
ಬೆಂಗಳೂರು: ದಕ್ಷಿಣ ಆಫ್ರಿಕಾ ಎದುರಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಕತ್ತು ನೋವಿನ ಸಮಸ್ಯೆಯಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಇದಾದ ಬಳಿಕ ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಯಿಂದಲೂ ಹೊರಬಿದ್ದಿದ್ದರು. ಗಿಲ್ ಅನುಪಸ್ಥಿತಿಯಲ್ಲಿ ಕೆ ಎಲ್ ರಾಹುಲ್, ಏಕದಿನ ಸರಣಿಯಲ್ಲಿ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದೀಗ ಶುಭ್‌ಮನ್ ಗಿಲ್ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದು, ಸದ್ಯದಲ್ಲಿಯೇ ಟೀಂ ಇಂಡಿಯಾ ಜೆರ್ಸಿ ತೊಟ್ಟು ಮೈದಾನಕ್ಕಿಳಿಯಲು ರೆಡಿಯಾಗಿದ್ದಾರೆ. ಇದೀಗ ಶುಭ್‌ಮನ್ ಗಿಲ್ ಇದೇ ಡಿಸೆಂಬರ್ 09ರಂದು ಮೈದಾನಕ್ಕಿಳಿಯೋದು ಬಹುತೇಕ ಖಚಿತ ಎನಿಸಿಕೊಂಡಿದೆ.
ಶುಭ್‌ಮನ್ ಗಿಲ್ ಕುತ್ತಿಗೆಯಲ್ಲಿ ಸಾಕಷ್ಟು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರಿಗೆ ಹೆಚ್ಚು ಹೊತ್ತು ಬ್ಯಾಟಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಡಾಕ್ಟರ್ ಕೂಡಾ ಶುಭ್‌ಮನ್ ಗಿಲ್‌ಗೆ ವಿಮಾನದಲ್ಲಿ ಪ್ರಯಾಣ ಮಾಡದಂತೆ ಸಲಹೆ ನೀಡಿದ್ದರು. ಮುಂಬೈನಲ್ಲಿ ಅವರು ತಮ್ಮ ನೋವಿನ ಚಿಕಿತ್ಸೆಗೆ ಒಳಗಾಗಿದ್ದರು. ಕೆಲ ದಿನಗಳ ಹಿಂದೆ ಗಿಲ್ ಬೆಂಗಳೂರಿನಲ್ಲಿರುವ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಗೂ ಮುನ್ನ ಗಿಲ್ ಫಿಟ್ ಆಗಬಹುದು ಎನ್ನುವ ನಿರೀಕ್ಷೆಯಲ್ಲಿಯೇ ಆಯ್ಕೆ ಸಮಿತಿಯು 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದಲ್ಲಿ ಗಿಲ್‌ಗೆ ಉಪನಾಯಕನಾಗಿ ಸ್ಥಾನ ನೀಡಲಾಗಿತ್ತು. ಇದೀಗ ಶುಭ್‌ಮನ್ ಗಿಲ್ ಸಂಪೂರ್ಣ ಫಿಟ್ ಆಗಿದ್ದಾರೆ ಎನ್ನುವುದು ಭಾರತೀಯ ಅಭಿಮಾನಿಗಳ ಪಾಲಿಗೆ ಸಿಹಿ ಸುದ್ದಿ ಎನಿಸಿಕೊಂಡಿದೆ.
ಶುಭ್‌ಮನ್ ಗಿಲ್ ಇದೀಗ ಟಿ20 ಪಂದ್ಯವನ್ನಾಡಲು ಫಿಟ್ ಇದ್ದಾರೆ ಎಂದು ಬಿಸಿಸಿಐ ವೈದ್ಯರು ಖಚಿತಪಡಿಸಿದ್ದಾರೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯು ಡಿಸೆಂಬರ್ 09ರಿಂದ ಆರಂಭವಾಗಲಿದೆ. ಕಟಕ್‌ನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಸರಣಿಯಲ್ಲಿ ಅಭಿಷೇಕ್ ಶರ್ಮಾ ಜತೆ ಆರಂಭಿಕನಾಗಿ ಗಿಲ್ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ.
ಸೂರ್ಯಕುಮಾರ್ ಯಾದವ್(ನಾಯಕ), ಶುಭ್‌ಮನ್ ಗಿಲ್(ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.