
ದುಬೈ(ಸೆ.19): ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಕೆಳಗಿಳಿದ ವಿರಾಟ್ ಕೊಹ್ಲಿ ಇದೀಗ ಮತ್ತೊಂದು ಶಾಕ್ ನೀಡಿದ್ದಾರೆ. 2021ರ ಐಪಿಎಲ್ ಟೂರ್ನಿ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವಕ್ಕೂ ಗುಡ್ ಬೈ ಹೇಳುತ್ತಿದ್ದಾರೆ.
ಆರ್‌ಸಿಬಿ ಅಧೀಕೃತ ಟ್ವಿಟರ್ ಖಾತೆಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವಕ್ಕೆ ವಿದಾಯ ಕುರಿತು ಘೋಷಿಸಲಾಗಿದೆ. ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಟಿ20 ನಾಯಕತ್ವಕ್ಕೆ ವಿದಾಯ ಹೇಳಿದ್ದರು. ಮುಂಬರುವ ಟಿ20 ವಿಶ್ವಕಪ್ ಬಳಿಕ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಇದೀಗ ಆರ್‌ಸಿಬಿ ನಾಯಕತ್ವದಿಂದಲೂ ಕೆಳಗಿಳಿಯುವುದಾಗಿ ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್ ಟೂರ್ನಿ. ಆದರೆ ನಾನು ಆರ್‌ಸಿಬಿ ಕ್ರಿಕೆಟಿಗನಾಗಿ ಮುಂದುವರಿಯುತ್ತೇನೆ. ನನ್ನನ್ನು ನಂಬಿದ, ಬೆಂಬಲಿಸಿದ ಎಲ್ಲಾ ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದ ಎಂದು ಕೊಹ್ಲಿ ಹೇಳಿದ್ದಾರೆ.
ಕೊಹ್ಲಿ ನಿರ್ಧಾರ ಆರ್‌ಸಿಬಿ ಅಭಿಮಾನಿಗಳಿಗೆ ಶಾಕ್ ನೀಡಿದೆ. ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಇದುವರೆಗೆ ಪ್ರಶಸ್ತಿ ಗೆದ್ದಿಲ್ಲ. ಆದರೆ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ನೆಚ್ಚಿನ ನಾಯಕ. ಇದೀಗ ಈ ನಿರ್ಧಾರ ಅಭಿಮಾನಿಗಳಿಗೆ ಮತ್ತಷ್ಟು ಆಘಾತ ನೀಡಿದೆ.2008ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದ ವಿರಾಟ್ ಕೊಹ್ಲಿ, ಇದುವರೆಗೂ ಒಂದೇ ತಂಡದಲ್ಲಿ ಆಡಿದ್ದಾರೆ. ಮುಂದಿನ ವರ್ಷ ಮೆಗಾ ಹರಾಜು ನಡೆಯಲಿದೆ. ಆದರೆ ಆರ್‌ಸಿಬಿ ಹೊರತು ಪಡಿಸಿ ಬೇರೆ ತಂಡಕ್ಕೆ ಆಡುವುದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ವಿದಾಯದ ವರೆಗೂ ಆರ್‌ಸಿಬಿ ತಂಡದಲ್ಲೇ ಆಡುವುದಾಗಿ ಕೊಹ್ಲಿ ಹೇಳಿದ್ದಾರೆ. ನಾಯಕತ್ವದಿಂದ ಕೆಳಗಿಳಿದರೂ ಜವಾಬ್ದಾರಿ, ಬದ್ಧತೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೊಹ್ಲಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.