
ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 185 ರನ್‌ಗಳಿಗೆ ಸರ್ವಪತನ ಕಂಡಿದೆ. ಇನ್ನು ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡ ಕೂಡಾ ಆರಂಭಿಕ ಆಘಾತ ಅನುಭವಿಸಿದ್ದು, ಮೊದಲ ದಿನದಾಟದಂತ್ಯಕ್ಕೆ ಒಂದು ವಿಕೆಟ್ ಕಳೆದುಕೊಂಡು 9 ರನ್ ಗಳಿಸಿದೆ.
ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. 17 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಕೆ ಎಲ್ ರಾಹುಲ್ ಪೆವಿಲಿಯನ್ ಸೇರಿದರು. ಇನ್ನು ರೋಹಿತ್ ಶರ್ಮಾ ಬದಲಿಗೆ ಆಡುವ ಹನ್ನೊಂದರ ಬಳಗ ಕೂಡಿಕೊಂಡ ಶುಭ್‌ಮನ್ ಗಿಲ್ 20 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ವಿರಾಟ್ ಕೊಹ್ಲಿ ಬ್ಯಾಟಿಂಗ್ 17 ರನ್‌ಗಳಿಗೆ ಸೀಮಿತವಾಯಿತು.
ರಾಹುಲ್-ಯಶಸ್ವಿ ಫೇಲ್; ಸಿಡ್ನಿ ಟೆಸ್ಟ್‌ನಲ್ಲೂ ಭಾರತಕ್ಕೆ ಆರಂಭಿಕ ಆಘಾತ!
ಇನ್ನು ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ 48 ರನ್‌ಗಳ ಅಮೂಲ್ಯ ಜತೆಯಾಟ ನಿಭಾಯಿಸಿದರು. ರಿಷಭ್ ಪಂತ್ 40 ರನ್ ಬಾರಿಸಿದರೆ, ಜಡೇಜಾ ಅಮೂಲ್ಯ 26 ರನ್ ಸಿಡಿಸಿದರು. ಇನ್ನು ಕೊನೆಯಲ್ಲಿ ಬುಮ್ರಾ ಆಕರ್ಷಕ 22 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 180ರ ಗಡಿ ದಾಟಿಸಿದರು.
ಆಸ್ಟ್ರೇಲಿಯಾ ತಂಡದ ಪರ ಸ್ಕಾಟ್ ಬೊಲೆಂಡ್ 31 ರನ್ ನೀಡಿ 4 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ 3, ಪ್ಯಾಟ್ ಕಮಿನ್ಸ್ 2 ಹಾಗೂ ನೇಥನ್ ಲಯನ್ ಒಂದು ವಿಕೆಟ್ ಬುಟ್ಟಿಗೆ ಹಾಕಿಕೊಂಡರು.
ಭಾರತ ತಂಡದಲ್ಲಿ ಯಾವುದೇ ಬಿರುಕಿಲ್ಲ, ಚೆನ್ನಾಗಿದ್ದೇವೆ: ಗೌತಮ್ ಗಂಭೀರ್
ಆಸೀಸ್‌ಗೆ ಆರಂಭಿಕ ಆಘಾತ:
ಇನ್ನು ದಿನದಾಟದ ಕೊನೆಯಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ ಕೂಡಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಸ್ಯಾಮ್ ಕೊನ್‌ಸ್ಟಾಸ್ ಹಾಗೂ ಬುಮ್ರಾ ನಡುವಿನ ಮಾತಿನ ಚಕಮಕಿಗೆ ಉಸ್ಮಾನ್ ಖವಾಜ ಬೆಲೆ ತೆತ್ತಿದ್ದಾರೆ. ಖವಾಜ 2 ರನ್ ಗಳಿಸಿ ಬುಮ್ರಾ ಬೌಲಿಂಗ್‌ನಲ್ಲಿ ರಾಹುಲ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದ್ದಾರೆ. ಕೊನ್‌ಸ್ಟಾಸ್ 7 ರನ್ ಗಳಿಸಿ ಎರಡನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾ ಇನ್ನೂ 176 ರನ್‌ಗಳ ಹಿನ್ನೆಡೆಯಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.