
ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಇದೇ ಆಗಸ್ಟ್ 15ರಿಂದ ಆರಂಭವಾಗಲಿದೆ. ಹೀಗಿರುವಾಗಲೇ ಭಾರತ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡಲಾರಂಭಿಸಿದೆ. ಈಗಾಗಲೇ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಲಂಕಾ ಎದುರಿನ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ ಪ್ರತಿಭಾನ್ವಿತ ಎಡಗೈ ಬ್ಯಾಟರ್ ಸಾಯಿ ಸುದರ್ಶನ್ ಕೂಡಾ ಹೆಬ್ಬರಳಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ, ಲಂಕಾ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ.
ಇದೀಗ ಲಂಕಾ ಎದುರಿನ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ತಂಡದಿಂದ ಹೊರಬಿದ್ದಿರುವುದು ಟೀಂ ಇಂಡಿಯಾ ಪಾಲಿಗೆ ದೊಡ್ಡ ಹಿನ್ನಡೆಯಾಗಿದ್ದರೂ ಸಹ, ಕನ್ನಡಿಗನ ಪಾಲಿಗೆ ಇದು ಸುವರ್ಣಾವಕಾಶವಾಗಿ ಬದಲಾಗುವ ಸಾಧ್ಯತೆಯಿದೆ. ಯಾಕೆಂದರೆ, ಇದೀಗ ನಡೆಯುತ್ತಿರುವ ಲಂಕಾ ಇಲೆವನ್ ಎದುರಿನ ಅಭ್ಯಾಸ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿಳಿದ ದೇವದತ್ ಪಡಿಕ್ಕಲ್ ಆಕರ್ಷಕ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹೀಗಾಗಿ ಕನ್ನಡಿಗ ದೇವದತ್ ಪಡಿಕ್ಕಲ್‌ಗೆ ಲಂಕಾ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ನಿರೀಕ್ಷೆಯಿದೆ.
ಶ್ರೀಲಂಕಾ ಎದುರಿನ ಟೆಸ್ಟ್ ಸರಣಿಯು 2025-27ನೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವ ನಿಟ್ಟಿನಲ್ಲಿ ಭಾರತದ ಪಾಲಿಗೆ ಮಹತ್ವದ ಟೆಸ್ಟ್ ಸರಣಿ ಎನಿಸಿಕೊಂಡಿದೆ. ಸದ್ಯ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ ಐದನೇ ಸ್ಥಾನದಲ್ಲಿದ್ದರೇ, ಶ್ರೀಲಂಕಾ ಆರನೇ ಸ್ಥಾನದಲ್ಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವ ಕನಸನ್ನು ಜೀವಂತವಾಗಿಟ್ಟುಕೊಳ್ಳಬೇಕಿದ್ದರೇ, ಈ ಸರಣಿಯನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿವೆ ಉಭಯ ತಂಡಗಳು. ಹೀಗಾಗಿ ಈ ಟೆಸ್ಟ್ ಸರಣಿಯು ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ.
ಭಾರತ ತಂಡವು ಈ ಬಾರಿ ಜಸ್ಪ್ರೀತ್ ಬುಮ್ರಾ ಮಾತ್ರವಲ್ಲದೇ ಸಾಯಿ ಸುದರ್ಶನ್, ಬೌಲಿಂಗ್ ಆಲ್ರೌಂಡರ್‌ಗಳಾದ ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್ ಅವರಂತಹ ಆಟಗಾರರ ಅನುಪಸ್ಥಿತಿಯಲ್ಲಿ ಟೆಸ್ಟ್ ಸರಣಿಯನ್ನಾಡಲು ಸಜ್ಜಾಗುತ್ತಿದೆ. ಹೀಗಾಗಿ ಸಾಕಷ್ಟು ಯುವ ಅನನುಭವಿಗಳನ್ನು ಒಳಗೊಂಡ ತಂಡಕ್ಕೆ ದ್ವೀಪ ರಾಷ್ಟ್ರದಲ್ಲಿ ಅಗ್ನಿ ಪರೀಕ್ಷೆ ಎದುರಾಗುವ ಸಾಧ್ಯತೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.