ಇಲ್ಲಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾಗೆ ಆರಂಭಿಕರಾದ ಶುಭ್‌ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಸ್ಪೋಟಕ ಆರಂಭ ಒದಗಿಸಿಕೊಟ್ಟರು.
ಬೆಂಗಳೂರು(ನ.11): ಟೀಂ ಇಂಡಿಯಾ ಅಗ್ರಕ್ರಮಾಂಕದ ಬ್ಯಾಟರ್‌ಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರನ್ ಮಳೆ ಹರಿಸಿದ್ದಾರೆ. ಶ್ರೇಯಸ್ ಅಯ್ಯರ್ ಹಾಗೂ ಕೆ ಎಲ್ ರಾಹುಲ್ ಬಾರಿಸಿದ ಸ್ಪೋಟಕ ಶತಕ ಹಾಗೂ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಬಾರಿಸಿದ ಭರ್ಜರಿ ಅರ್ಧಶತಕಗಳ ನೆರವಿನಿಂದ ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡು 410 ರನ್ ಬಾರಿಸಿದ್ದು, ಗೆಲ್ಲಲು ನೆದರ್‌ಲೆಂಡ್ಸ್ ತಂಡಕ್ಕೆ ಕಠಿಣ ಗುರಿ ನೀಡಿದೆ
ಇಲ್ಲಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಬೃಹತ್ ಮೊತ್ತ ಕಲೆಹಾಕುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದ ಟೀಂ ಇಂಡಿಯಾಗೆ ಆರಂಭಿಕರಾದ ಶುಭ್‌ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಆರಂಭದಿಂದಲೇ ನೆದರ್‌ಲೆಂಡ್ಸ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಈ ಜೋಡಿ 11.5 ಓವರ್‌ಗಳಲ್ಲಿ 100 ರನ್‌ಗಳ ಜತೆಯಾಟವಾಡಿದರು. ಸಾಕಷ್ಟು ಆಕ್ರಮಣಕಾರಿ ಆಟವಾಡಿದ ಶುಭ್‌ಮನ್ ಗಿಲ್ ಕೇವಲ 32 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 51 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ 54 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 61 ರನ್ ಬಾರಿಸಿ ಬಾಸ್ ಡೇ ಲೀಡೆಗೆ ವಿಕೆಟ್ ಒಪ್ಪಿಸಿದರು.
ಸಚಿನ್-ಶಕೀಬ್ ದಾಖಲೆ ಸರಿಗಟ್ಟಿದ ಕೊಹ್ಲಿ: ಕೇವಲ 29 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡ ಭಾರತ ತಂಡಕ್ಕೆ ಮೂರನೇ ವಿಕೆಟ್‌ಗೆ ಜವಾಬ್ದಾರಿಯುತ ಆಟವಾಡಿದರು. ಎಂದಿನಿಂದ ಕೊಂಚ ಚುರುಕಾಗಿ ರನ್ ಗಳಿಸಿದ ವಿರಾಟ್ ಕೊಹ್ಲಿ 53 ಎಸೆತಗಳನ್ನು ಎದುರಿಸಿ ವೃತ್ತಿಜೀವನದ 71ನೇ ಏಕದಿನ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಇದಷ್ಟೇ ಅಲ್ಲದೇ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ 7ನೇ ಬಾರಿಗೆ 50+ ರನ್ ಬಾರಿಸಿದ ಸಾಧನೆ ಮಾಡಿದರು. ಇದರ ಜತೆಗೆ ಏಕದಿನ ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿಹೆಚ್ಚು ಬಾರಿ 50+ ರನ್ ಬಾರಿಸಿದ ಸಚಿನ್ ತೆಂಡುಲ್ಕರ್ ಹಾಗೂ ಶಕೀಬ್ ಅಲ್ ಹಸನ್ ದಾಖಲೆ ಸರಿಗಟ್ಟಿದರು. ಸಚಿನ್ 2003ರ ವಿಶ್ವಕಪ್‌ನಲ್ಲಿ ಹಾಗೂ ಶಕೀಬ್ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 7 ಬಾರಿ 50+ ರನ್ ಬಾರಿಸಿದ ಸಾಧನೆ ಮಾಡಿದ್ದರು. ಅಂತಿಮವಾಗಿ ವಿರಾಟ್ ಕೊಹ್ಲಿ 51 ರನ್ ಬಾರಿಸಿ ವ್ಯಾನ್ ಡರ್ ಮರ್ವೆಗೆ ವಿಕೆಟ್ ಒಪ್ಪಿಸಿದರು.
ಏಕದಿನ ವಿಶ್ವಕಪ್‌ನಲ್ಲಿ ಚೊಚ್ಚಲ ಶತಕ ಚಚ್ಚಿದ ಶ್ರೇಯಸ್: ಒಂದು ಕಡೆ ವಿರಾಟ್ ಕೊಹ್ಲಿ ಚುರುಕಾಗಿ ರನ್ ಗಳಿಸುತ್ತಿದ್ದಾಗ ಮತ್ತೊಂದು ತುದಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಶ್ರೇಯಸ್ ಅಯ್ಯರ್, ಕೊಹ್ಲಿ ವಿಕೆಟ್ ಪತನದ ಬಳಿಕ ಆಕ್ರಮಣಕಾರಿ ಆಟವಾಡಲಾರಂಭಿಸಿದರು. ಶ್ರೇಯಸ್ ಅಯ್ಯರ್ ಕೇವಲ 48 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದರು. ಇದಾದ ಬಳಿಕವೂ ಬ್ಯಾಟಿಂಗ್ ಅಬ್ಬರ ಮುಂದುವರೆಸಿದ ಶ್ರೇಯಸ್ ಕೇವಲ 84 ಎಸೆತಗಳನ್ನು ಎದುರಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಹಾಗೂ ಒಟ್ಟಾರೆ 4ನೇ ಏಕದಿನ ವಿಶ್ವಕಪ್ ಸಿಡಿಸಿ ಮಿಂಚಿದರು. 2011ರ ಏಕದಿನ ವಿಶ್ವಕಪ್ ಬಳಿಕ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 4ನೇ ಕ್ರಮಾಂಕದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾದರು. 2011ರ ಏಕದಿನ ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ವೆಸ್ಟ್ ಇಂಡೀಸ್ ಎದುರು 113 ರನ್ ಚಚ್ಚಿದ್ದರು. ಅಂತಿಮವಾಗಿ ಶ್ರೇಯಸ್ ಅಯ್ಯರ್ 94 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 128 ರನ್ ಬಾರಿಸಿ ಅಜೇಯರಾಗುಳಿದರು.
ತವರಿನಲ್ಲಿ ರಾಹುಲ್ ಸಿಡಿಲಬ್ಬರದ ಶತಕ: ಇನ್ನು ಕೊಹ್ಲಿ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಲೋಕಲ್ ಬಾಯ್ ಕೆ ಎಲ್ ರಾಹುಲ್, ನೆದರ್‌ಲೆಂಡ್ಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ದ್ವಿಶತಕದ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ನಾನೂರರ ಗಡಿ ದಾಟಿಸಿದರು. ರಾಹುಲ್ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿವೇಗದ ಶತಕ ಸಿಡಿಸಿ ಮಿಂಚಿದರು. ಈ ಮೊದಲು ರೋಹಿತ್ ಶರ್ಮಾ ಆಫ್ಘಾನಿಸ್ತಾನ ಎದುರು ಇದೇ ವಿಶ್ವಕಪ್‌ನಲ್ಲಿ 63 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಆ ದಾಖಲೆಯನ್ನು ಕೆ ಎಲ್ ರಾಹುಲ್ ಬ್ರೇಕ್ ಮಾಡಿದರು. ಅಂತಿಮವಾಗಿ ರಾಹುಲ್ 64 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 102 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.