
ಬೆಂಗಳೂರು: ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪವಾಡಸದೃಶ ರೀತಿಯಲ್ಲಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ. ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ತವರಿನಲ್ಲಿ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ತಂಡವು 27 ರನ್ ಅಂತರದ ಗೆಲುವು ಸಾಧಿಸಿತು. ಈ ಮೂಲಕ 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 4ನೇ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಯಿತು. ಈಗಾಗಲೇ ಕೋಲ್ಕತಾ ನೈಟ್ ರೈಡರ್ಸ್, ರಾಜಸ್ಥಾನ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿವೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಯಕ ಫಾಫ್ ಡು ಪ್ಲೆಸಿಸ್(54), ವಿರಾಟ್ ಕೊಹ್ಲಿ(47) ಮೊದಲ ವಿಕೆಟ್‌ಗೆ 78 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಆ ಬಳಿಕ ರಜತ್ ಪಾಟೀದಾರ್ ಹಾಗೂ ಕ್ಯಾಮರೋನ್ ಗ್ರೀನ್ ಮೂರನೇ ವಿಕೆಟ್‌ಗೆ 71 ರನ್‌ಗಳ ಜತೆಯಾಟವಾಡುವ ಮೂಲಕ ಆಸರೆಯಾದರು. ಎಂದಿನಂತೆ ಮತ್ತೊಮ್ಮೆ ಸ್ಪೋಟಕ ಬ್ಯಾಟಿಂಗ್ ನಡೆಸಿದ ರಜತ್ ಪಾಟೀದಾರ್ 41 ರನ್ ಸಿಡಿಸಿದರೆ, ಕ್ಯಾಮರೋನ್ ಗ್ರೀನ್ ಅಮೂಲ್ಯ 38 ರನ್ ಸಿಡಿಸಿದರು. ಪರಿಣಾಮ ಆರ್‌ಸಿಬಿ 5 ವಿಕೆಟ್ ಕಳೆದುಕೊಂಡು 218 ರನ್ ಕಲೆಹಾಕಿತು.
ಐಪಿಎಲ್ ಇಂಪ್ಯಾಕ್ಟ್ ಆಟಗಾರ ನಿಯಮದ ಬಗ್ಗೆ ಮೊದಲ ಬಾರಿಗೆ ತುಟಿಬಿಚ್ಚಿದ ವಿರಾಟ್ ಕೊಹ್ಲಿ..!
ಇನ್ನು ಗೆಲ್ಲಲು 219 ಹಾಗೂ ಪ್ಲೇ ಆಫ್‌ಗೇರಲು 201 ರನ್ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್, ಆರ್‌ಸಿಬಿ ತಂಡದ ಸಂಘಟಿತ ಬೌಲಿಂಗ್ ಪ್ರದರ್ಶನಕ್ಕೆ ತತ್ತರಿಸಿ 7 ವಿಕೆಟ್ ಕಳೆದುಕೊಂಡು ಕೇವಲ 191 ರನ್ ಗಳಿಸಲಷ್ಟೇ ಶಕ್ತವಾಯಿತು. ರಚಿನ್ ರವೀಂದ್ರ ಸ್ಪೋಟಕ ಅರ್ಧಶತಕ(61 ರನ್, 37 ಎಸೆತ) ಹಾಗೂ ರವೀಂದ್ರ ಜಡೇಜಾ(42) ಮತ್ತು ಅಜಿಂಕ್ಯ ರಹಾನೆ(33) ಪ್ರತಿರೋಧ ತೋರಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
ಆರ್‌ಸಿಬಿ ಗೆಲುವು ದಾಖಲಿಸುತ್ತಿದ್ದಂತೆಯೇ ಆಟಗಾರರು ಹಾಗೂ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತು. ಈ ಸಂದರ್ಭದಲ್ಲಿ ಪಂದ್ಯ ವೀಕ್ಷಿಸಲು ಬಂದಿದ್ದ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕಣ್ಣಿನಲ್ಲಿ ಆನಂದ ಭಾಷ್ಪ ಜಿನುಗಿತು. ಇದನ್ನು ಗಮನಿಸಿದ ವಿರಾಟ್ ಕೊಹ್ಲಿ ಕಣ್ಣಾಲಿಗಳು ತುಂಬಿ ಬಂದಿತು. ಈ ಭಾವನಾತ್ಮಕ ಕ್ಷಣಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಾಕ್ಷಿಯಾಯಿತು.
CSK ಹೊರದಬ್ಬಿ ಪ್ಲೇ ಆಫ್‌ಗೆ ಆರ್‌ಸಿಬಿ ಲಗ್ಗೆ! ಈ ಸಲ ಕಪ್ ನಮ್ದೇ..?
ಈ ಕ್ಷಣಗಳು ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ವೈರಲ್ ಆಗಿವೆ:
ಆರ್‌ಸಿಬಿ ತಂಡವು ಮೊದಲಾರ್ಧದ 8 ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಹಾಗೂ 7 ಸೋಲು ಕಂಡಿತ್ತು. ಇದಾದ ಬಳಿಕ ಸತತ 6 ಪಂದ್ಯ ಗೆದ್ದು ಪ್ಲೆ ಆಫ್‌ಗೆ ಲಗ್ಗೆಯಿಡುವ ಮೂಲಕ ಚೊಚ್ಚಲ ಐಪಿಎಲ್ ಕಪ್ ಗೆಲ್ಲುವ ಕನಸು ಜೀವಂತವಾಗಿಸಿಕೊಂಡಿದೆ. ವಿರಾಟ್ ಕೊಹ್ಲಿ ಈಗಾಗಲೇ ಹೇಳಿದಂತೆ ಇದು ಆರ್‌ಸಿಬಿಯ ಹೊಸ ಅಧ್ಯಾಯ ಆಗುವ ನಿಟ್ಟಿನಲ್ಲಿ ಬೆಂಗಳೂರು ತಂಡವು ದಿಟ್ಟ ಹೆಜ್ಜೆಯಿಟ್ಟಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.