
ಕ್ರೈಸ್ಟ್‌ಚರ್ಚ್: ಇಂದು ನಡೆದ ನ್ಯೂಜಿಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಉಪನಾಯಕ ತಿಲಕ್ ವರ್ಮಾ ಅಪರೂಪದ ವಿಶ್ವದಾಖಲೆ ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅದು ಬ್ಯಾಟಿಂಗ್‌ನಲ್ಲಿ ಅಲ್ಲ, ಬದಲಾಗಿ ಫೀಲ್ಡಿಂಗ್‌ನಲ್ಲಿ. ತಿಲಕ್ ವರ್ಮಾ ಇದೀಗ ಕ್ಯಾಲೆಂಡರ್ ವರ್ಷವೊಂದರಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎನ್ನುವ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ.
ಹೌದು, ಟೀಂ ಇಂಡಿಯಾ ಟಿ20 ತಂಡದ ಉಪನಾಯಕ ತಿಲಕ್ ವರ್ಮಾ, ಇದೀಗ ನ್ಯೂಜಿಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಮೊದಲ ಮೂರು ಓವರ್‌ನಲ್ಲೇ ಎರಡು ವಿಕೆಟ್ ಕಬಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ನೆಟ್ಟರು. ಮೊದಲಿಗೆ ಟಿಮ್ ಸೀಫರ್ಟ್ ಆ ಬಳಿಕ ಡೇರಲ್ ಮಿಚೆಲ್ ಅವರ ಕ್ಯಾಚ್ ಹಿಡಿಯುವ ಮೂಲಕ ಇಂಡೋನೇಷ್ಯಾದ ಡ್ಯಾನಿಲ್ಸನ್ ಹೌವೇ ಅವರನ್ನು ಹಿಂದಿಕ್ಕಿ ಈ ವಿಶ್ವದಾಖಲೆ ನಿರ್ಮಿಸಿದರು. ಇಂಡೋನೇಷ್ಯಾದ ಡ್ಯಾನಿಲ್ಸನ್ ಹೌವೇ 2025ರ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 25 ಕ್ಯಾಚ್‌ಗಳನ್ನು ಹಿಡಿದಿದ್ದರು. ಇದೀಗ ತಿಲಕ್ ವರ್ಮಾ 2026ರ ಕ್ಯಾಲೆಂಡರ್ ವರ್ಷದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 26 ಕ್ಯಾಚ್ ಹಿಡಿಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ತಿಲಕ್ ವರ್ಮಾ ಹೊರತುಪಡಿಸಿದರೇ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಕ್ಯಾಲೆಂಡರ್ ವರ್ಷವೊಂದರಲ್ಲಿ ಯಾವೊಬ್ಬ ಫೀಲ್ಡರ್ ಕೂಡಾ 25ಕ್ಕೂ ಹೆಚ್ಚು ಕ್ಯಾಚ್ ಹಿಡಿದಿಲ್ಲ.
ಇನ್ನು ಎರಡನೇ ಟಿ20 ಪಂದ್ಯದಲ್ಲಿ ಗೆಲ್ಲಲು 181 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಳ್ಳುವ ಮೂಲಕ ಸೋಲಿನತ್ತ ಮುಖ ಮಾಡಿತ್ತು. ಒಂದು ಹಂತದಲ್ಲಿ ಭಾರತ ತಂಡವು 7- ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಐವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದ್ದರು. ಈ ವೇಳೆ ನಮನ್ ಧೀರ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಜತೆ ಉಪಯುಕ್ತ ಜತೆಯಾಟವಾಡಿದ ತಿಲಕ್ ವರ್ಮಾ ಭಾರತಕ್ಕೆ ಅವಿಸ್ಮರಣೀಯ ಗೆಲುವು ತಂದುಕೊಟ್ಟರು. ಕಿವೀಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ತಿಲಕ್ ವರ್ಮಾ ಕೇವಲ 26 ಎಸೆತಗಳಲ್ಲಿ 6 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 51 ರನ್ ಸಿಡಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಫೀಲ್ಡಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಮಿಂಚಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ತಿಲಕ್ ವರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.
ಇದು ಟೀಂ ಇಂಡಿಯಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ದಾಖಲಿಸಿದ ಇನ್ನೂರನೇ ಗೆಲುವು ಎನಿಸಿಕೊಂಡಿತು. ಈ ಗೆಲುವಿನೊಂದಿಗೆ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ತಂಡವು ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇನ್ನುಳಿದ ಮೂರು ಪಂದ್ಯಗಳ ಪೈಕಿ ಇನ್ನೊಂದು ಪಂದ್ಯ ಗೆದ್ದರೂ ಸರಣಿ ಟೀಂ ಇಂಡಿಯಾ ಪಾಲಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.