ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯಕ್ಕೆ ಸಿಡ್ನಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿ. ಮೆಲ್ಬರ್ನ್ ಸೋಲಿನಿಂದ ಪಾಠ ಕಲಿತ ಟೀಂ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ. ಹಲವು ಬದಲಾವಣೆಗಳೊಂದಿಗೆ ಭಾರತ ತಂಡ ಕಣಕ್ಕಿಳಿಯುವ ಸಾಧ್ಯತೆ ಇದೆ.
ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಹಾಗೂ 5ನೇ ಟೆಸ್ಟ್ ಪಂದ್ಯಕ್ಕೆ ಇದೀಗ ಕ್ಷಣಗಣನೆ ಶುರುವಾಗಿದೆ. ಜನವರಿ 03ರಿಂದ ಭಾರತ ಹಾಗೂ ಆಸೀಸ್ ನಡುವಿನ ಕೊನೆಯ ಟೆಸ್ಟ್ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಿದೆ. ಈಗಾಗಲೇ ಮೆಲ್ಬರ್ನ್ ಟೆಸ್ಟ್ ಪಂದ್ಯವನ್ನು ಸೋತು ನಿರಾಸೆ ಅನುಭವಿಸಿರುವ ಟೀಂ ಇಂಡಿಯಾ, ಕೊನೆಯ ಟೆಸ್ಟ್ ಪಂದ್ಯವನ್ನು ಗೆಲುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಲು ಎದುರು ನೋಡುತ್ತಿದೆ.
ಹೊಸ ವರ್ಷದ ಮೊದಲ ಪಂದ್ಯ ಇದಾಗಿರುವುದರಿಂದ ಉಭಯ ತಂಡಗಳು ಗೆಲುವಿನೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲು ತುದಿಗಾಲಿನಲ್ಲಿ ನಿಂತಿವೆ. 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 4 ಪಂದ್ಯಗಳ ಅಂತ್ಯದ ವೇಳೆಗೆ ಆತಿಥೇಯ ಆಸ್ಟ್ರೇಲಿಯಾ ತಂಡವು 2-1ರ ಮುನ್ನಡೆ ಸಾಧಿಸಿದೆ. ಅದರಲ್ಲೂ ಮೆಲ್ಬರ್ನ್ ಟೆಸ್ಟ್ ಪಂದ್ಯದ ಸೋಲು, ಟೀಂ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸಿಗೆ ಬಲವಾದ ಪೆಟ್ಟು ಬೀಳುವಂತೆ ಮಾಡಿದೆ. ಹೀಗಾಗಿ ಕೊನೆಯ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಪಾಲಿಗೆ ಪ್ರತಿಷ್ಠೆಯ ಕದನ ಎನಿಸಿಕೊಂಡಿದೆ.
ಬಾಕ್ಸಿಂಗ್ ಡೇ ಟೆಸ್ಟ್ ಸೋಲಿನ ಬೆನ್ನಲ್ಲೇ ಭಾರತಕ್ಕೆ ಬಿಗ್ ಶಾಕ್! ಸಿಡ್ನಿ ಟೆಸ್ಟ್‌ನಿಂದ ಈ ಕ್ರಿಕೆಟರ್ ಔಟ್!
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ಆಟಗಾರರ ಪ್ರದರ್ಶನದ ಕುರಿತಂತೆ ಹಲವು ಕ್ರಿಕೆಟ್ ಪಂಡಿತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಹೀಗಾಗಿ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡು ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಹೀಗಾದಲ್ಲಿ ತಂಡದ ನಾಯಕ ರೋಹಿತ್ ಶರ್ಮಾ ಅವರೇ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಬೀಳುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಶುಭ್‌ಮನ್ ಗಿಲ್ ಕಮ್‌ಬ್ಯಾಕ್ ಫಿಕ್ಸ್:
ಮೆಲ್ಬರ್ನ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಪ್ರತಿಭಾನ್ವಿತ ಬ್ಯಾಟರ್ ಶುಭ್‌ಮನ್ ಗಿಲ್, ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಸಂಪೂರ್ಣ ಫಿಟ್ ಆಗಿದ್ದು, ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಕಳೆದ ಪಂದ್ಯದಲ್ಲಿ ಗಿಲ್ ಕೈಬಿಟ್ಟಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಒಂದು ವೇಳೆ ಶುಭ್‌ಮನ್ ಗಿಲ್ ತಂಡ ಕೂಡಿಕೊಂಡರೆ ನಾಯಕ ರೋಹಿತ್ ಶರ್ಮಾ ಆಡುವ ಹನ್ನೊಂದರ ಬಳಗದಿಂದ ಹೊರಬೀಳುವ ಆತಂಕಕ್ಕೆ ಸಿಲುಕಿದ್ದಾರೆ. ಹೀಗಾದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತೊಮ್ಮೆ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸುವ ಸಾಧ್ಯತೆಯಿದೆ.
ಭಾರತ ಕ್ರಿಕೆಟ್ ತಂಡದಲ್ಲಿ 'ಗಂಭೀರ' ಭಿನ್ನಮತ?: ಹದಗೆಟ್ಟ ಡ್ರೆಸ್ಸಿಂಗ್ ರೂಂ ವಾತಾವರಣ
ಆಕಾಶ್‌ದೀಪ್ ಔಟ್
ಟೀಂ ಇಂಡಿಯಾ ಯುವ ವೇಗಿ ಆಕಾಶ್‌ದೀಪ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಆಕಾಶ್‌ದೀಪ್ ಈ ಹಿಂದೆ ಬ್ರಿಸ್ಬೇನ್ ಹಾಗೂ ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದು 5 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದರು. ಇದೀಗ ಆಕಾಶ್‌ದೀಪ್ ಅನುಪಸ್ಥಿತಿಯಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಇಲ್ಲವೇ ಹರ್ಷಿತ್ ರಾಣಾ ಸಿಡ್ನಿ ಟೆಸ್ಟ್‌ಗೆ ಭಾರತ ತಂಡ ಕೂಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಸಿಡ್ನಿ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ:
ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.