IPL 2022: ಚೆನ್ನೈ ಸೂಪರ್ ಕಿಂಗ್ಸ್‌ ಎದುರಿನ ಪಂದ್ಯಕ್ಕೆ ಆರ್‌ಸಿಬಿ ತಂಡದಲ್ಲಿ ಎರಡು ಮಹತ್ವದ ಬದಲಾವಣೆ..?

By Naveen Kodase  |  First Published Apr 12, 2022, 5:09 PM IST

* ಆರ್‌ಸಿಬಿ ಎದುರು ಮೊದಲ ಗೆಲುವಿನ ಕನವರಿಕೆಯಲ್ಲಿದೆ ಚೆನ್ನೈ ಸೂಪರ್ ಕಿಂಗ್ಸ್‌

* ಆರ್‌ಸಿಬಿ ತಂಡದಲ್ಲಿಂದು ಎರಡು ಬದಲಾವಣೆಗಳಾಗುವ ಸಾಧ್ಯತೆ

* ಜೋಶ್ ಹೇಜಲ್‌ವುಡ್‌ ಇಂದು ಆರ್‌ಸಿಬಿ ಪರ ಕಣಕ್ಕಿಳಿಯುವುದು ಬಹುತೇಕ ಖಚಿತ


ನವಿ ಮುಂಬೈ(ಏ.12): ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ. ಇಂದು(ಏ.12) ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಹೈವೋಲ್ಟೇಜ್‌ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಸುವ ಸಾಧ್ಯತೆಯಿದೆ. 

15ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ 22ನೇ ಪಂದ್ಯ ಇದಾಗಿದ್ದು, ದಕ್ಷಿಣ ಭಾರತದ ಎರಡು ಬಲಾಢ್ಯ ತಂಡಗಳ ನಡುವಿನ ಕಾದಾಟವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಐಪಿಎಲ್‌ನ ಎರಡು ಸಾಂಪ್ರದಾಯಿಕ ಎದುರಾಳಿಗಳು ಎಂದು ಗುರುತಿಸಿಕೊಂಡಿರುವ ಈ ಪಂದ್ಯ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ. ಸದ್ಯ ಫಾಫ್ ಡು ಪ್ಲೆಸಿಸ್ (Faf du Plessis) ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ 4 ಪಂದ್ಯಗಳ ಪೈಕಿ 3 ಗೆಲುವು ಹಾಗೂ ಒಂದು ಸೋಲು ಸಹಿತ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶ ಆರ್‌ಸಿಬಿ ತಂಡಕ್ಕಿದೆ. ಇನ್ನೊಂದೆಡೆ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಾನಾಡಿದ ಮೊದಲ 4 ಪಂದ್ಯಗಳಲ್ಲೂ ಹೀನಾಯ ಸೋಲು ಕಂಡು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಇಂದು ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ. 

Tap to resize

Latest Videos

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಉಭಯ ತಂಡಗಳು ಒಟ್ಟು 28 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸ್ಪಷ್ಟ ಮೇಲುಗೈ ಸಾಧಿಸಿದೆ. 28 ಪಂದ್ಯಗಳ ಪೈಕಿ 18 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ನಗೆ ಬೀರಿದ್ದರೆ, 9 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗೆಲುವಿನ ಸಿಹಿಯುಂಡಿದೆ. ಇನ್ನೊಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ಲಭಿಸಿರಲಿಲ್ಲ.

ಆರ್‌ಸಿಬಿ ತಂಡದಲ್ಲಿ ಎರಡು ಬದಲಾವಣೆ..?

ಹೌದು, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ಬಹುತೇಕ ಖಚಿತ ಎನಿಸಿದೆ. ಹರ್ಷಲ್‌ ಪಟೇಲ್ ವೈಯುಕ್ತಿಕ ಸಮಸ್ಯೆಯಿಂದ ಬಯೋಬಬಲ್ ತೊರೆದು ಮನೆಗೆ ಹೋಗಿದ್ದಾರೆ. ಹೀಗಾಗಿ ಹರ್ಷಲ್ ಪಟೇಲ್ (Harshal Patel) ಬದಲಿಗೆ ಮಹಿಪಾಲ್ ಲೋಮ್ರೊರ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ. ಇನ್ನು ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್‌ ತಂಡದ ಆಯ್ಕೆಗೆ ಲಭ್ಯರಾಗಿರುವುದರಿಂದಾಗಿ ಡೇವಿಡ್ ವಿಲ್ಲಿ ಬದಲಿಗೆ ಜೋಶ್ ಹೇಜಲ್‌ವುಡ್‌ ಆರ್‌ಸಿಬಿ ತಂಡ ಕೂಡಿಕೊಳ್ಳುವುದು ಬಹುತೇಕ ಖಚಿತ ಎನಿಸಲಿದೆ..

IPL 2022: ರಾಯಲ್ ಚಾಲೆಂಜರ್ಸ್‌ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಗೆಲ್ಲೋರು ಯಾರು..?

ಇನ್ನುಳಿದಂತೆ ಆರಂಭಿಕರಾಗಿ ಫಾಫ್ ಡು ಪ್ಲೆಸಿಸ್ ಹಾಗೂ ಅನೂಜ್ ರಾವತ್ ಕಣಕ್ಕಿಳಿದರೆ, ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ. ಆಲ್ರೌಂಡರ್ ರೂಪದಲ್ಲಿ ಶೆಹಬಾಜ್ ಅಹಮ್ಮದ್, ಮಹಿಪಾಲ್ ಲೋಮ್ರರ್ ಹಾಗೂ ವನಿಂದು ಹಸರಂಗ ಕಾಣಿಸಿಕೊಂಡರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಆಕಾಶ್ ದೀಪ್, ಮೊಹಮ್ಮದ್ ಸಿರಾಜ್ ಹಾಗೂ ಜೋಶ್ ಹೇಜಲ್‌ವುಡ್‌ ಕಾಣಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಸಂಭವನೀಯ ಆಟಗಾರರ ಪಟ್ಟಿ

ಆರ್‌ಸಿಬಿ: ಫಾಫ್ ಡು ಪ್ಲೆಸಿಸ್(ನಾಯಕ), ಅನೂಜ್ ರಾವತ್‌, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್‌, ದಿನೇಶ್ ಕಾರ್ತಿಕ್‌, ಮಹಿಪಾಲ್ ಲೊಮ್ರೊರ್‌, ಶಾಬಾಜ್ ಅಹಮ್ಮದ್‌, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್‌, ಆಕಾಶ್‌ದೀಪ್ ಸಿಂಗ್‌, ಜೋಶ್ ಹೇಜಲ್‌ವುಡ್‌.

ಚೆನ್ನೈ: ಋುತುರಾಜ್ ಗಾಯಕ್ವಾಡ್‌, ರಾಬಿನ್ ಉತ್ತಪ್ಪ, ಮೋಯಿನ್ ಅಲಿ, ಅಂಬಟಿ ರಾಯುಡು, ಎಂ ಎಸ್ ಧೋನಿ, ರವೀಂದ್ರ ಜಡೇಜಾ(ನಾಯಕ), ಶಿವಂ ದುಬೆ, ಡ್ವೇನ್ ಬ್ರಾವೋ, ಕ್ರಿಸ್ ಜೋರ್ಡನ್‌, ಡ್ವೇನ್ ಪ್ರಿಟೋರಿಯಸ್‌, ಮುಕೇಶ್ ಚೌಧರಿ‌.

ಸ್ಥಳ: ನವಿ ಮುಂಬೈ, ಡಿ.ವೈ.ಪಾಟೀಲ್‌ ಸ್ಟೇಡಿಯಂ
ಪಂದ್ಯ: ಸಂಜೆ 7.30ಕ್ಕೆ, 
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

click me!