
ಬೆಂಗಳೂರು (ಜೂ.12): 2008ರ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಶಂಕಿತ ಉಗ್ರನಾಗಿದ್ದ ಅಬ್ದುಲ್ ಖಾದರ್ (60) ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ಖಾದರ್‌ಗೆ ಇಂದು ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿತ್ತು.
ತಕ್ಷಣ ಜೈಲು ಅಧಿಕಾರಿಗಳು ಅವರನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರಿಗೆ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆ ನಿವಾಸಿಯಾಗಿದ್ದ ಅಬ್ದುಲ್ ಖಾದರ್, 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದರು. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ (NIA) ಅವರನ್ನು ಬಂಧಿಸಿತ್ತು.
ಅಬ್ದುಲ್ ಖಾದರ್ ವಿರುದ್ಧದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಅಂತಿಮ ಹಂತದಲ್ಲಿದ್ದು, ಇನ್ನೂ ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟವಾಗುವ ಸಾಧ್ಯತೆ ಇತ್ತು. ಆದರೆ ನ್ಯಾಯಾಲಯದ ತೀರ್ಪು ಹೊರಬೀಳುವ ಮುನ್ನವೇ ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಈ ಘಟನೆ ಜೈಲು ಆಡಳಿತ ಮತ್ತು ತನಿಖಾ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ