
ಬೆಂಗಳೂರು: ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ಎದುರಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಆಡಿದ ಶತಕದ ಜತೆಯಾಟ ವ್ಯರ್ಥವಾಯಿತು. ಜುಲೈ 19ರಂದು ನಡೆದ ಇಂಗ್ಲೆಂಡ್ ಎದುರಿನ ಮೂರನೇ ಪಂದ್ಯದಲ್ಲಿ ಗೆಲ್ಲಲು 388 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಮಾಜಿ ನಾಯಕರಾದ ರೋಹಿತ್ ಶರ್ಮಾ 138 ಹಾಗೂ ವಿರಾಟ್ ಕೊಹ್ಲಿ 74 ರನ್ ಸಿಡಿಸಿದರು. ಹೀಗಿದ್ದೂ ಭಾರತ ತಂಡವು 27 ರನ್‌ಗಳ ಸೋಲು ಅನುಭವಿಸಿತು.
ಟೀಂ ಇಂಡಿಯಾ ಮಾಜಿ ನಾಯಕರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ ಕೇವಲ 87 ಎಸೆತಗಳಲ್ಲಿ 113 ರನ್‌ಗಳ ಜತೆಯಾಟವಾಡಿದರು. ಈ ಜತೆಯಾಟದಲ್ಲಿ ರೋಹಿತ್ ಶರ್ಮಾ 48 ಎಸೆತಗಳಲ್ಲಿ 71 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 38 ರನ್ ಬಾರಿಸಿ ಉತ್ತಮ ಸಾಥ್ ನೀಡಿದರು. ಟೀಂ ಇಂಡಿಯಾ ಪರ ಅಗ್ರಕ್ರಮಾಂಕದ ಮೂವರು ಬ್ಯಾಟರ್‌ಗಳು ಹೊರತುಪಡಿಸಿ ಉಳಿದ್ಯಾವ ಆಟಗಾರರು ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ತೋರಲಿಲ್ಲ. ಪರಿಣಾಮ ಟೀಂ ಇಂಡಿಯಾ ವಿರೋಚಿತ ಸೋಲು ಅನುಭವಿಸಿತು. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿದ್ದ ಭಾರತ ತಂಡವು ಆ ಬಳಿಕ ಸತತ ಎರಡು ಪಂದ್ಯಗಳನ್ನು ಸೋಲುವ ಮೂಲಕ ನಿರಾಸೆ ಅನುಭವಿಸಿತು.
ಇದೀಗ ಇಂಗ್ಲೆಂಡ್ ಎದುರಿನ ಏಕದಿನ ಸರಣಿ ಮುಕ್ತಾಯದ ಬಳಿಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕೊಂಚ ವಿಶ್ರಾಂತಿಗೆ ಜಾರಲಿದ್ದಾರೆ. ಯಾಕೆಂದರೆ ಈ ಇಬ್ಬರು ಮಾಜಿ ನಾಯಕರು 2024ರ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇನ್ನು ಕಳೆದ 2025ರ ಮೇ ತಿಂಗಳಿನಲ್ಲಿ ಟೆಸ್ಟ್ ಕ್ರಿಕೆಟ್‌ಗೂ ವಿದಾಯ ಘೋಷಿಸಿದ್ದರು. ಹೀಗಾಗಿ ಈ ಇಬ್ಬರು ಆಟಗಾರರು ಸದ್ಯ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಭಾರತ ತಂಡವು ಮುಂಬರುವ ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಸೆಪ್ಟೆಂಬರ್ 27, 30 ಹಾಗೂ ಅಕ್ಟೋಬರ್ 03ರಂದು ಈ ಮೂರು ಏಕದಿನ ಪಂದ್ಯಗಳು ನಡೆಯಲಿವೆ. ಈ ಸರಣಿಯಲ್ಲಿ ರೋ-ಕೊ ಜೋಡಿ ಟೀಂ ಇಂಡಿಯಾ ಪರ ಕಣಕ್ಕಿಳಿಯಲಿದೆ.
ಇದಾದ ಬಳಿಕ ಭಾರತ ತಂಡವು ಕಿವೀಸ್ ಪ್ರವಾಸ ಮಾಡಲಿದ್ದು, ಅಲ್ಲಿ ಭಾರತ ತಂಡವು ನ್ಯೂಜಿಲೆಂಡ್ ಎದುರು ಐದು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯು ನವೆಂಬರ್ 4,7,10,13 ಹಾಗೂ 15ರಂದು ನಿಗದಿಯಾಗಿದೆ. 2027ರ ಐಪಿಎಲ್ ಟೂರ್ನಿಗೂ ಮುನ್ನ ರೋ-ಕೊ ಜೋಡಿ ಕನಿಷ್ಠವೆಂದರೂ ಭಾರತ ಪರ 14 ಏಕದಿನ ಪಂದ್ಯಗಳನ್ನಾಡಲಿದೆ.
ಇನ್ನು 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಮುಂದಿನ ವರ್ಷದ ಅಕ್ಟೋಬರ್ 04ರಿಂದ ನವೆಂಬರ್ 21ರವರೆಗೆ ನಡೆಯಲಿದೆ. ಈ ಪ್ರತಿಷ್ಠಿತ ಐಸಿಸಿ ಟೂರ್ನಿಗೆ ದಕ್ಷಿಣ ಆಫ್ರಿಕಾ, ನಮೀಬಿಯಾ ಹಾಗೂ ಜಿಂಬಾಬ್ವೆ ಆತಿಥ್ಯ ವಹಿಸಿವೆ. ವಿರಾಟ್ ಕೊಹ್ಲಿ ಒಮ್ಮೆ ಏಕದಿನ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ. ಆದರೆ ರೋಹಿತ್ ಶರ್ಮಾ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಜಯಿಸುವ ಕನಸು ಕಾಣುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.