* ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಭರ್ಜರಿ ಸಿದ್ದತೆ
* ಆಸ್ಟ್ರೇಲಿಯಾ ಎದುರಿನ ಸರಣಿಗೂ ಮುನ್ನ ಮಾಧ್ಯಮದವರ ಜತೆ ರೋಹಿತ್ ಶರ್ಮಾ ಸುದ್ದಿಗೋಷ್ಠಿ
* ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ, ಆರಂಭಿಕ ಆಟಗಾರರ ಆಯ್ಕೆಯಲ್ಲೊಬ್ಬರು ಎಂದ ಹಿಟ್‌ಮ್ಯಾನ್
ಮೊಹಾಲಿ(ಸೆ.18): ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಸೆಪ್ಟೆಂಬರ್ 20ರಂದು ಮೊಹಾಲಿಯಲ್ಲಿ ಆರಂಭವಾಗಲಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಮಾಡಿದಂತೆ, ಆಸ್ಟ್ರೇಲಿಯಾ ಎದುರಿನ ಸರಣಿಯಲ್ಲೂ ಟೀಂ ಇಂಡಿಯಾ, ಪ್ರಯೋಗಕ್ಕೆ ಮುಂದಾಗಲಿದೆಯೇ ಎನ್ನುವ ಕುತೂಹಲ ಜೋರಾಗಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಫಿಟ್ನೆಸ್ ಸಾಬೀತುಪಡಿಸಿ ತಂಡ ಕೂಡಿಕೊಂಡಿದ್ದು, ರೋಹಿತ್ ಶರ್ಮಾ ಪಡೆಯ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.
ಇದೀಗ ಆಸ್ಟ್ರೇಲಿಯಾ ಎದುರಿನ ಟಿ20 ಸರಣಿಗೂ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ವಿರಾಟ್ ಕೊಹ್ಲಿ ಆರಂಭಿಕನಾಗಿ ಆಡುವ ಆಯ್ಕೆ ಇರುವುದು ಒಳ್ಳೆಯ ಬೆಳವಣಿಗೆ. ವಿಶ್ವಕಪ್ ಟೂರ್ನಿಯ ವೇಳೆಯಲ್ಲಿ ತಂಡದಲ್ಲಿ ಈ ರೀತಿ ಪ್ಲೆಕ್ಸಿಬಿಲಿಟಿ ಇರುವುದು ಒಳ್ಳೆಯ ಲಕ್ಷಣವಾಗಿದೆ. ಯಾವುದೇ ಕ್ರಮಾಂಕದಲ್ಲಿ ಕಣಕ್ಕಿಳಿದರೂ ಉತ್ತಮ ಪ್ರದರ್ಶನ ತೋರುವಂತಹ ಆಟಗಾರರು ನಮ್ಮ ತಂಡದಲ್ಲಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
undefined
ನಾವು ನಮ್ಮ ತಂಡದ ಆಟಗಾರರ ಶಕ್ತಿ-ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡಿದ್ದೇವೆ. ಅವರೆಲ್ಲರೂ ತಂಡಕ್ಕೆ ಯಾವ ರೀತಿಯ ಕೊಡುಗೆ ನೀಡಬಲ್ಲರು ಎನ್ನುವುದರ ಅರಿವಿದೆ. ಆರಂಭಿಕ ಆಟಗಾರನಾಗಿ ವಿರಾಟ್ ಕೊಹ್ಲಿಯೂ ನಮ್ಮ ಆಯ್ಕೆಯಲ್ಲೊಬ್ಬರು. ಅದು ನಮ್ಮ ಗಮನದಲ್ಲಿರುತ್ತದೆ. ಈ ಕಾರಣಕ್ಕಾಗಿಯೇ ನಾವು ಮೂರನೇ ಆರಂಭಿಕ ಬ್ಯಾಟರ್ ಅವರನ್ನು ಆಯ್ಕೆ ಮಾಡಿಕೊಂಡಿಲ್ಲ. ಐಪಿಎಲ್‌ನಲ್ಲಿ ಅವರು ಆರಂಭಿಕರಾಗಿ ಇನಿಂಗ್ಸ್ ಆರಂಭಿಸಿ ಉತ್ತಮ ಪ್ರದರ್ಶನ ತೋರಿದ್ದಾರೆ. ಹೀಗಾಗಿ ಅವರು ಖಂಡಿತವಾಗಿಯೂ ನಮ್ಮ ಆರಂಭಿಕ ಆಟಗಾರರ ಆಯ್ಕೆಯಲ್ಲೊಬ್ಬರಾಗಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
Ind vs Aus: 3 ವರ್ಷಗಳ ಬಳಿಕ ಟೀಂ ಇಂಡಿಯಾ ಕೂಡಿಕೊಂಡ ಮಾರಕ ವೇಗಿ ಉಮೇಶ್ ಯಾದವ್..!
ವಿರಾಟ್ ಕೊಹ್ಲಿ ನಮ್ಮ ತಂಡದ ಮೂರನೇ ಆರಂಭಿಕ ಬ್ಯಾಟರ್ ಆಗಿದ್ದಾರೆ. ಹಾಗೂ ಕೆಲವು ಪಂದ್ಯಗಳಲ್ಲಿ ಅವರು ಆರಂಭಿಕರಾಗಿಯೂ ಕಣಕ್ಕಿಳಿಯಬಹುದು. ಕಳೆದ ಏಷ್ಯಾಕಪ್ ಟೂರ್ನಿಯ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡಿದ ರೀತಿ ಎಲ್ಲರಿಗೂ ಖುಷಿ ಕೊಟ್ಟಿದೆ. ಆದರೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕೆ ಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ. ಈ ವಿಚಾರದಲ್ಲಿ ನಾವು ಹೆಚ್ಚು ಪ್ರಯೋಗ ನಡೆಸುವುದಿಲ್ಲ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಆಸ್ಟ್ರೇಲಿಯಾ ಎದುರಿನ ಸರಣಿಗೆ ಭಾರತ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್.