲಿ ಅಕ್ಷರ್ ಪಟೇಲ್ ಪಡೆಯನ್ನು ಹೀನಾಯವಾಗಿ ಸೋಲಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ತಂಡವು ಮತ್ತೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಹೌದು, ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹೇಜಲ್‌ವುಡ್ ಅಕ್ಷರಶಃ ಡೆಲ್ಲಿ ಬ್ಯಾಟರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸಿದರು. ಪರಿಣಾಮ ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ 8 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಆರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು.
ಇದಾದ ಬಳಿಕ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಅಭಿಷೇಕ್ ಪೊರೆಲ್ 30 ರನ್ ಬಾರಿಸುವ ಮೂಲಕ ಡೆಲ್ಲಿ 50 ರನ್‌ಗಳಗಾಗಿ ಆಲೌಟ್ ಆಗುವ ಭೀತಿಯಿಂದ ಪಾರು ಮಾಡಿದರು. ಇನ್ನು ಡೇವಿಡ್ ಮಿಲ್ಲರ್ 19 ಹಾಗೂ ಕೈಲ್ ಜೇಮಿಸನ್ 12 ರನ್ ಬಾರಿಸಿ ತಂಡಕ್ಕೆ ಅಲ್ಪ ಕಾಣಿಕೆ ನೀಡಿದರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ 16.3 ಓವರ್‌ಗಳಲ್ಲಿ ಕೇವಲ 75 ರನ್‌ಗಳಿಗೆ ಸರ್ವಪತನ ಕಂಡಿತು.
ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ ಮೂರು ಓವರ್ ಬೌಲಿಂಗ್ ಮಾಡಿ ಕೇವಲ 5 ರನ್ ನೀಡಿ 3 ವಿಕೆಟ್ ಪಡೆದರೆ, ಜೋಶ್ ಹೇಜಲ್‌ವುಡ್ 3.3 ಓವರ್‌ಗಳಲ್ಲಿ 12 ರನ್‌ಗಳಿಗೆ 4 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು. ಇನ್ನುಳಿದಂತೆ ರಸಿಕ್ ಸಲಂ ಧರ್, ಕೃನಾಲ್ ಪಾಂಡ್ಯ ಹಾಗೂ ಸುಯಾಶ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
ಇನ್ನು ಸಾಧಾರಣ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು ಕೇವಲ 6.3 ಓವರ್‌ಗಳಲ್ಲಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಯಿತು. ಜೇಕಬ್ ಬೆಥೆಲ್ 20 ರನ್ ಸಿಡಿಸಿ ಕೈಲ್ ಜೇಮಿಸನ್‌ಗೆ ವಿಕೆಟ್ ಒಪ್ಪಿಸಿದರು. ಇನ್ನುಳಿದಂತೆ ದೇವದತ್ ಪಡಿಕ್ಕಲ್ ಅಜೇಯ 34 ರನ್ ಸಿಡಿಸಿದರೆ, ವಿರಾಟ್ ಕೊಹ್ಲಿ 23 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.