ಬಾಂಗ್ಲಾ ಮಣಿಸಿ ಸೆಮೀಸ್ ಪ್ರವೇಶಿಸಿದ ಪಾಕಿಸ್ತಾನ ಕ್ರಿಕೆಟ್ ತಂಡ
ಸತತ ಎರಡನೇ ಬಾರಿಗೆ ಸೆಮೀಸ್ ಪ್ರವೇಶಿಸಿದ ಪಾಕಿಸ್ತಾನ
ಬಾಂಗ್ಲಾದೇಶ ಎದುರು 5 ವಿಕೆಟ್ ಭರ್ಜರಿ ಜಯ
ಅಡಿಲೇಡ್(ನ.06): ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಪಾಕಿಸ್ತಾನ ತಂಡವು ಬಾಂಗ್ಲಾದೇಶ ಎದುರು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ 4ನೇ ತಂಡವಾಗಿ ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಟೂರ್ನಿಯ ಆರಂಭದಲ್ಲಿ ಭಾರತ ಹಾಗೂ ಜಿಂಬಾಬ್ವೆ ಎದುರು ಮುಗ್ಗರಿಸುವ ಮೂಲಕ ಮುಖಭಂಗ ಅನುಭವಿಸಿದ್ದ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡವು ಸತತ ಎರಡನೇ ಬಾರಿಗೆ ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಬಾಂಗ್ಲಾದೇಶ ನೀಡಿದ್ದ 128 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು ಕೇವಲ 5 ವಿಕೆಟ್ ಕಳೆದುಕೊಂಡು 11 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.
ಇಲ್ಲಿನ ಅಡಿಲೇಡ್ ಓವಲ್ ಮೈದಾನದಲ್ಲಿ ಬಾಂಗ್ಲಾದೇಶ ನೀಡಿದ ಸಾಧಾರಣ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು ಎಚ್ಚರಿಕೆಯ ಆರಂಭವನ್ನು ಪಡೆಯಿತು. ನಾಯಕ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಮೊದಲ 10.3 ಓವರ್‌ಗಳಲ್ಲಿ 57 ರನ್‌ಗಳ ಜತೆಯಾಟವಾಡುವ ಮೂಲಕ ದಿಟ್ಟ ಆರಂಭ ಒದಗಿಸಿಕೊಟ್ಟರು. ರಕ್ಷಣಾತ್ಮಕ ಆಟವಾಡಿದ ಬಾಬರ್ ಅಜಂ 33 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 25 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮತ್ತೋರ್ವ ಬ್ಯಾಟರ್ ಮೊಹಮ್ಮದ್ ರಿಜ್ವಾನ್ 32 ಎಸೆತಗಳಲ್ಲಿ 32 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೊಹಮ್ಮದ್ ನವಾಜ್ ಕೇವಲ 4 ರನ್ ಬಾರಿಸಿ ರನೌಟ್ ಆದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಮೊಹಮ್ಮದ್ ಹ್ಯಾರಿಸ್(31) ಹಾಗೂ ಶಾನ್ ಮಸೂದ್(24*) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ಪಾಕಿಸ್ತಾನ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು.