
ರಾಜ್‌ಕೋಟ್: ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ರೆಡ್ ಹಾಟ್ ಫಾರ್ಮ್‌ನಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕವಂತೂ 2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ ರನ್ ಮಳೆ ಹರಿಸುತ್ತಾ ಮುನ್ನುಗ್ಗುತ್ತಿದ್ದಾರೆ. ನ್ಯೂಜಿಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 91 ಎಸೆತಗಳನ್ನು ಎದುರಿಸಿ 93 ರನ್ ಸಿಡಿಸಿ ಮಿಂಚಿದ್ದರು. ಕೊಹ್ಲಿಯ ಈ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಟೀಂ ಇಂಡಿಯಾ, ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಸುಲಭ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.
ನ್ಯೂಜಿಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 93 ರನ್ ಬಾರಿಸುವುದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಸತತ ಐದನೇ ಬಾರಿಗೆ 50+ ರನ್ ದಾಖಲಿಸುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ ಅರ್ಧಶತಕ ಸಿಡಿಸಿದ್ದರು. ಇದಾದ ಬಳಿಕ ಕೊಹ್ಲಿ, ದಕ್ಷಿಣ ಆಫ್ರಿಕಾ ಎದುರಿನ ಮೊದಲೆರಡು ಪಂದ್ಯಗಳಲ್ಲಿ ಶತಕ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ ಕಿವೀಸ್ ಎದುರು ಕೊಹ್ಲಿ ತಮ್ಮ ಅರ್ಧಶತಕದ ನಾಗಾಲೋಟವನ್ನು ಮುನ್ನಡೆಸಿದ್ದಾರೆ. ವಿರಾಟ್ ಕೊಹ್ಲಿ ಸತತವಾಗಿ 50+ ರನ್ ಬಾರಿಸುವುದು ಇದೇ ಹೊಸತೇನಲ್ಲ. ಈ ಮೊದಲು 2012, 2013, 2019, 2023 ಹಾಗೂ 2025ರಲ್ಲಿ ಸತತ 5 ಪಂದ್ಯಗಳಲ್ಲಿ 50+ ರನ್ ಬಾರಿಸಿದ ದಾಖಲೆ ನಿರ್ಮಿಸಿದ್ದಾರೆ.
ಇನ್ನೂ ಇಂಟ್ರೆಸ್ಟಿಂಗ್ ಸಂಗತಿಯೆಂದರೇ ಸತತ 5 ಏಕದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅಲ್ಲದೇ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಅಜಿಂಕ್ಯ ರಹಾನೆ ಹಾಗೂ ರೋಹಿತ್ ಶರ್ಮಾ ಕೂಡಾ ಸತತ ಐದು ಪಂದ್ಯಗಳಲ್ಲಿ 50+ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ. ಒಂದು ವೇಳೆ ವಿರಾಟ್ ಕೊಹ್ಲಿ, ರಾಜ್‌ಕೋಟ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ 50+ ರನ್ ಬಾರಿಸಿದರೆ, ಸತತ ಆರು ಏಕದಿನ ಪಂದ್ಯಗಳಲ್ಲಿ 50+ ರನ್ ಬಾರಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎನ್ನುವ ವಿಶ್ವದಾಖಲೆ ನಿರ್ಮಿಸಲಿದ್ದಾರೆ.
ಇನ್ನು ಇದಷ್ಟೇ ಅಲ್ಲದೇ, ರಾಜ್‌ಕೋಟ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇನ್ನೊಂದು ರನ್ ಬಾರಿಸಿದರೂ, ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಇನ್ನೊಂದು ಅಪರೂಪದ ದಾಖಲೆ ವಿರಾಟ್ ಕೊಹ್ಲಿ ಪಾಲಾಗಲಿದೆ. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ಎದುರು 1750 ರನ್ ಸಿಡಿಸಿದ್ದಾರೆ. ಕಳೆದ ಪಂದ್ಯದಲ್ಲಿ ಕೊಹ್ಲಿ 93 ರನ್ ಸಿಡಿಸುತ್ತಿದ್ದಂತೆಯೇ ಕಿವೀಸ್ ಎದುರು ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಇದೀಗ ಮುಂದಿನ ಪಂದ್ಯದಲ್ಲಿ ಇನ್ನೊಂದು ರನ್ ಬಾರಿಸಿದರೂ ಕಿವೀಸ್ ಎದುರು ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನ್ನುವ ದಾಖಲೆ ವಿರಾಟ್ ಕೊಹ್ಲಿ ಪಾಲಾಗಲಿದೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 1-0 ಮುನ್ನಡೆಯಲ್ಲಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರುತ್ತಿರುವ ಭಾರತ, ಎರಡನೇ ಪಂದ್ಯ ಗೆಲ್ಲುವ ಮೂಲಕ ಇನ್ನೊಂದು ಪಂದ್ಯ ಬಾಕಿ ಇರುವಂತೆಯೆ ಸರಣಿ ಕೈವಶ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.