
ದೋಹಾ(ನ.24): ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಯುಎಇ ವಿರುದ್ಧದ ಎಸಿಸಿ ಪುರುಷರ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಪಂದ್ಯದಲ್ಲಿ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಶತಕದ ವಿಶ್ವ ದಾಖಲೆಯನ್ನು ನಿರ್ಮಿಸಿದ್ದ ಅವರು ಇದೀಗ ಕೇವಲ 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ಮತ್ತೊಂದು ವಿಶ್ವದಾಖಲೆ ನಿರ್ಮಿಸಿದ್ದಾರೆ.
15 ವರ್ಷದ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪರ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದು, ಯುಎಇ ಬೌಲರ್‌ಗಳನ್ನು ಬೆಂಡೆತ್ತಿದರು. 250 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಎ ತಂಡಕ್ಕೆ ಅವರು ಸ್ಫೋಟಕ ಆರಂಭ ನೀಡಿದರು. ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್, ನಂತರ 28 ಎಸೆತಗಳಲ್ಲಿ ಶತಕದ ಗಡಿ ತಲುಪಿದರು. ವೈಭವ್ ಸೂರ್ಯವಂಶಿ ತಮ್ಮ ಆಕ್ರಮಣಕಾರಿ ಆಟವನ್ನು ಮೊದಲ ಓವರ್‌ನಿಂದಲೇ ಆರಂಭಿಸಿದರು. ಯುಎಇ ಬೌಲರ್ ಜಾಹಿದ್ ಅಲಿ ಎಸೆದ ಮೊದಲ ಓವರ್‌ನಲ್ಲಿ ಮೂರು ಸಿಕ್ಸರ್ ಸಿಡಿಸಿ ಎದುರಾಳಿ ತಂಡಕ್ಕೆ ಎಚ್ಚರಿಕೆ ನೀಡಿದರು.
ಇದಾದ ಬಳಿಕವೂ ತಮ್ಮ ಬ್ಯಾಟಿಂಗ್ ಸುನಾಮಿ ಮುಂದುವರೆಸಿದ ವೈಭವ್ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸಿದರು. ಇದರಲ್ಲಿ 14 ಮುಗಿಲೆತ್ತರದ ಸಿಕ್ಸರ್‌ಗಳು ಸೇರಿದ್ದವು. ಅಂದರೆ ಎರಡು ಎಸೆತಗಳಿಗೆ ಒಂದು ಸಿಕ್ಸರ್‌ನಂತೆ ಕೇವಲ 28 ಎಸೆತಗಳಲ್ಲಿ ವೈಭವ್ ಮೂರಂಕಿ ಮೊತ್ತ ದಾಖಲಿಸಿದರು. ಇದಾದ ಬಳಿಕವೂ ವೈಭವ್ ಅಬ್ಬರ ತಣ್ಣಗಾಗಲಿಲ್ಲ. ಕೇವಲ 40 ಎಸೆತಗಳಲ್ಲಿ 150 ರನ್ ಪೂರೈಸಿದ ವೈಭವ್, ಕೇವಲ 52 ಎಸೆತಗಳಲ್ಲಿ ದ್ವಿಶತಕ ಸಿಡಿಸುವ ಮೂಲಕ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇದೀಗ ವೈಭವ್ ಸೂರ್ಯವಂಶಿ ಲಿಸ್ಟ್ 'ಎ' ಕ್ರಿಕೆಟ್ ಇತಿಹಾಸದಲ್ಲಿಯೇ ಅತಿವೇಗದ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ ಆಟಗಾರ ಎನ್ನುವ ಅಪರೂಪದ ದಾಖಲೆ ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಅಂತಿಮವಾಗಿ ವೈಭವ್ ಸೂರ್ಯವಂಶಿ ಕೇವಲ 53 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 28 ಮುಗಿಲೆತ್ತರದ ಸಿಕ್ಸರ್‌ಗಳ ನೆರವಿನಿಂದ 204 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದೀಗ 15 ವರ್ಷದ ವೈಭವ್ ಸೂರ್ಯವಂಶಿ ಲಿಸ್ಟ್ 'ಎ' ಕ್ರಿಕೆಟ್ ಪಂದ್ಯದ ಇತಿಹಾಸದಲ್ಲಿ ಇನ್ನಿಂಗ್ಸ್‌ವೊಂದರಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೊದಲಿ ಡಾರ್ಸಿ ಶಾರ್ಟ್ ಕ್ವೀನ್ಸ್‌ಲ್ಯಾಂಡ್ ಸಿಡ್ನಿ ವಿರುದ್ದ 2018ರಲ್ಲಿ 23 ಸಿಕ್ಸರ್ ಸಿಡಿಸಿದ್ದರು.
ಬಿಹಾರ ಮೂಲದ ವೈಭವ್ ಸೂರ್ಯವಂಶಿ ಇದೀಗ ಕೇವಲ 52 ಎಸೆತಗಳಲ್ಲಿ ದ್ವಿಶತಕ ಸಿಡಿಸುವ ಮೂಲಕ ಲಿಸ್ಟ್ 'ಎ' ಕ್ರಿಕೆಟ್ ಇತಿಹಾಸದಲ್ಲಿ ಅತಿವೇಗದ ದ್ವಿಶತಕ ಸಿಡಿಸಿದ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಮೊದಲು 2024ರಲ್ಲಿ ಕ್ಯಾಂಟರ್‌ಬರಿ ಪರ ಚಾಂದ್ ಬೌಸ್ 103 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದರು. ಆ ದಾಖಲೆ ಇದೀಗ ನುಚ್ಚುನೂರಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.