
ಮುಂಬೈ: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸೂಪರ್ ಸಂಡೆಯ ಎರಡನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಇಂದು ಸಂಜೆ 7.30ರಿಂದ ಆರಂಭವಾಗಲಿದ್ದು, ಈ ಹೈವೋಲ್ಟೇಜ್ ಕದನಕ್ಕೆ ಐತಿಹಾಸಿಕ ಮುಂಬೈನ ವಾಂಖೆಡೆ ಮೈದಾನ ಆತಿಥ್ಯ ವಹಿಸಿದೆ.
ಇನ್ನು ಈ ಪಂದ್ಯವು ಹಲವು ಕಾರಣಗಳಿಗೆ ಮಹತ್ವವನ್ನು ಪಡೆದುಕೊಂಡಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಹಾಗೂ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಗುವಾಹಟಿಯಲ್ಲಿ ತಾವಾಡಿದ ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಸೋಲು ಅನುಭವಿಸಿದ್ದು ಇದೀಗ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿವೆ. ಆರ್‌ಸಿಬಿ ತವರಿನಲ್ಲಿ ಆಡಿದ ಎರಡು ಪಂದ್ಯಗಳನ್ನು ಗೆದ್ದು, ತವರಿನಾಚೆ ಒಂದು ಪಂದ್ಯ ಸೋತು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ 2012ರ ಬಳಿಕ ತಾನಾಡಿದ ಮೊದಲ ಪಂದ್ಯ ಗೆದ್ದು ಐಪಿಎಲ್‌ನಲ್ಲಿ ಶುಭಾರಂಭ ಮಾಡಿತ್ತು. ಆದರೆ ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಎದುರು ಸೋಲು ಅನುಭವಿಸಿದ್ದು, ಇದೀಗ ಹ್ಯಾಟ್ರಿಕ್ ಸೋಲಿನ ಭೀತಿಗೆ ಸಿಲುಕಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳು ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ಕಳೆದ ಪಂದ್ಯದಲ್ಲಿ ಆರ್‌ಸಿಬಿ ತಂಡವು 201 ರನ್ ಬಾರಿಸಿದ ಹೊರತಾಗಿಯೂ ರಾಜಸ್ಥಾನ ರಾಯಲ್ಸ್ ಎದುರು ಇನ್ನೂ ಎರಡು ಓವರ್ ಬಾಕಿ ಇರುವಂತೆಯೇ ಸೋಲು ಒಪ್ಪಿಕೊಂಡಿತ್ತು. ಇದಕ್ಕೆ ಕಾರಣ ದುಬಾರಿ ಬೌಲಿಂಗ್. ಅದರಲ್ಲೂ ಅಭಿನಂದನ್ ಸಿಂಗ್ ಕಳೆದ ಮೂರು ಪಂದ್ಯಗಳಲ್ಲೂ ಸಾಕಷ್ಟು ದುಬಾರಿಯಾಗಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಅಭಿನಂದನ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಿ, ಮಂಗೇಶ್ ಯಾದವ್ ಅವರಿಗೆ ಆರ್‌ಸಿಬಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಆರ್‌ಸಿಬಿ ಮಾತ್ರವಲ್ಲದೇ ಮುಂಬೈ ಇಂಡಿಯನ್ಸ್ ತಂಡದಲ್ಲೂ ಎರಡು ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಯಿದೆ. ಯಾಕೆಂದರೆ ಮುಂಬೈ ಇಂಡಿಯನ್ಸ್ ತಂಡವು ಕಳೆದ ಮೂರು ಪಂದ್ಯಗಳಿಂದ ಎದುರಾಳಿಯ ಕೇವಲ 10 ವಿಕೆಟ್ ಕಬಳಿಸಲಷ್ಟೇ ಶಕ್ತವಾಗಿದೆ. ಅದರಲ್ಲೂ ಜಸ್ಪ್ರೀತ್ ಬುಮ್ರಾ ಹೊರತುಪಡಿಸಿ ಉಳಿದೆಲ್ಲಾ ಬೌಲರ್‌ಗಳು ದುಬಾರಿಯಾಗುತ್ತಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್‌ಗೆ ವಿಶ್ರಾಂತಿ ನೀಡಿ ಕಾರ್ಬಿನ್ ಬಾಷ್‌ಗೆ ಮುಂಬೈ ಆಡುವ ಹನ್ನೊಂದರ ಬಳಗದಲ್ಲಿ ಮಣೆ ಹಾಕು ಸಾಧ್ಯತೆಯಿದೆ. ಇನ್ನು ಇದಷ್ಟೇ ಅಲ್ಲದೇ ಅನುಭವಿ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಇಂದಿನ ಪಂದ್ಯಕ್ಕೆ ಸಂಪೂರ್ಣ ಫಿಟ್ ಆಗಿದ್ದು, ಘಜನ್‌ಪರ್ ಬದಲಿಗೆ ಸ್ಯಾಂಟ್ನರ್ ಮುಂಬೈ ತಂಡ ಕೂಡಿಕೊಳ್ಳುವ ನಿರೀಕ್ಷೆಯಿದೆ.
ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್ (ನಾಯಕ), ಟಿಮ್ ಡೇವಿಡ್, ಜಿತೇಶ್ ಶರ್ಮಾ, ರೊಮ್ಯಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್/ಮಂಗೇಶ್ ಯಾದವ್, ಜೋಶ್ ಹೇಜಲ್‌ವುಡ್, ಸುಯಶ್ ಶರ್ಮಾ.
ಮುಂಬೈ ಇಂಡಿಯನ್ಸ್: ರಿಯನ್ ರಿಕೆಲ್ಟನ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಶೆರ್ಫಾನೆ ರುದರ್‌ಫೋರ್ಡ್, ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಕಾರ್ಬಿನ್ ಬಾಷ್/ ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.
ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್/ಜಿಯೋ ಹಾಟ್‌ಸ್ಟಾರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.