
ನವದೆಹಲಿ(ಸೆ.30): ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡಕ್ಕೆ ಭಾರೀ ಆಘಾತ ಎದುರಾಗಿದೆ. ಮುಂಚೂಣಿ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಬೆನ್ನು ಮೂಳೆ ಮುರಿತದಿಂದಾಗಿ ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ. ಇದರೊಂದಿಗೆ ಭಾರತದ ಬೌಲಿಂಗ್ ಪಡೆ ದುರ್ಬಲಗೊಳ್ಳಲಿದೆ. ರವೀಂದ್ರ ಜಡೇಜಾ ಬಳಿಕ ವಿಶ್ವಕಪ್‌ಗೆ ಗೈರಾಗಲಿರುವ ಭಾರತದ 2ನೇ ತಾರಾ ಆಟಗಾರ ಎನಿಸಿಕೊಳ್ಳಲಿದ್ದಾರೆ. ಜಸ್ಪ್ರೀತ್ ಬುಮ್ರಾ, ಮುಂದಿನ 6 ತಿಂಗಳು ಕ್ರಿಕೆಟ್‌ನಿಂದ ದೂರ ಉಳಿಯುವ ಸಾಧ್ಯತೆಯಿದ್ದು, ಮುಂಬೈ ಇಂಡಿಯನ್ಸ್ ಅಭಿಮಾನಿಗಳ ಪಾಲಿಗೂ ಆತಂಕ ಉಂಟಾಗಿದೆ. ಇದು ಹಲವು ಟ್ರೋಲ್‌ಗಳಿಗೂ ಸಾಕ್ಷಿಯಾಗಿದೆ.
ಬಿಸಿಸಿಐ ಅಧಿಕಾರಿಯೊಬ್ಬರ ಪ್ರಕಾರ ವೇಗಿ ಜಸ್ಪ್ರೀತ್ ಬುಮ್ರಾ ಕನಿಷ್ಠ 6 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ‘ಬುಮ್ರಾ ವಿಶ್ವಕಪ್ ಆಡುವುದಿಲ್ಲ. ಅವರು ಬೆನ್ನು ನೋವಿನಿಂದ ತೀವ್ರವಾಗಿ ಬಳಲುತ್ತಿದ್ದಾರೆ. ಅತಿಯಾದ ಕೆಲಸದ ಒತ್ತಡದಿಂದ ಮೂಳೆ ಮುರಿದಿರಬಹುದು. 6 ತಿಂಗಳ ಕಾಲ ಅವರು ಆಯ್ಕೆಗೆ ಲಭ್ಯರಿರುವುದಿಲ್ಲ’ ಎಂದು ಹೇಳಿದ್ದಾರೆ. ಬುಮ್ರಾಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇಲ್ಲ. ಆದರೆ ಹೆಚ್ಚು ಸಮಯ ಅವರು ವಿಶ್ರಾಂತಿ ಪಡೆಯಬೇಕಿದೆ. ಗುಣಮುಖರಾಗಲು ವಿಶ್ರಾಂತಿಯೇ ಉತ್ತಮ ಮದ್ದು ಎಂದು ವೈದ್ಯರೊಬ್ಬರು ತಿಳಿಸಿರುವುದಾಗಿ ಬಿಸಿಸಿಐ ಅಧಿಕಾರಿ ಹೇಳಿದ್ದಾರೆ.
T20 World Cup: ಜಸ್‌ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಿಂದ ಔಟ್
ಬುಮ್ರಾ ಇತ್ತೀಚೆಗೆ ಆಸ್ಪ್ರೇಲಿಯಾ ವಿರುದ್ಧ 2ನೇ ಹಾಗೂ 3ನೇ ಟಿ20 ಪಂದ್ಯಗಳನ್ನು ಆಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯವನ್ನಾಡಲು ತಿರುವನಂತಪುರಂಗೆ ತೆರಳಿದ್ದರಾದರೂ ಪಂದ್ಯದಲ್ಲಿ ಆಡಲಿಲ್ಲ. ಬುಮ್ರಾ ಪಂದ್ಯ ಆರಂಭಕ್ಕೂ ಮೊದಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬುಮ್ರಾ ಈ ವರ್ಷ ಭಾರತ ಪರ 5 ಟೆಸ್ಟ್, 5 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಷ್ಟೇ ಆಡಿದ್ದಾರೆ. ಜೊತೆಗೆ ಐಪಿಎಲ್‌ನಲ್ಲಿ ಅವರು ಪಾಲ್ಗೊಂಡಿದ್ದರು.
ಟಿ20 ವಿಶ್ವಕಪ್‌ನಿಂದ ಬುಮ್ರಾ ಔಟ್; ಸೋಷಿಯಲ್ ಮೀಡಿಯಾದಲ್ಲಿ ನೋವು ತೋಡಿಕೊಂಡ ಅಭಿಮಾನಿಗಳು:
ಜಸ್ಪ್ರೀತ್ ಬುಮ್ರಾ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿರುವ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೇ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ನೋವು ಹಂಚಿಕೊಂಡಿದ್ದಾರೆ. ಅದರಲ್ಲೂ ಮುಂಬೈ ಇಂಡಿಯನ್ಸ್ ಅಭಿಮಾನಿಗಳ ಪಾಲಿಗೂ ಈ ಆಘಾತಕಾರಿ ಸುದ್ದಿ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕಳೆದ ಆವೃತ್ತಿಯ ಐಪಿಎಲ್ ಆಟಗಾರರ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡವು 8 ಕೋಟಿ ರುಪಾಯಿ ನೀಡಿ ಖರೀದಿಸಿತ್ತು. ಆದರೆ ಫಿಟ್ನೆಸ್ ಸಮಸ್ಯೆಯಿಂದಾಗಿ ಆರ್ಚರ್ ಐಪಿಎಲ್‌ನಲ್ಲಿ ಪಾಲ್ಗೊಂಡಿರಲಿಲ್ಲ. ಇನ್ನು ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಜೋಫ್ರಾ ಆರ್ಚರ್ ಅಲಭ್ಯರಾಗಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ನೀರಸ ಪ್ರದರ್ಶನ ತೋರುವ ಮೂಲಕ 10ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಮುಂದಿನ ಐಪಿಎಲ್‌ಗೂ ಆರ್ಚರ್ ಹಾಗೂ ಬುಮ್ರಾ ಅಲಭ್ಯರಾದರೆ ಮುಂಬೈ ಇಂಡಿಯನ್ಸ್ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.