
ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ಆಕರ್ಷಕ ಶತಕ ಹಾಗೂ ವಿರಾಟ್ ಕೊಹ್ಲಿ ಮಿಂಚಿನ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ ಇನ್ನೂ 69 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಏಕದಿನ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ಬಹುತೇಕ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ಈ ಇಬ್ಬರು ಸ್ಮರಣೀಯ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾಗಿದ್ದಾರೆ.
ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಗೆಲ್ಲಲು ಕೇವಲ 237 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ರೋಹಿತ್ ಶರ್ಮಾ 69 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಅಡಿಪಾಯ ಹಾಕಿಕೊಟ್ಟರು. ಇದಾದ ಬಳಿಕ ನಡೆದದ್ದು ರೋ-ಕೋ ಶೋ.
ಗಿಲ್ ವಿಕೆಟ್ ಪತನದ ಬಳಿಕ ಜತೆಯಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಆಕರ್ಷಕ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಕಳೆದೆರಡು ಪಂದ್ಯಗಳಲ್ಲಿ ಖಾತೆ ತೆರೆಯಲು ವಿಫಲವಾಗಿದ್ದ ವಿರಾಟ್ ಕೊಹ್ಲಿ ಮೇಲೆ ಸಾಕಷ್ಟು ಒತ್ತಡವಿತ್ತು. ಆದರೆ, ಸಿಡ್ನಿಯಲ್ಲಿ ಸಹಜ ಆಟ ಪ್ರದರ್ಶಿಸುವ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದರು.
ಎರಡನೇ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ರೋಹಿತ್ ಶರ್ಮಾ, ಇದೀಗ ಸಿಡ್ನಿಯಲ್ಲಿ ಅಜೇಯ ಶತಕ ಸಿಡಿಸುವಲ್ಲಿ ಯಶಸ್ವಿಯಾದರು. 125 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 13 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 121 ರನ್ ಸಿಡಿಸಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಬಾರಿಸಿದ 33ನೇ ಶತಕ ಒಟ್ಟಾರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 50ನೇ ಶತಕ ಎನಿಸಿಕೊಂಡಿತು. ರೋಹಿತ್ ಟೆಸ್ಟ್‌ನಲ್ಲಿ 12 ಹಾಗೂ ಟಿ20 ಕ್ರಿಕೆಟ್‌ನಲ್ಲಿ 5 ಶತಕ ಸಿಡಿಸಿದ್ದಾರೆ.
ಇನ್ನು ಮೊದಲ ಎರಡು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ವಿರಾಟ್ ಕೊಹ್ಲಿ, ಮೂರನೇ ಏಕದಿನ ಪಂದ್ಯದಲ್ಲಿ ಅಜೇಯ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾದರು. ವಿರಾಟ್ ಕೊಹ್ಲಿ 81 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ ಅಜೇಯ 74 ರನ್ ಸಿಡಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.