
ಕೋಲ್ಕತಾ: ಮಹಿಳಾ ವಿಶ್ವಕಪ್ ವಿಜೇತೆ, ಬಂಗಾಳದ ಆಟಗಾರ್ತಿ ರಿಚಾ ಘೋಷ್‌ಗೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಮತ್ತು ಬಂಗಾಳ ಕ್ರಿಕೆಟ್ ಅಸೋಸಿಯೇಷನ್‌ನಿಂದ ಗೌರವ ಸಮರ್ಪಣೆ ಮಾಡಲಾಯಿತು. ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ರಿಚಾಗೆ ಬಂಗಾಳ ಸರ್ಕಾರ ಬಂಗಭೂಷಣ ಪ್ರಶಸ್ತಿ ಹಾಗೂ ಪೊಲೀಸ್ ಇಲಾಖೆಯಲ್ಲಿ ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಡಿಎಸ್‌ಪಿ) ಹುದ್ದೆ ನೀಡಿ ಗೌರವಿಸಿದೆ. ಇದರೊಂದಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಿಚಾಗೆ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದರು.
ವಿಶ್ವಕಪ್ ಫೈನಲ್‌ನಲ್ಲಿ ರಿಚಾ ಗಳಿಸಿದ ಪ್ರತಿ ರನ್‌ಗೆ ತಲಾ ಒಂದು ಲಕ್ಷ ರೂಪಾಯಿಯಂತೆ 34 ಲಕ್ಷ ರೂಪಾಯಿ ಚೆಕ್ ಅನ್ನು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಸೌರವ್ ಗಂಗೂಲಿ ಅವರು ರಿಚಾಗೆ ನೀಡಿದರು. ವಿಶ್ವಕಪ್ ಗೆಲ್ಲುವುದು ಎಷ್ಟು ವಿಶೇಷ ಎಂಬುದು ನನಗೆ ಚೆನ್ನಾಗಿ ತಿಳಿದಿದೆ ಎಂದು 2003ರ ವಿಶ್ವಕಪ್‌ನಲ್ಲಿ ಭಾರತವನ್ನು ಫೈನಲ್‌ಗೆ ಮುನ್ನಡೆಸಿದ್ದ ನಾಯಕ ಸೌರವ್ ಗಂಗೂಲಿ ಹೇಳಿದರು. 22 ವರ್ಷದ ರಿಚಾ ಅವರ ವೃತ್ತಿಜೀವನ ಈಗಷ್ಟೇ ಆರಂಭವಾಗಿದೆ, ಭವಿಷ್ಯದಲ್ಲಿ 'ಭಾರತದ ನಾಯಕಿ ರಿಚಾ ಘೋಷ್' ಎಂದು ಕರೆಯುವಂತಾಗಲಿ ಎಂದು ಗಂಗೂಲಿ ಹಾರೈಸಿದರು. ಮುಂದಿನ ಐದಾರು ವರ್ಷಗಳಲ್ಲಿ ಭಾರತದಲ್ಲಿ ಮಹಿಳಾ ಕ್ರಿಕೆಟ್ ಅಭೂತಪೂರ್ವ ಬೆಳವಣಿಗೆಯನ್ನು ಕಾಣಲಿದೆ ಎಂದು ಗಂಗೂಲಿ ಸ್ಪಷ್ಟಪಡಿಸಿದರು.
ವಿಶ್ವಕಪ್ ಗೆದ್ದ ಮೊದಲ ಬಂಗಾಳದ ಆಟಗಾರ್ತಿ ಎನ್ನುವ ಹಿರಿಮೆಗೆ ರಿಚಾ ಘೋಷ್ ಪಾತ್ರರಾದರು. ಈ ಸಮಾರಂಭದಲ್ಲಿ ಮಾಜಿ ಕ್ರಿಕೆಟರ್ ಜೂಲನ್ ಗೋಸ್ವಾಮಿ ಕೂಡ ಭಾಗವಹಿಸಿದ್ದರು. ವಿಶ್ವಕಪ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದು ರಿಚಾ ವೇಗವಾಗಿ ಗಳಿಸಿದ ರನ್‌ಗಳು ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದವು. ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌ನಲ್ಲೂ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ರಿಚಾ 24 ಎಸೆತಗಳಲ್ಲಿ 34 ರನ್ ಗಳಿಸಿ ಮಹತ್ವದ ಕೊಡುಗೆ ನೀಡಿದ್ದರು. ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 50 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 298 ರನ್ ಗಳಿಸಿದರೆ, ದಕ್ಷಿಣ ಆಫ್ರಿಕಾ 246 ರನ್‌ಗಳಿಗೆ ಆಲೌಟ್ ಆಯಿತು.
1983ರಲ್ಲಿ ಕಪಿಲ್ ಡೆವಿಲ್ಸ್ ಪಡೆ ವಿಶ್ವಕಪ್ ಗೆದ್ದಿದ್ದು, ಭಾರತದಲ್ಲಿ ಪುರುಷರ ಕ್ರಿಕೆಟ್‌ನ ದಿಕ್ಕು ಬದಲಿಸಿತ್ತು. ಇದೀಗ ಭಾರತ ಪುರುಷರ ಕ್ರಿಕೆಟ್ ತಂಡವು ಜಗತ್ತಿನ ಬಲಿಷ್ಠ ಕ್ರಿಕೆಟ್ ತಂಡವಾಗಿ ಗುರುತಿಸಿಕೊಂಡಿದೆ. ಇದೀಗ ಮಹಿಳಾ ಟೀಂ ಇಂಡಿಯಾ ತನ್ನ ಐಸಿಸಿ ಟ್ರೋಫಿ ಬರ ನೀಗಿಸಿದ್ದು, 13ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎರಡು ಸಲ ಫೈನಲ್ ಪ್ರವೇಶಿಸಿ ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸಿದ್ದ ಭಾರತ ತಂಡವು, ತನ್ನ ಮೂರನೇ ಪ್ರಯತ್ನದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಲೀಗ್ ಹಂತದಲ್ಲಿ ಹ್ಯಾಟ್ರಿಕ್ ಸೋಲು ಅನುಭವಿಸಿ ಸೆಮೀಸ್‌ನಿಂದಲೇ ಹೊರಬೀಳುವ ಭೀತಿಗೆ ಸಿಲುಕಿದ್ದ ಭಾರತ, ಆ ಬಳಿಕ ಸತತ ಗೆಲುವು ದಾಖಲಿಸಿ ಸೆಮೀಸ್ ಪ್ರವೇಶಿಸಿತ್ತು. ಇನ್ನು ಸೆಮೀಸ್‌ನಲ್ಲಿ ಏಳು ಬಾರಿಯ ವಿಶ್ವ ಚಾಂಪಿಯನ್ ಹಾಗೂ ಟೂರ್ನಿಯ ಅಜೇಯ ತಂಡವಾಗಿದ್ದ ಆಸ್ಟ್ರೇಲಿಯಾಗೆ ಸೋಲುಣಿಸಿ ಫೈನಲ್ ಪ್ರವೇಶಿಸಿತ್ತು. ಇನ್ನು ಫೈನಲ್‌ನಲ್ಲೂ ಸಂಘಟಿತ ಪ್ರದರ್ಶನ ತೋರಿದ ಭಾರತ ಮಹಿಳಾ ತಂಡವು ದಕ್ಷಿಣ ಆಫ್ರಿಕಾವನ್ನು 52 ರನ್ ಅಂತರದಲ್ಲಿ ಸೋಲಿಸಿ ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.