
ಇಂದೋರ್: ಈ ಬಾರಿ ಮಹಿಳಾ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಆತಿಥೇಯ ಭಾರತ ತಂಡಕ್ಕೆ ಬಲಿಷ್ಠ ಆಸ್ಟ್ರೇಲಿಯಾ ಸವಾಲು ಎದುರಾಗಲಿದೆ. ಈ ಪಂದ್ಯ ಅ.30ರಂದು ನವಿ ಮುಂಬೈನಲ್ಲಿ ನಡೆಯಲಿದೆ. ಮತ್ತೊಂದು ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳು ಅ.29ರಂದು ಗುವಾಹಟಿಯಲ್ಲಿ ಸೆಣಸಾಡಲಿವೆ.
ಶನಿವಾರ ದ.ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಆಸೀಸ್ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಸೆಮೀಸ್ ಪ್ರವೇಶಿಸಿತು. ತಂಡ ಆಡಿರುವ 7 ಪಂದ್ಯಗಳ ಪೈಕಿ 6ರಲ್ಲಿ ಗೆದ್ದಿದ್ದು, 13 ಅಂಕ ಸಂಪಾದಿಸಿದೆ. ಮತ್ತೊಂದೆಡೆ ಭಾರತ ಪಟ್ಟಿಯಲ್ಲಿ 4ನೇ ಸ್ಥಾನಿಯಾಗಿದೆ. ಹೀಗಾಗಿ ಸೆಮಿಫೈನಲ್‌ನಲ್ಲಿ ಲೀಗ್ ಹಂತ ಮುಕ್ತಾಯದ ಬಳಿಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಕಾಂಗರೂ ಪಡೆ, ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಿ ಭಾರತ ಎದುರು ಕಾದಾಡಲಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಹ್ಯಾಟ್ರಿಕ್ ಸೋಲಿನ ಬಳಿಕ, ನ್ಯೂಜಿಲೆಂಡ್ ವಿರುದ್ದ ಗೆದ್ದು ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿತ್ತು.
ಶನಿವಾರದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದ.ಆಫ್ರಿಕಾ 24 ಓವರ್‌ಗಳಲ್ಲಿ 97 ರನ್‌ಗೆ ಆಲೌಟಾಯಿತು. ಅಲಾನ ಕಿಂಗ್ ಕೇವಲ 18 ರನ್ ನೀಡಿ 7 ವಿಕೆಟ್ ಪಡೆದರು. ಸುಲಭ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 16.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ ಸುಲಭ ಗೆಲುವು ಸಾಧಿಸಿತು.
ಲೀಗ್ ಹಂತದ ಕೊನೆ ಪಂದ್ಯದಲ್ಲಿ ಭಾರತ ಭಾನುವಾರವಾದ ಇಂದು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಗೆದ್ದರೂ ಭಾರತ 4ನೇ ಸ್ಥಾನದಲ್ಲೇ ಉಳಿಯಲಿದೆ. ಭಾರತ ತಂಡವು ಕಳೆದ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್ ಟಿಕೆಟ್ ಕನ್ಫರ್ಮ್ ಮಾಡಿಕೊಂಡಿತ್ತು.
ಮತ್ತೊಂದು ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಸೆಣಸಾಡಲಿವೆ. ಈ ಪಂದ್ಯ ಕೂಡಾ ಔಪಚಾರಿಕ ಪಂದ್ಯ ಎನಿಸಿಕೊಂಡಿದೆ. ಇಂಗ್ಲೆಂಡ್ ತಂಡವು ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದ್ದು, ಕಿವೀಸ್ ತಂಡವು ಈಗಾಗಲೇ ಸೆಮೀಸ್ ರೇಸ್‌ನಿಂದ ಹೊರಬಿದ್ದಿದೆ. ಇದೀಗ ನ್ಯೂಜಿಲೆಂಡ್ ತಂಡವು ಕೊನೆಯ ಪಂದ್ಯ ಗೆದ್ದು ಗೆಲುವಿನೊಂದಿಗೆ ಅಭಿಯಾನ ಮುಗಿಸಲು ಎದುರು ನೋಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.