
ಪುಣೆ(ಮಾ.30): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯಲ್ಲಿ ಕೇನ್ ವಿಲಿಯಮ್ಸನ್ (Kane Williamson) ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ (SunRisers Hyderabad) ತಂಡವು ರಾಜಸ್ಥಾನ ರಾಯಲ್ಸ್ (Rajasthan Royals) ಎದುರು ಆಘಾತಕಾರಿ ಸೋಲು ಕಂಡಿದೆ. ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು 61 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಸೋಲಿನ ಆಘಾತದಿಂದ ಹೊರಬರುವ ಮುನ್ನವೇ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್‌ಗೆ ಐಪಿಎಲ್ ಮ್ಯಾಚ್ ರೆಫ್ರಿ ಮತ್ತೊಂದು ಶಾಕ್ ನೀಡಿದ್ದಾರೆ.
ಹೌದು, ರಾಜಸ್ಥಾನ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ನಿಧಾನಗತಿಯ ಬೌಲಿಂಗ್ ಮಾಡಿದ ತಪ್ಪಿಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರಿಗೆ 12 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ. ಮಾರ್ಚ್ 29ರಂದು ಪುಣೆಯಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ದ ನಡೆದ ಪಂದ್ಯದಲ್ಲಿ ಮಂದಗತಿಯ ಬೌಲಿಂಗ್ ಮಾಡಿದ ತಪ್ಪಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮೊದಲ ಬಾರಿಗೆ ನಿಧಾನಗತಿಯ ಬೌಲಿಂಗ್ (Slow Over Rate) ಮಾಡುವ ಮೂಲಕ ಐಪಿಎಲ್ ನೀತಿ ಸಂಹಿತಿ ಉಲ್ಲಂಘಿಸಿದ್ದಕ್ಕಾಗಿ, ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರಿಗೆ 12 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್ (IPL) ಪ್ರಕಟಣೆಯಲ್ಲಿ ತಿಳಿಸಿದೆ.
ರಾಯಲ್ಸ್ ಆಟಕ್ಕೆ ಬೆಚ್ಚಿದ ಸನ್‌ರೈಸರ್ಸ್ ಹೈದರಾಬಾದ್:
ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಪರಾಕ್ರಮ ಮೆರೆದ ರಾಜಸ್ಥಾನ ರಾಯಲ್ಸ್ ಭರ್ಜರಿ ಗೆಲುವಿನ ಮೂಲಕ 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಅಭಿಯಾನ ಆರಂಭಿಸಿದೆ. ಮಂಗಳವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ತಂಡ 61 ರನ್ ಗೆಲುವು ದಾಖಲಿಸಿತು. ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 6 ವಿಕೆಟ್‌ಗೆ ಬರೋಬ್ಬರಿ 210 ರನ್ ಕಲೆ ಹಾಕಿತು. ಬೃಹತ್ ಮೊತ್ತದ ಎದುರು ಕಂಗಾಲಾದ ಸನ್‌ರೈಸರ್ಸ್ 7 ವಿಕೆಟ್‌ಗೆ 149 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ತಂಡಕ್ಕೆ ಏಡನ್ ಮಾರ್ಕ್ರಮ್(ಔಟಾಗದೆ 57), ವಾಷಿಂಗ್ಟನ್ ಸುಂದರ್(14 ಎಸೆತದಲ್ಲಿ 40) ಅಬ್ಬರದ ಬ್ಯಾಟಿಂಗ್ ಮೂಲಕ ನೆರವಾದರೂ ಗೆಲ್ಲಲು ಸಾಧ್ಯವಾಗಲಿಲ್ಲ.
IPL 2022 ರಾಜಸ್ಥಾನ ಬಿರುಗಾಳಿಗೆ ತತ್ತರಿಸಿದ ಸನ್‌ರೈಸರ್ಸ್, ಸಂಜು ಪಡೆಗೆ 61 ರನ್ ಗೆಲುವು!
ಇದಕ್ಕೂ ಮೊದಲು ರಾಯಲ್ಸ್ ಪರ 100ನೇ ಪಂದ್ಯವಾಡಿದ ನಾಯಕ ಸಂಜು ಸ್ಯಾಮ್ಸನ್ (Sanju Samson), ಕೇವಲ 27 ಎಸೆತಗಳಲ್ಲಿ 55 ರನ್ ಸಿಡಿಸಿದರು. ಇದರಲ್ಲಿ 3 ಬೌಂಡರಿ, 5 ಆಕರ್ಷಕ ಸಿಕ್ಸರ್ ಕೂಡಾ ಒಳಗೊಂಡಿತ್ತು. ಇತರೆ ಬ್ಯಾಟರ್‌ಗಳೂ ಅಬ್ಬರಿಸಿದ್ದರಿಂದ ತಂಡ 200 ರನ್ ಗಡಿ ದಾಟಿತು. ಜೋಸ್ ಬಟ್ಲರ್ (Jos Buttler) (35), ಯಶಸ್ವಿ ಜೈಸ್ವಾಲ್(20) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಕಳೆದ ಬಾರಿ ಆರ್‌ಸಿಬಿಯಲ್ಲಿ (RCB) ಮಿಂಚಿದ್ದ ಕನ್ನಡಿಗ ದೇವದತ್ತ ಪಡಿಕ್ಕಲ್ (Devdutt Padikkal) ಈ ಬಾರಿಯೂ ಉತ್ತಮ ಲಯ ಮುಂದುವರಿಸುವ ಸೂಚನೆ ನೀಡಿದ್ದಾರೆ. ಪಂದ್ಯದಲ್ಲಿ ಅವರು 29 ಎಸೆತಗಳಲ್ಲಿ 41 ರನ್ ಸಿಡಿಸಿದರು. ಶಿಮ್ರೋನ್ ಹೆಟ್ಮೇಯರ್ ಕೇವಲ 13 ಎಸೆತಗಳನ್ನು ಎದುರಿಸಿ 2 ಬೌಂಡರಿ, 2 ಸಿಕ್ಸರ್ ಒಳಗೊಂಡಂತೆ 32 ರನ್ ಬಾರಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.