
ನವದೆಹಲಿ(ಅ.12): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಆಫ್ಘಾನಿಸ್ತಾನ ಎದುರಿನ ಪಂದ್ಯದಲ್ಲಿ 8 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ. ಈ ಮೂಲಕ ಪಂದ್ಯ ವೀಕ್ಷಿಸಲು ಬಂದಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಭಾರತ ಕ್ರಿಕೆಟ್ ತಂಡವು ಭರಪೂರ ಮನರಂಜನೆ ನೀಡಿತು. ಇನ್ನು ಇದಕ್ಕೂ ಮುಂದೆ ಹೋಗಿರುವ ಟೀಂ ಇಂಡಿಯಾ, ಇದೀಗ ಡೆಲ್ಲಿ& ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನಲ್ಲಿ ಅಟೆಂಡರ್ ಆಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ವಿನೋದ್ ಕುಮಾರ್ ಎನ್ನುವ ವ್ಯಕ್ತಿಗೆ ಟೀಂ ಇಂಡಿಯಾ ಆಟಗಾರರ ಆಟೋಗ್ರಾಫ್ ಇರುವ ಜೆರ್ಸಿಯನ್ನು ಗಿಫ್ಟ್ ಮಾಡುವ ಮೂಲಕ ಮತ್ತೊಮ್ಮೆ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಡೆಲ್ಲಿ& ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಷನಲ್ಲಿ ವಿನೋದ್ ಕುಮಾರ್ ಅವರು ಸುಮಾರು 40 ವರ್ಷಗಳಿಗೂ ಹೆಚ್ಚು ಕಾಲ ಅಟೆಂಡರ್ ಆಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಟೀಂ ಇಂಡಿಯಾ ವಿಶಿಷ್ಠ ಗೌರವ ಸಲ್ಲಿಸಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಸ್ಥಳೀಯ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಈ ವಿಶಿಷ್ಠ ಜೆರ್ಸಿಯನ್ನು ಹಸ್ತಾಂತರಿಸಿದರು.
ICC World Cup 2023 ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮುನ್ನ ಅದ್ಧೂರಿ ಸಮಾರಂಭ?
ಹೀಗಿತ್ತು ನೋಡಿ ಆ ಕ್ಷಣ:
ಇನ್ನು ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಪಂದ್ಯದ ಬಗ್ಗೆ ಹೇಳುವುದಾದರೇ, ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ತಂಡವು 63ಕ್ಕೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ, ನಾಯಕ ಹಶ್ಮತುಲ್ಲಾ ಶಾಹಿದಿ ಹಾಗೂ ಅಜ್ಮತುಲ್ಲಾ ಒಮರ್‌ಝಾಯ್ ತಂಡಕ್ಕೆ ಆಸರೆಯಾದರು. ಈ ಇಬ್ಬರು 129 ಎಸೆತದಲ್ಲಿ 121 ರನ್ ಜೊತೆಯಾಟವಾಡಿ ತಂಡವನ್ನು ದೊಡ್ಡ ಮೊತ್ತದತ್ತ ಕೊಂಡೊಯ್ಯುವ ಪ್ರಯತ್ನ ನಡೆಸಿದರು. ಆದರೆ ಅಜ್ಮತ್(62), ಹಶ್ಮತ್(80) ಔಟಾದ ಬಳಿಕ ಆಫ್ಘನ್ ಮಂಕಾಯಿತು. ಹಾಗೂ ಹೀಗೂ ಹೋರಾಡಿ 270 ರನ್ ದಾಟಿತು.
World Cup 2023: 'ಪಾಕ್ ಎದುರಿನ ಪಂದ್ಯಕ್ಕಿಂತ ನನ್ನಮ್ಮ ನನಗೆ ಮುಖ್ಯ': ಜಸ್ಪ್ರೀತ್ ಬುಮ್ರಾ ಹೀಗಂದಿದ್ದೇಕೆ?
ಇನ್ನು ಗುರಿ ಬೆನ್ನತ್ತಿದ ಟೀಂ ಇಂಡಿಯಾ ಕೇವಲ 2 ವಿಕೆಟ್ ಕಳೆದುಕೊಂಡು ಇನ್ನೂ 90 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ ಅಜೇಯ ಅರ್ಧಶತಕ ಬಾರಿಸಿ ತಂಡವನ್ನು ಅನಾಯಾಸವಾಗಿ ಗೆಲುವಿನ ದಡ ಸೇರುವಂತೆ ಮಾಡಿದರು.
ಇದೀಗ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ನೆರೆಯ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.