ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ನೆರವಿನಿಂದ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿದ್ದು, ಟೀಂ ಇಂಡಿಯಾ ಕಠಿಣ ಗುರಿ ನೀಡಿದೆ.
ಪರ್ತ್; ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಬಾರಿಸಿದ ಆಕರ್ಷಕ ಶತಕಗಳ ನೆರವಿನಿಂದ ಟೀಂ ಇಂಡಿಯಾ, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತ ದಾಖಲಿಸಿದೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಕಳೆದುಕೊಂಡು 487 ರನ್ ಬಾರಿಸಿದ್ದು, ಆಸೀಸ್‌ಗೆ ಮೊದಲ ಟೆಸ್ಟ್ ಗೆಲ್ಲಲು 534 ರನ್‌ಗಳ ಕಠಿಣ ಗುರಿ ನೀಡಿದೆ.
ಇಲ್ಲಿನ ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 177 ರನ್ ಗಳಿಸಿದ್ದ ಟೀಂ ಇಂಡಿಯಾ ಮೂರನೇ ದಿನದಾಟದ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು. ಯಶಸ್ವಿ ಜೈಸ್ವಾಲ್ ಹಾಗೂ ಕೆ ಎಲ್ ರಾಹುಲ್ ಮೊದಲ ವಿಕೆಟ್‌ಗೆ ದಾಖಲೆಯ 201 ರನ್‌ಗಳ ಜತೆಯಾಟವಾಡಿದರು. ರಾಹುಲ್ 77 ರನ್ ಗಳಿಸಿ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದರು.
undefined
ಇನ್ನು ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ ಯಶಸ್ವಿ ಜೈಸ್ವಾಲ್, ಆಸೀಸ್ ನೆಲದಲ್ಲಿ ತಾನಾಡಿದ ಮೊದಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಸ್ಮರಣೀಯವಾಗಿಸಿಕೊಂಡರು. ಜೈಸ್ವಾಲ್ 297 ಎಸೆತಗಳನ್ನು ಎದುರಿಸಿ 15 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 161 ರನ್ ಗಳಿಸಿ ಮಿಚೆಲ್ ಮಾರ್ಷ್‌ಗೆ ವಿಕೆಟ್ ಒಪ್ಪಿಸಿದರು.
33ನೇ ಟೆಸ್ಟ್ ಶತಕ ಸಿಡಿಸಿದ ಕೊಹ್ಲಿ:
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮೂರಂಕಿ ಮೊತ್ತ ದಾಖಲಿಸಲು ಪರದಾಡುತ್ತಾ ಬಂದಿದ್ದರು. ಆದರೆ ಇದೀಗ ಬರೋಬ್ಬರಿ 500 ದಿನಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಶತಕ ಸಿಡಿಸುವಲ್ಲಿ ಯಶಸ್ವಿಯಾದರು. ಕೊಹ್ಲಿ 143 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 100 ರನ್ ಬಾರಿಸಿದರು. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿ ಬಾರಿಸಿದ 33ನೇ ಹಾಗೂ ಒಟ್ಟಾರೆ 81ನೇ ಶತಕ ಎನಿಸಿಕೊಂಡಿತು.